ಬೆಳಗಾಯಿತು ವಾರ್ತೆ| www.belagayithu.in
ಬೆಂಗಳೂರು, ಮೇ 08: ರಾಜ್ಯದ ಹಲವೆಡೆ ಬಿಸಿಲಿನ ಅಬ್ಬರದ ನಡುವೆಯೂ ಕರಾವಳಿ ಸೇರಿ ಉತ್ತರ ಮತ್ತು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಅಥವಾ ಮಧ್ಯಮ ಪ್ರಮಾಣದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಮುಂದಿನ ಮೂರು ದಿನಗಳ ಕಾಲ ಕರ್ನಾಟಕದಲ್ಲಿ ಮಳೆ ಮುಂದುವರಿಯಲಿದ್ದು, ಮೇ 11ರ ವರೆಗೂ ಕೆಲವೆಡೆ ಗುಡುಗು ಸಹಿತ ಮಳೆಯನ್ನು ಅಂದಾಜಿಸಲಾಗಿದೆ. ಅದಾಗಿಯೂ ಕರಾವಳಿ ಸೇರಿ ಉತ್ತರ ಒಳನಾಡು ಭಾಗದ ಜಿಲ್ಲೆಗಳಲ್ಲಿ ತೀವ್ರ ತಾಪಮಾನ ಕಂಡುಬರಲಿದೆ ಎನ್ನಲಾಗಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಸಾಧಾರಣ ಮಳೆಯ ನಿರೀಕ್ಷೆ ಇದೆ. ಹಾಗೆಯೇ ಉತ್ತರ ಒಳನಾಡು ಭಾಗದ ಬೆಳಗಾವಿ, ಧಾರವಾಡ, ಗದಗ, ಹಾವೇರಿಯಲ್ಲಿಯೂ ವರುಣ ಆರ್ಭಟಿಸುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗದಲ್ಲಿಯೂ ಮಳೆ ಸಾಧ್ಯತೆ ಅಂದಾಜಿಸಲಾಗಿದೆ.
ಉಳಿದಂತೆ ಉತ್ತರ ಕನ್ನಡ, ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮೈಸೂರು, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ.





