ಬೆಳಗಾಯಿತು ವಾರ್ತೆ
ಬಳ್ಳಾರಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕಾರ್ಯಕ್ರಮವೊಂದರಲ್ಲಿ ಅಣಕು ಪ್ರದರ್ಶನದ ಮೂಲಕ ಅಪಮಾನಿಸಿದ್ದಾರೆ ಎಂದು ಆರೋಪಿಸಿ ಬಿಜೆಪಿ ಬಳ್ಳಾರಿ ಜಿಲ್ಲಾ ಯುವ ಮೋರ್ಚಾ ವತಿಯಿಂದ ನಗರದ ರಾಯಲ್ ಸರ್ಕಲ್ ಬಳಿ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನಾಕಾರರು ರಾಹುಲ್ ಗಾಂಧಿ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಕ್ರಮವೊಂದರಲ್ಲಿ ಹಿರಿಯ ಮಹಿಳೆಯೊಬ್ಬರನ್ನು ಕುರ್ಚಿಯಲ್ಲಿ ಕೂರಿಸಲು ನೆರವಾದ ಸಂದರ್ಭವನ್ನು ಅಣಕು ಮಾಡುವ ಮೂಲಕ ರಾಹುಲ್ ಗಾಂಧಿ ಅವರು ವ್ಯಂಗ್ಯವಾಡಿದ್ದಾರೆ ಎಂದು ಆರೋಪಿಸಿದ ಪ್ರತಿಭಟನಾಕಾರರು, ಇಂತಹ ನಡೆ ಖಂಡನೀಯ ಎಂದು ಹೇಳಿದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ಮೋಕ, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಶರಣಗೌಡ ಆರ್., ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಡವಿ ಸ್ವಾಮಿ, ಜಿಲ್ಲಾ ಉಪಾಧ್ಯಕ್ಷೆ ಪುಷ್ಪಲತಾ, ಮಹಿಳಾ ಮೋರ್ಚಾ ಅಧ್ಯಕ್ಷೆ ಹಂಪಿ ರಮಣ, ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ನವೀನ್ ಕುಮಾರ್, ಟಿ.ಎಚ್. ನವೀನ್ ಸೇರಿದಂತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.




