ಎಸ್‌ಸಿ, ಎಸ್‌ಟಿ ಮೀಸಲಾತಿ ಹೆಚ್ಚಳ ರದ್ದು: ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ



ಒಟ್ಟು ಮೀಸಲಾತಿ ಶೇ.50ರಿಂದ ಶೇ.56ಕ್ಕೆ ಹೆಚ್ಚಿಸಿದ್ದ ಕಾಯ್ದೆ ಅಸಂವಿಧಾನಿಕ ಎಂದು ತೀರ್ಪು
ಬೆಳಗಾಯಿತು ವಾರ್ತೆ
ಬೆಂಗಳೂರು:
ಕರ್ನಾಟಕದಲ್ಲಿ ಪರಿಶಿಷ್ಟ ಜಾತಿ (ಎಸ್‌ಸಿ) ಮತ್ತು ಪರಿಶಿಷ್ಟ ಪಂಗಡಗಳ (ಎಸ್‌ಟಿ) ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಿ ಜಾರಿಗೊಳಿಸಲಾಗಿದ್ದ ಕಾಯ್ದೆಯನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿ ಮಹತ್ವದ ಆದೇಶ ಹೊರಡಿಸಿದೆ.
ಪರಿಶಿಷ್ಟ ಜಾತಿಯ ಮೀಸಲಾತಿಯನ್ನು ಶೇ.15ರಿಂದ ಶೇ.17ಕ್ಕೆ ಹಾಗೂ ಪರಿಶಿಷ್ಟ ಪಂಗಡದ ಮೀಸಲಾತಿಯನ್ನು ಶೇ.3ರಿಂದ ಶೇ.7ಕ್ಕೆ ಹೆಚ್ಚಿಸುವ ಮೂಲಕ ರಾಜ್ಯದಲ್ಲಿ ಒಟ್ಟು ಮೀಸಲಾತಿ ಪ್ರಮಾಣವನ್ನು ಶೇ.50ರಿಂದ ಶೇ.56ಕ್ಕೆ ಏರಿಸಲಾಗಿತ್ತು. ಈ ಹೆಚ್ಚಳವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಹಾಗೂ ನ್ಯಾಯಮೂರ್ತಿ ಕೆ.ಎಸ್. ಹೇಮಲೇಖಾ ಅವರಿದ್ದ ವಿಭಾಗೀಯ ಪೀಠ ಈ ತೀರ್ಪು ನೀಡಿದೆ.
ಶೇ.50ರ ಮಿತಿ ಉಲ್ಲಂಘನೆ
ಮೀಸಲಾತಿ ಪ್ರಮಾಣವನ್ನು ಶೇ.50ರ ಮಿತಿಯನ್ನು ಮೀರಿ ಹೆಚ್ಚಿಸಿರುವುದು ಸಂವಿಧಾನದ ಸಮಾನತೆಯ ತತ್ವಕ್ಕೆ ವಿರುದ್ಧವಾಗಿದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ರಾಜ್ಯ ಸರ್ಕಾರವು ಜನಸಂಖ್ಯೆಯ ಆಧಾರದ ಮೇಲೆ ಮೀಸಲಾತಿ ಹೆಚ್ಚಳವನ್ನು ಸಮರ್ಥಿಸಿಕೊಂಡಿದ್ದರೂ, ಅದರಿಂದ ಶೇ.50ರ ಮಿತಿಯನ್ನು ಮೀರುವುದಕ್ಕೆ ಅವಕಾಶ ದೊರೆಯುವುದಿಲ್ಲ ಎಂದು ಪೀಠ ಸ್ಪಷ್ಟಪಡಿಸಿದೆ.
ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರದ ಅವಧಿಯಲ್ಲಿ ಜಾರಿಗೊಳಿಸಲಾಗಿದ್ದ ಈ ಮೀಸಲಾತಿ ಹೆಚ್ಚಳದ ಕಾಯ್ದೆಯನ್ನು ಪ್ರಶ್ನಿಸಿ ಮಹೇಂದ್ರ ಕುಮಾರ್ ಮಿತ್ರಾ ಸೇರಿದಂತೆ ಅರ್ಜಿದಾರರು ನ್ಯಾಯಾಲಯದ ಮೊರೆ ಹೋಗಿದ್ದರು.
ಈ ತೀರ್ಪು ರಾಜ್ಯದ ಶಿಕ್ಷಣ ಸಂಸ್ಥೆಗಳ ಪ್ರವೇಶ ಹಾಗೂ ಸರ್ಕಾರಿ ಉದ್ಯೋಗಗಳಲ್ಲಿನ ಎಸ್‌ಸಿ, ಎಸ್‌ಟಿ ಮೀಸಲಾತಿ ವ್ಯವಸ್ಥೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ. ಮುಂದಿನ ಕಾನೂನು ಕ್ರಮಗಳು ಮತ್ತು ಸರ್ಕಾರದ ನಿಲುವಿನ ಕುರಿತು ಹೆಚ್ಚಿನ ಸ್ಪಷ್ಟತೆ ನಿರೀಕ್ಷಿಸಲಾಗಿದೆ.


Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles