ಬೆಳಗಾಯಿತು ವಾರ್ತೆ
ಬಳ್ಳಾರಿ: ಬಳ್ಳಾರಿ ನಗರ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ಅಲ್ಲಂ ಪ್ರಶಾಂತ್ ಅವರನ್ನು ಎರಡನೇ ಅವಧಿಗೆ ಮರುನೇಮಕ ಮಾಡಲಾಗಿದೆ. ಈ ಕುರಿತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಆದೇಶ ಹೊರಡಿಸಿದ್ದಾರೆ.
ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷವನ್ನು ತಳಮಟ್ಟದಿಂದ ಮತ್ತಷ್ಟು ಬಲಪಡಿಸುವುದರ ಜೊತೆಗೆ, ಕಾಂಗ್ರೆಸ್ ಪಕ್ಷದ ತತ್ವ–ಸಿದ್ಧಾಂತಗಳನ್ನು ಪಾಲಿಸಬೇಕು. ಮುಂಬರುವ ದಿನಗಳಲ್ಲಿ ಪಕ್ಷವನ್ನು ಮತ್ತೆ ರಾಜ್ಯದಲ್ಲಿ ಅಧಿಕಾರಕ್ಕೆ ತರಲು ಶಕ್ತಿ ಮೀರಿ ಶ್ರಮಿಸಬೇಕು ಎಂದು ಕೆ.ಸಿ. ವೇಣುಗೋಪಾಲ್ ಸೂಚಿಸಿದ್ದಾರೆ.
ಅಲ್ಲಂ ಪ್ರಶಾಂತ್ ಅವರ ಹಿಂದಿನ ಅವಧಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಹಲವು ಮುಖಂಡರು ಅರ್ಜಿ ಸಲ್ಲಿಸಿದ್ದರು. ತಮ್ಮದೇ ಆದ ರಾಜಕೀಯ ನಾಯಕರ ಮೂಲಕ ಅಧ್ಯಕ್ಷ ಸ್ಥಾನ ಪಡೆಯಲು ಹಲವರು ಪ್ರಯತ್ನ ನಡೆಸಿದ್ದರು ಎನ್ನಲಾಗಿದೆ.
ಬುಡಾ ಮಾಜಿ ಅಧ್ಯಕ್ಷ ಹಾಗೂ ವಕ್ಫ್ ಬೋರ್ಡ್ ಮಾಜಿ ಅಧ್ಯಕ್ಷ ಹುಮಾಯೂನ್ ಖಾನ್, ಮಹಾನಗರ ಪಾಲಿಕೆ ಮಾಜಿ ಉಪ ಮೇಯರ್ ಬೆಣಕಲ್ ಬಸವರಾಜ್, ಪಾಲಿಕೆ ಮೇಯರ್ ಪಿ. ಗಾದೆಪ್ಪ, ಕೆಪಿಸಿಸಿ ಮಾಧ್ಯಮ ವಕ್ತಾರ ವೆಂಕಟೇಶ್ ಹೆಗಡೆ ಸೇರಿದಂತೆ ಹಲವು ಮುಖಂಡರು ಅಧ್ಯಕ್ಷ ಸ್ಥಾನಕ್ಕೆ ಅರ್ಜಿ ಸಲ್ಲಿಸಿದ್ದರು.
ಅಭ್ಯರ್ಥಿಗಳ ಅರ್ಜಿ ಹಾಗೂ ಪಕ್ಷದ ಸಂಘಟನಾ ಬೆಳವಣಿಗೆ ಸೇರಿದಂತೆ ವಿವಿಧ ವಿಚಾರಗಳನ್ನು ಪರಿಶೀಲಿಸಿದ ಹೈಕಮಾಂಡ್, ಮತ್ತೊಂದು ಅವಧಿಗೆ ಅಲ್ಲಂ ಪ್ರಶಾಂತ್ ಅವರನ್ನೇ ಮರುನೇಮಕ ಮಾಡುವ ಮೂಲಕ ಅಧ್ಯಕ್ಷ ಸ್ಥಾನದ ಆಯ್ಕೆಗೆ ತೆರೆ ಎಳೆದಿದೆ.
ಮರುನೇಮಕಗೊಂಡ ಬಳಿಕ ಮಾತನಾಡಿದ ಅಲ್ಲಂ ಪ್ರಶಾಂತ್, ಎರಡನೇ ಅವಧಿಗೆ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲು ಅವಕಾಶ ಕಲ್ಪಿಸಿದ ಪಕ್ಷದ ವರಿಷ್ಠರು, ಗಣ್ಯರು, ಮುಖಂಡರು ಹಾಗೂ ನಾಯಕರಿಗೆ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದ್ದಾರೆ. ಪಕ್ಷದ ಎಲ್ಲ ಮುಖಂಡರು ಹಾಗೂ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಂಘಟನೆಯನ್ನು ಮತ್ತಷ್ಟು ಬಲಪಡಿಸಲು ಪ್ರಾಮಾಣಿಕವಾಗಿ ಶ್ರಮಿಸುವುದಾಗಿ ಹೇಳಿದ್ದಾರೆ.





