ಬೆಳಗಾಯಿತು ವಾರ್ತೆ
ಬಳ್ಳಾರಿ: ಉತ್ತರಾಖಂಡದ ಹಾಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ವೇದಿಕೆಯನ್ನು ಮನುವಾದದ ಮನಸ್ಥಿತಿಯಿಂದ ಶುದ್ಧೀಕರಣ ಆಚರಣೆ ನಡೆಸಿದ ಘಟನೆಯನ್ನು ಖಂಡಿಸಿ ಹಾಗೂ ಈ ಕೃತ್ಯದಲ್ಲಿ ಭಾಗಿಯಾದವರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿ ಬಳ್ಳಾರಿ ಜಿಲ್ಲಾ ಪ್ರಚಾರ ಸಮಿತಿ ವತಿಯಿಂದ ಶಾಂತಿಯುತ ಮೌನ ಪ್ರತಿಭಟನೆ ನಡೆಸಲಾಯಿತು.
ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿರುವ ಮಹಾತ್ಮ ಗಾಂಧೀಜಿ ಅವರ ಪ್ರತಿಮೆ ಬಳಿ ನಡೆದ ಪ್ರತಿಭಟನೆಯಲ್ಲಿ, ಘಟನೆಯನ್ನು ಖಂಡಿಸಿದ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ಎಫ್ಐಆರ್ ದಾಖಲಿಸಿರುವುದನ್ನೂ ಕಾಂಗ್ರೆಸ್ ಮುಖಂಡರು ಖಂಡಿಸಿದರು.
ಕೆಪಿಸಿಸಿ ಪ್ರಚಾರ ಸಮಿತಿಯ ಆದೇಶದ ಮೇರೆಗೆ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಕೆಪಿಸಿಸಿ ಪ್ರಚಾರ ಸಮಿತಿಯ ಜಿಲ್ಲಾ ಉಸ್ತುವಾರಿ ಆನಂದ್ ಕುಮಾರ್, ಬಳ್ಳಾರಿ ನಗರ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಲ್ಲಂ ಪ್ರಶಾಂತ್, ಜಿಲ್ಲಾ ನಗರ ಪ್ರಚಾರ ಸಮಿತಿ ಅಧ್ಯಕ್ಷ ಜಿ.ಎಸ್. ಈರನಗೌಡ, ಗ್ಯಾರಂಟಿ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಚಿದಾನಂದಪ್ಪ, ಹಿರಿಯ ಮುಖಂಡರಾದ ಎಲ್. ಮಾರೆಣ್ಣ, ಗುಜ್ಜಲ ಗಾದಿಲಿಂಗಪ್ಪ, ರುದ್ರಪ್ಪ, ಅಲಿವೇಲು ಸುರೇಶ್, ಸಣ್ಣ ನಾಗರಾಜ್, ನಟರಾಜ್ ಸೇರಿದಂತೆ ಸಣ್ಣ ಹೊನ್ನೂರಪ್ಪ, ಜ್ಯೋತಿ ಹಾಗೂ ಇತರ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.





