ನ.8ರಂದು 34ನೇ ರಾಜ್ಯ ಮಟ್ಟದ ಸಂಸ್ಥಾಪನಾ ದಿನಾಚರಣೆ


ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ; ವಿವಿಧ ಕ್ಷೇತ್ರಗಳ ಸಾಧಕರಿಗೆ ರಾಜ್ಯ ಮಟ್ಟದ ಪ್ರಶಸ್ತಿ ಪ್ರದಾನ
ಸಮಾಜದ ಶೈಕ್ಷಣಿಕ, ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿಗೆ ಒತ್ತು; ಸರ್ಕಾರದ ಗಮನ ಸೆಳೆಯಲು ಕಾರ್ಯಕ್ರಮ
ಬೆಳಗಾಯಿತು ವಾರ್ತೆ
ಬಳ್ಳಾರಿ: ನದಾಫ್/ಪಿಂಜಾರ ಸಮಾಜದ ಸಾಧಕರು ಹಾಗೂ ಪ್ರತಿಭಾವಂತರನ್ನು ಗುರುತಿಸಿ ಮುಖ್ಯವಾಹಿನಿಗೆ ತರುವ ಉದ್ದೇಶದಿಂದ ಕರ್ನಾಟಕ ರಾಜ್ಯ ನದಾಫ್/ಪಿಂಜಾರ ಸಂಘದ ರಾಜ್ಯ ಘಟಕವು ಬಳ್ಳಾರಿ ಜಿಲ್ಲಾ ಘಟಕದ ಸಹಯೋಗದಲ್ಲಿ ನವೆಂಬರ್ 8ರಂದು ಬಳ್ಳಾರಿಯ ಶ್ರೀ ಮಹರ್ಷಿ ವಾಲ್ಮೀಕಿ ಭವನದಲ್ಲಿ 34ನೇ ರಾಜ್ಯ ಮಟ್ಟದ ಸಂಸ್ಥಾಪನಾ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ರಾಜ್ಯಾಧ್ಯಕ್ಷ ಹೆಚ್ ಜಲೀಲ್ ಸಾಬ್ ಅವರು ಹೇಳಿದರು.
ನಗರದ ಪತ್ರಿಕಾ ಭವನದಲ್ಲಿ ಭಾನುವಾರ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತಬಮಾನಡಿದ ಅವರು,
ಕರ್ನಾಟಕದಲ್ಲಿ ಸುಮಾರು 20 ಲಕ್ಷಕ್ಕೂ ಅಧಿಕ ಜನಸಂಖ್ಯೆ ಹೊಂದಿರುವ ನದಾಫ್/ಪಿಂಜಾರ ಸಮಾಜವು ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕವಾಗಿ ಹಿಂದುಳಿದಿದೆ. ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ಪಡೆಯುವಲ್ಲಿ ತಾಂತ್ರಿಕ ಸಮಸ್ಯೆಗಳು ಹಾಗೂ ಸೂಕ್ತ ಪ್ರೋತ್ಸಾಹದ ಕೊರತೆಯಿಂದ ಸಮಾಜದ ಜನರು ವಂಚಿತರಾಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸಮಾಜದ ಅಭಿವೃದ್ಧಿ ಹಾಗೂ ಹಕ್ಕುಗಳಿಗಾಗಿ ಜಾಗೃತಿ ಮೂಡಿಸುವುದು ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿದೆ ಎಂದು ತಿಳಿಸಿದರು.
ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ
ಸಮಾಜದ ಅಭಿವೃದ್ಧಿಗಾಗಿ ದಿವಂಗತ ಹಾಜಿ ಎಚ್. ಇಬ್ರಾಹಿಂ ಸೇರಿದಂತೆ ಹಲವು ಗಣ್ಯರು ಶ್ರಮಿಸಿ ಸಂಘವನ್ನು ಸ್ಥಾಪಿಸಿದ್ದಾರೆ. ಅವರ ಆಶಯದಂತೆ ಕಳೆದ ಏಳು ವರ್ಷಗಳಿಂದ ರಾಜ್ಯ ಘಟಕವು ಸಮಾಜದ ಏಳಿಗೆಗಾಗಿ ವಿವಿಧ ಕಾರ್ಯಕ್ರಮಗಳನ್ನು ನಡೆಸುತ್ತಿದೆ.
ಬಡ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಪಡೆಯಲು ಆರ್ಥಿಕ ನೆರವು ನೀಡಲಾಗುತ್ತಿದೆ. ಪ್ರಥಮ ಮತ್ತು ದ್ವಿತೀಯ ಪಿಯುಸಿ ವಾಣಿಜ್ಯ ಹಾಗೂ ವಿಜ್ಞಾನ ವಿಭಾಗಗಳ ಅರ್ಹ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡುವುದರ ಜತೆಗೆ, ಕನ್ನಡ ಮಾಧ್ಯಮದ ವಿದ್ಯಾರ್ಥಿಗಳಿಗೆ ಉಚಿತ ಊಟ, ವಸತಿ ಹಾಗೂ ಶಿಕ್ಷಣ ಒದಗಿಸುವ ಯೋಜನೆಗಳನ್ನು ರೂಪಿಸಲಾಗಿದೆ. ಈ ಯೋಜನೆಗಳಡಿ ಶಿಕ್ಷಣ ಪಡೆದ ವಿದ್ಯಾರ್ಥಿಗಳು ಶೇ.85ರಿಂದ 97ಕ್ಕೂ ಅಧಿಕ ಅಂಕಗಳನ್ನು ಗಳಿಸಿ ಸಮಾಜಕ್ಕೆ ಕೀರ್ತಿ ತಂದಿದ್ದಾರೆ ಎಂದು ಸಂಘ ತಿಳಿಸಿದೆ.
ಸಾಧಕರಿಗೆ ಪ್ರಶಸ್ತಿ ಪ್ರದಾನ
ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ‘ಪ್ರತಿಭಾ ಪುರಸ್ಕಾರ’ ನೀಡಿ ಗೌರವಿಸಲಾಗುತ್ತದೆ. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರಿಗೆ, ಉತ್ತಮ ಮಹಿಳಾ ಶಿಕ್ಷಕಿಗೆ ಹಾಗೂ ಪ್ರಗತಿಪರ ರೈತರಿಗೆ ರಾಜ್ಯ ಮಟ್ಟದ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ.
ಬಳ್ಳಾರಿ ಜಿಲ್ಲೆಯಲ್ಲಿ ಗಾದಿ ತಯಾರಿಕೆ ವೃತ್ತಿಯಲ್ಲಿ ತೊಡಗಿರುವ ಹಿರಿಯರನ್ನು ‘ಕಾಯಕ ಯೋಗಿ’ ಪ್ರಶಸ್ತಿಗೆ ಆಯ್ಕೆ ಮಾಡಿ ಗೌರವಿಸಲಾಗುತ್ತದೆ. ಅಲ್ಲದೆ, ಕೋಮು ಸೌಹಾರ್ದತೆ ಹಾಗೂ ಭಾವೈಕ್ಯತೆಯೊಂದಿಗೆ ಸಮಾಜ ಸೇವೆ ಸಲ್ಲಿಸುತ್ತಿರುವ ಇತರ ಸಮಾಜಗಳ ಗಣ್ಯರಿಗೆ ಜಿಲ್ಲಾ ಮಟ್ಟದ ‘ಭಾವೈಕ್ಯ’ ಪ್ರಶಸ್ತಿ ನೀಡಿ ಸನ್ಮಾನಿಸಲಾಗುತ್ತದೆ.
ಸರ್ಕಾರಕ್ಕೆ ವಿವಿಧ ಬೇಡಿಕೆಗಳು
ಸರ್ಕಾರದ ಆದೇಶದಂತೆ ಧಾರವಾಡ ವಿಶ್ವವಿದ್ಯಾಲಯದಿಂದ ಸಮಾಜದ ಕುಲಶಾಸ್ತ್ರೀಯ ಅಧ್ಯಯನ ಪೂರ್ಣಗೊಂಡಿದ್ದು, ವರದಿ ಆಧರಿಸಿ ಮುಂದಿನ ಕ್ರಮ ಕೈಗೊಳ್ಳಬೇಕಿದೆ. ಗಾದಿ, ಹಗ್ಗ, ಕಂಣಿ, ಮಿಣಿ, ಚಿಕ್ಕ ಹಾಗೂ ಎತ್ತುಗಳ ಶೃಂಗಾರ ತಯಾರಿಕೆಯಲ್ಲಿ ತೊಡಗಿರುವ ಕಾರ್ಮಿಕರನ್ನು ಅಸಂಘಟಿತ ಕಾರ್ಮಿಕರೆಂದು ಘೋಷಿಸಲಾಗಿದ್ದು, ಕಾರ್ಮಿಕ ಕಾರ್ಡ್ ಪಡೆದು ಸರ್ಕಾರದ ಸೌಲಭ್ಯಗಳನ್ನು ಬಳಸಿಕೊಳ್ಳುವ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ.
ನದಾಫ್/ಪಿಂಜಾರ ಹಾಗೂ ಇತರ 13 ಜಾತಿಗಳ ಅಭಿವೃದ್ಧಿ ನಿಗಮದ ಕಾರ್ಯಾರಂಭ, ನದಾಫ್/ಪಿಂಜಾರ ಅಧ್ಯಯನ ಪೀಠ ಸ್ಥಾಪನೆ ಹಾಗೂ ಇದಕ್ಕಾಗಿ ₹2.50 ಕೋಟಿ ಕಾರ್ಪಸ್ ನಿಧಿ ಒದಗಿಸುವಂತೆ ಸರ್ಕಾರಕ್ಕೆ ಹಲವು ಬಾರಿ ಮನವಿ ಸಲ್ಲಿಸಲಾಗಿದೆ. ಆದರೆ, ಈವರೆಗೆ ಬೇಡಿಕೆಗಳು ಈಡೇರಿಲ್ಲ ಎಂದು ಸಂಘದ ಪದಾಧಿಕಾರಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಒಳಮೀಸಲಾತಿ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯ
ಕುಲಶಾಸ್ತ್ರೀಯ ಅಧ್ಯಯನದ ವರದಿ ಆಧರಿಸಿ ಒಳಮೀಸಲಾತಿ ಕಲ್ಪಿಸುವುದು, ಪ್ರವರ್ಗ-1 ಪ್ರಮಾಣಪತ್ರ ಪಡೆಯುವಲ್ಲಿನ ಸಮಸ್ಯೆಗಳನ್ನು ನಿವಾರಿಸುವುದು, ವೃತ್ತಿಪರ ತರಬೇತಿ ಒದಗಿಸುವುದು, ಉನ್ನತ ಶಿಕ್ಷಣ ಪ್ರವೇಶಕ್ಕೆ ಶುಲ್ಕ ರಿಯಾಯಿತಿ ನೀಡುವುದು ಹಾಗೂ ರಾಜಕೀಯ ಕ್ಷೇತ್ರದ ಉನ್ನತ ಹುದ್ದೆಗಳಲ್ಲಿ ಸೂಕ್ತ ಪ್ರಾತಿನಿಧ್ಯ ಕಲ್ಪಿಸುವುದು ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಮುಂದಿನ ದಿನಗಳಲ್ಲಿ ಹೋರಾಟ ನಡೆಸಲು ಸಂಘ ನಿರ್ಧರಿಸಿದೆ ಎಂದರು.

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಮೌಲಾಲಿ, ರಿಯಾಜ್ ಸಲೀಂ ,ದಾದ ಖಲಂದರ್, ಅಲ್ಲಬಕಾಷ, ಪಿ ಅಮೀನಾ, ಮಸ್ತಾನ್ ವಲಿ ,ಮಾಬು ಸಾಬ್, ನೂರ್ ಅಹಮದ್ ,ನೂರ್ ಬಾಷಾ ಸೇರಿದಂತೆ ಸಂಘದ ಪದಾಧಿಕಾರಿಗಳು ಇದ್ದರು.



Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles