ಎರಡು ವರ್ಷದಲ್ಲಿ ‘ಬ್ರ್ಯಾಂಡ್ ಬಳ್ಳಾರಿ’ ನಿರ್ಮಾಣದ ಸಂಕಲ್ಪ
ಬೆಳಗಾಯಿತು ವಾರ್ತೆ
ಬಳ್ಳಾರಿ: ಜಿಲ್ಲೆಯಲ್ಲಿ ಉಂಟಾಗಿರುವ ಮಳೆ ಕೊರತೆ ಹಾಗೂ ಬರ ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಿ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದು ನೂತನ ಸಚಿವ ಬಿ. ನಾಗೇಂದ್ರ ತಿಳಿಸಿದರು.
ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಯಾವ ಖಾತೆಯನ್ನು ನೀಡಿದರೂ ಅದನ್ನು ಸಮರ್ಥವಾಗಿ ನಿಭಾಯಿಸಲು ಬದ್ಧನಾಗಿದ್ದೇನೆ. “ಸದ್ಯ ನಾನು ಏಟು ತಿಂದು ಹುಲಿಯಾಗಿರುವೆ” ಎಂದು ಪ್ರತಿಕ್ರಿಯಿಸಿದರು.
ಮುಖ್ಯಮಂತ್ರಿಗಳು ಸಂಪುಟದ ಎಲ್ಲ ಸಚಿವರಿಗೆ ತಮ್ಮ ತಮ್ಮ ಜಿಲ್ಲೆಗಳಲ್ಲಿ ಬರ ಪರಿಸ್ಥಿತಿಯನ್ನು ಪರಿಶೀಲಿಸುವಂತೆ ನಿರ್ದೇಶನ ನೀಡಿದ್ದು, ಅದರಂತೆ ಬಳ್ಳಾರಿ ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ಈಗಾಗಲೇ ಬರ ವೀಕ್ಷಣೆ ನಡೆಸಲಾಗಿದೆ ಎಂದು ಹೇಳಿದರು. ಶುಕ್ರವಾರ ಸಂಡೂರು ತಾಲ್ಲೂಕಿನ ವಿಠಲಾಪುರ, ಕಂಪ್ಲಿ ತಾಲ್ಲೂಕಿನ ಸಿಂಧಿಗೇರಿ ಹಾಗೂ ಸಿರುಗುಪ್ಪ ಭಾಗಗಳಲ್ಲಿ ಬರ ವೀಕ್ಷಣೆ ನಡೆಸಲಾಗುವುದು ಎಂದರು.
ಜಿಲ್ಲೆಯಲ್ಲಿ ಶೇ.40ರಷ್ಟು ಮಳೆ ಕೊರತೆಯಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಸ್ಥಳೀಯ ಅಧಿಕಾರಿಗಳ ವರದಿ ಸಲ್ಲಿಕೆಯಾದ ಬಳಿಕ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಮಾನದಂಡಗಳ ಆಧಾರದ ಮೇಲೆ ಬಳ್ಳಾರಿ ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸುವ ಕುರಿತು ಸರ್ಕಾರ ತೀರ್ಮಾನ ಕೈಗೊಳ್ಳಲಿದೆ ಎಂದು ತಿಳಿಸಿದರು.
ವಾಲ್ಮೀಕಿ ಪುತ್ಥಳಿ ಅನಾವರಣದ ಕುರಿತು ಮುಖ್ಯಮಂತ್ರಿ ಅವರೊಂದಿಗೆ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು. ಇದಕ್ಕೆ ಅಗತ್ಯವಿರುವ ಅನುಮತಿಯನ್ನು ಸಚಿವ ಸಂಪುಟದಲ್ಲಿ ಪಡೆಯಲಾಗುವುದು ಎಂದರು.
ತುಂಗಭದ್ರಾ ಜಲಾಶಯದಲ್ಲಿ 80 ಟಿಎಂಸಿ ನೀರು ಸಂಗ್ರಹವಾದ ಬಳಿಕ ನೀರಾವರಿ ಸಲಹಾ ಸಮಿತಿ ಸಭೆ ಕರೆಯಲಾಗುವುದು ಎಂದು ಹೇಳಿದರು.
ಬಳ್ಳಾರಿ ಜಿಲ್ಲೆಯಲ್ಲಿ ಅಂತರಾಷ್ಟ್ರೀಯ ಮಟ್ಟದ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ ಉದ್ದೇಶ ಹೊಂದಿದ್ದು, ಮುಂದಿನ ಎರಡು ವರ್ಷಗಳಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಅನುಷ್ಠಾನಗೊಳಿಸಿ “ಬ್ರ್ಯಾಂಡ್ ಬಳ್ಳಾರಿ”ಯಾಗಿ ಜಿಲ್ಲೆಯನ್ನು ರೂಪಿಸುವ ಗುರಿ ಹೊಂದಿರುವುದಾಗಿ ಸಚಿವ ಬಿ. ನಾಗೇಂದ್ರ ತಿಳಿಸಿದರು.





