ಕನಕದುರ್ಗಮ್ಮ ದೇವಿಗೆ ವಿಶೇಷ ಪೂಜೆ; ಬಸವೇಶ್ವರ, ಜಗಜೀವನ ರಾಮ್, ಅಂಬೇಡ್ಕರ್, ಕನಕದಾಸರಿಗೆ ಗೌರವ ನಮನ
ಬೆಳಗಾಯಿತು ವಾರ್ತೆ
ಬಳ್ಳಾರಿ: ಬಿಜೆಪಿ ವತಿಯಿಂದ ಹಮ್ಮಿಕೊಂಡಿರುವ ‘ಬಳ್ಳಾರಿ ಚಲೋ’ ಪಾದಯಾತ್ರೆಯ ಸಮಾರೋಪ ಸಮಾರಂಭಕ್ಕೂ ಮುನ್ನ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ನಗರದ ವಿವಿಧ ಪ್ರಮುಖ ಸ್ಥಳಗಳಿಗೆ ಭೇಟಿ ನೀಡಿ ಮಹನೀಯರ ಪುತ್ಥಳಿಗಳಿಗೆ ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದರು.
ನಗರದ ಕನಕ ದುರ್ಗಮ್ಮ ದೇವಿ ದೇವಸ್ಥಾನಕ್ಕೆ ಭೇಟಿ ನೀಡಿದ ವಿಜಯೇಂದ್ರ ಅವರು ದೇವಿಗೆ ವಿಶೇಷ ಪೂಜೆ ಸಲ್ಲಿಸಿ, ನಾಡಿನ ಜನತೆಗೆ ಒಳಿತಾಗಲಿ ಎಂದು ಪ್ರಾರ್ಥಿಸಿದರು. ಬಳಿಕ ನಗರದ ಮೋತಿ ವೃತ್ತದಲ್ಲಿರುವ ಬಸವೇಶ್ವರರ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು.
ನಂತರ ಬಾಬು ಜಗಜೀವನ ರಾಮ್, ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಕನಕದಾಸರ ಪುತ್ಥಳಿಗಳಿಗೆ ಮಾಲಾರ್ಪಣೆ ಮಾಡಿ ಗೌರವ ಅರ್ಪಿಸಿದರು. ಸಾಮಾಜಿಕ ಸಮಾನತೆ, ಶೋಷಿತರ ಹಕ್ಕುಗಳು ಹಾಗೂ ಸಮಾಜ ಸುಧಾರಣೆಯಂತಹ ಮೌಲ್ಯಗಳನ್ನು ಪ್ರತಿಪಾದಿಸಿದ ಮಹನೀಯರನ್ನು ಸ್ಮರಿಸುವ ಮೂಲಕ ಬಳ್ಳಾರಿ ಚಲೋ ಸಮಾರೋಪಕ್ಕೆ ಮುನ್ನ ಬಿಜೆಪಿ ನಾಯಕರು ಗೌರವ ಸಲ್ಲಿಸಿದರು.
ಈ ಸಂದರ್ಭದಲ್ಲಿ ಶಾಸಕ ಗಾಲಿ ಜನಾರ್ದನ ರೆಡ್ಡಿ, ಮಾಜಿ ಶಾಸಕ ಸೋಮಶೇಖರ ರೆಡ್ಡಿ, ಬಿಜೆಪಿ ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ಮೋಕ ಸೇರಿದಂತೆ ಪಕ್ಷದ ವಿವಿಧ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.





