ಬೆಳಗಾಯಿತು ವಾರ್ತೆ
ಬಳ್ಳಾರಿ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬ ವಿದ್ಯುತ್ ಕಂಬದಲ್ಲಿರುವ ಟ್ರಾನ್ಸ್ಫಾರ್ಮರ್ ಏರಿ ಕುಳಿತು ಹೈಡ್ರಾಮ ಸೃಷ್ಟಿಸಿದ ಘಟನೆ ನಗರದ ಬ್ರೂಸ್ಪೇಟೆ ಪೊಲೀಸ್ ಠಾಣೆ ಎದುರು ನಡೆದಿದೆ.
ಇಸ್ಮಾಯಿಲ್ ಎಂಬಾತನೇ ಟ್ರಾನ್ಸ್ಫಾರ್ಮರ್ ಏರಿ ಕುಳಿತು ಆತಂಕ ಮೂಡಿಸಿದ ವ್ಯಕ್ತಿ ಎಂದು ತಿಳಿದುಬಂದಿದೆ. ಕೌಟುಂಬಿಕ ವಿಚಾರಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಗೆ ಬಂದಿದ್ದ ವೇಳೆ ಕ್ಷಣಾರ್ಧದಲ್ಲಿ ಈ ಘಟನೆ ನಡೆದಿದ್ದು, ಸ್ಥಳದಲ್ಲಿದ್ದ ಪೊಲೀಸರು ಹಾಗೂ ಸಾರ್ವಜನಿಕರಲ್ಲಿ ಆತಂಕ ಉಂಟಾಯಿತು.
ಇಸ್ಮಾಯಿಲ್ಗೆ ಇಬ್ಬರು ಪತ್ನಿಯರಿದ್ದು, ಯಾರೊಂದಿಗೆ ಇರಬೇಕು ಎಂಬ ವಿಚಾರದಲ್ಲಿ ಉಂಟಾದ ಗಲಾಟೆ ಹೈಡ್ರಾಮಕ್ಕೆ ಕಾರಣವಾಗಿದೆ ಎನ್ನಲಾಗಿದೆ. ‘ಯಾರೂ ನನಗೆ ಬೇಡ’ ಎಂದು ಹೇಳಿಕೊಂಡು ಆತ ಟ್ರಾನ್ಸ್ಫಾರ್ಮರ್ ಏರಿ ಕುಳಿತಿದ್ದ ಎನ್ನಲಾಗಿದೆ.
ಇಸ್ಮಾಯಿಲ್ ವಿರುದ್ಧ ಹಲವು ಪ್ರಕರಣಗಳು ದಾಖಲಾಗಿವೆ ಎಂದು ತಿಳಿದುಬಂದಿದ್ದು, ಘಟನೆಯಿಂದಾಗಿ ಸ್ಥಳದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ವಿಷಯ ತಿಳಿದ ಕೂಡಲೇ ವಿದ್ಯುತ್ ಸಂಪರ್ಕವನ್ನು ಸ್ಥಗಿತಗೊಳಿಸಿದ ಹಿನ್ನೆಲೆಯಲ್ಲಿ ಸಂಭವಿಸಬಹುದಾಗಿದ್ದ ಅನಾಹುತ ತಪ್ಪಿದೆ.
ನಂತರ ಪೊಲೀಸರು ಇಸ್ಮಾಯಿಲ್ನನ್ನು ಮನವೊಲಿಸಿ, ಎಚ್ಚರಿಕೆಯಿಂದ ಕೆಳಗಿಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಳಿಕ ಆತನನ್ನು ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಲಾಗಿದೆ ಎಂದು ತಿಳಿದುಬಂದಿದೆ.





