ಮಾದಿಗ ಹಾಗೂ ಓಲೆ ಮಾದಿಗ ಸಮುದಾಯದ ಮೇಲಿನ ದೌರ್ಜನ್ಯಕ್ಕೆ ಕಡಿವಾಣ ಹಾಕಲು ಆಗ್ರಹ

ಬಳ್ಳಾರಿ: ರಾಜ್ಯದಲ್ಲಿ ಮಾದಿಗ ಹಾಗೂ ಓಲೆ ಮಾದಿಗ ಸಮುದಾಯದ ಮೇಲೆ ನಡೆಯುತ್ತಿರುವ ಕೊಲೆ, ಅಪಹರಣ ಹಾಗೂ ಅತ್ಯಾಚಾರದಂತಹ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಹಾಕಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ಪ್ರದೇಶ ಮಾದಿಗ ಸಂಘದ ರಾಜ್ಯಾಧ್ಯಕ್ಷ ಪ್ರಭುರಾಜ್ ಆಗ್ರಹಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ಪತ್ರಿಕಾ ಭವನದಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾದಿಗ ಹಾಗೂ ಓಲೆ ಮಾದಿಗ ಸಮುದಾಯದ ಮೇಲೆ ನಡೆಯುತ್ತಿರುವ ದೌರ್ಜನ್ಯ ಪ್ರಕರಣಗಳ ಕುರಿತು ರಾಜ್ಯ ಸರ್ಕಾರ ಹಾಗೂ ಗೃಹ ಇಲಾಖೆ ಗಂಭೀರವಾಗಿ ಸ್ಪಂದಿಸಬೇಕು ಎಂದು ಒತ್ತಾಯಿಸಿದರು.

ರಾಯಚೂರು ಜಿಲ್ಲೆಯಲ್ಲಿ ಓಲೆ ಮಾದಿಗ ಸಮುದಾಯಕ್ಕೆ ಸೇರಿದ 11 ಜನರ ಸರಣಿ ಕೊಲೆ ನಡೆದಿರುವ ಆರೋಪಗಳಿದ್ದು, ಈ ಪ್ರಕರಣಗಳ ಕುರಿತು ಸಮಗ್ರ ತನಿಖೆ ನಡೆಸಿ ಸತ್ಯಾಸತ್ಯತೆಯನ್ನು ಬಹಿರಂಗಪಡಿಸಬೇಕು. ತುಮಕೂರು ಜಿಲ್ಲೆಯಲ್ಲಿ ಸಿಂಹಾದ್ರಿ ಎಂಬ ಯುವಕನ ಕೊಲೆ ಪ್ರಕರಣದಲ್ಲಿಯೂ ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಈ ಪ್ರಕರಣಗಳಿಗೆ ಸಂಬಂಧಿಸಿದಂತೆ ದಲಿತ ಸಂಘಟನೆಗಳ ವತಿಯಿಂದ ಪ್ರತಿಭಟನೆ ನಡೆಸಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರೂ ಇದುವರೆಗೆ ನಿರೀಕ್ಷಿತ ಮಟ್ಟದಲ್ಲಿ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಮಾದಿಗ ಹಾಗೂ ಓಲೆ ಮಾದಿಗ ಸಮುದಾಯಕ್ಕೆ ನ್ಯಾಯ ದೊರಕದಿದ್ದರೆ ಮುಖ್ಯಮಂತ್ರಿ ಹಾಗೂ ಗೃಹ ಸಚಿವರ ಕಚೇರಿ ಮುಂದೆ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಪ್ರಕರಣಗಳ ತನಿಖೆಗಾಗಿ ಎಸ್‌ಐಟಿ ಅಥವಾ ಸಿಐಡಿ ಸೇರಿದಂತೆ ಯಾವುದೇ ತನಿಖಾ ಸಂಸ್ಥೆಯನ್ನು ನಿಯೋಜಿಸಿದರೂ ನಿಷ್ಪಕ್ಷಪಾತವಾಗಿ ತನಿಖೆ ನಡೆಸಿ ಸತ್ಯಾಂಶ ಹೊರಬರಬೇಕು. ಮಾದಿಗ ಹಾಗೂ ಓಲೆ ಮಾದಿಗ ಸಮುದಾಯದ ಜನರಿಗೆ ನ್ಯಾಯ ಮತ್ತು ರಕ್ಷಣೆ ಒದಗಿಸುವ ನಿಟ್ಟಿನಲ್ಲಿ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಪ್ರಭುರಾಜ್ ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಎಸ್. ಮಲ್ಲಿಯಪ್ಪ, ಶಿವಶಂಕರ್ ಎರಗೂಡಿ, ಪ್ರತಾಪ್ ಅಸುಂಡಿ, ಆಡಿವ ಸ್ವಾಮಿ, ಲಕ್ಷ್ಮಣ ಬಂಡಾರಿ, ಕಪ್ಪಾಗಲ್ ಉಳಿಯಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles