ಬೆಳಗಾಯಿತು ವಾರ್ತೆ
ಸಂಡೂರು: ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ನಂದಿಹಳ್ಳಿ ಸ್ನಾತಕೋತ್ತರ ಕೇಂದ್ರದ ವತಿಯಿಂದ ಶುಕ್ರವಾರ ಆಯೋಜಿಸಿದ್ದ 10 ಕಿ.ಮೀ. ಗುಡ್ಡಗಾಡು ಓಟದ ಸ್ಪರ್ಧೆಯಲ್ಲಿ ವಿವಿಧ ಕಾಲೇಜುಗಳ 69 ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡರು.
ಸಂಡೂರಿನ ಪೊಲೀಸ್ ಠಾಣೆ ಮುಂಭಾಗದಲ್ಲಿ ಬೆಳಿಗ್ಗೆ 6.30ಕ್ಕೆ ಹಂಪಿ ಕನ್ನಡ ವಿಶ್ವವಿದ್ಯಾಲಯದ ಹಿರಿಯ ಉಪನ್ಯಾಸಕ ಡಾ. ಗೋವಿಂದ ಅವರು ಓಟಕ್ಕೆ ಚಾಲನೆ ನೀಡಿದರು. ಅಲ್ಲಿಂದ ಆರಂಭಗೊಂಡ ಓಟವು ನಂದಿಹಳ್ಳಿ ಸ್ನಾತಕೋತ್ತರ ಕೇಂದ್ರದ ಮಯೂರ ಭವನದ ಮುಂಭಾಗದಲ್ಲಿ ಮುಕ್ತಾಯಗೊಂಡಿತು.
ದೈಹಿಕ, ಮಾನಸಿಕ ಸದೃಢತೆಗೆ ಕ್ರೀಡೆ ಅಗತ್ಯ
ಓಟಕ್ಕೆ ಚಾಲನೆ ನೀಡಿ ಮಾತನಾಡಿದ ಡಾ. ಗೋವಿಂದ ಅವರು, ದೈಹಿಕ ಮತ್ತು ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಲು ಕ್ರೀಡೆ ಹಾಗೂ ಆರೋಗ್ಯಕರ ಚಟುವಟಿಕೆಗಳು ಅತ್ಯಗತ್ಯ. ವಿದ್ಯಾರ್ಥಿಗಳು ಶಿಕ್ಷಣದ ಜತೆಗೆ ಕ್ರೀಡೆಗೂ ಆದ್ಯತೆ ನೀಡಬೇಕು. ಕ್ರೀಡೆಯು ಆತ್ಮವಿಶ್ವಾಸ, ಶಿಸ್ತು ಹಾಗೂ ಸವಾಲುಗಳನ್ನು ಎದುರಿಸುವ ಸಾಮರ್ಥ್ಯವನ್ನು ಬೆಳೆಸುತ್ತದೆ ಎಂದು ತಿಳಿಸಿದರು.
ವಿದ್ಯಾರ್ಥಿಗಳು ಸ್ಥಳೀಯ ಕಾಲೇಜು ಮಟ್ಟದಿಂದ ಅಂತರ್ಕಾಲೇಜು, ಅಂತರವಿಶ್ವವಿದ್ಯಾಲಯ, ರಾಜ್ಯ ಹಾಗೂ ರಾಷ್ಟ್ರಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಬೇಕು. ಇಂತಹ ಸ್ಪರ್ಧೆಗಳನ್ನು ಯಶಸ್ಸಿನ ಮೆಟ್ಟಿಲುಗಳನ್ನಾಗಿ ಬಳಸಿಕೊಂಡು ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಪುರುಷರ ವಿಭಾಗದಲ್ಲಿ ಬಳ್ಳಾರಿ ಕಾಲೇಜಿಗೆ ಪ್ರಥಮ ಸ್ಥಾನ
ಸ್ಪರ್ಧೆಯ ಪುರುಷರ ವಿಭಾಗದಲ್ಲಿ ಬಳ್ಳಾರಿಯ ಎಸ್ಜಿಆರ್ಸಿಎಂ ಮಹಾವಿದ್ಯಾಲಯ ಪ್ರಥಮ ಸ್ಥಾನ ಗಳಿಸಿದರೆ, ಗಂಗಾವತಿಯ ಭಾಗ್ಯಮ್ಮ ಗ್ರಾಮೀಣ ಮಹಾವಿದ್ಯಾಲಯ ದ್ವಿತೀಯ ಸ್ಥಾನ ಪಡೆದುಕೊಂಡಿತು. ಮಹಿಳೆಯರ ವಿಭಾಗದಲ್ಲಿ ಬಳ್ಳಾರಿಯ ಸರಳಾದೇವಿ ಮಹಾವಿದ್ಯಾಲಯ ಪ್ರಥಮ ಸ್ಥಾನ ತನ್ನದಾಗಿಸಿಕೊಂಡಿತು.
ಗಣ್ಯರ ಉಪಸ್ಥಿತಿ
ಈ ಸಂದರ್ಭದಲ್ಲಿ ನಂದಿಹಳ್ಳಿ ಸ್ನಾತಕೋತ್ತರ ಕೇಂದ್ರದ ನಿರ್ದೇಶಕ ಡಾ. ಎಚ್. ತಿಪ್ಪೇಸ್ವಾಮಿ, ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ಮತ್ತು ಕ್ರೀಡಾ ವಿಭಾಗದ ಮುಖ್ಯಸ್ಥ ಡಾ. ಸಂಪತ್ ಕುಮಾರ್, ಸಹಾಯಕ ಕ್ರೀಡಾ ನಿರ್ದೇಶಕ ಶಿವರಾಮಪ್ಪ ರಾಗಿ, ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ. ಗುರುಬಸವರಾಜ್, ಡಾ. ಮುತ್ತೇಗೌಡ, ಡಾ. ಕವಿತಾ ಸಂಘನ ಗೌಡರ್, ಪಂಪನಗೌಡ, ಶಿವಕುಮಾರ್, ಪ್ರದೀಪ್ ಹಾಗೂ ಗೌತಮ್ ಉಪಸ್ಥಿತರಿದ್ದರು.
ದೈಹಿಕ ಶಿಕ್ಷಣ ಸಂಶೋಧನಾ ವಿದ್ಯಾರ್ಥಿಗಳಾದ ಹುಲಿರಾಜ್ ಬೊಮ್ಮಘಟ್ಟ, ರಮೇಶ್ ಕುಪ್ಪಿನಕೇರಿ, ರಮೇಶ್ ಗೌಡರ ಹಾಗೂ ಪಾಪಯ್ಯ ಕಣಿವೆಹಳ್ಳಿ ಸೇರಿದಂತೆ ವಿಶ್ವವಿದ್ಯಾಲಯದ ಉಪನ್ಯಾಸಕರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಭಾಗವಹಿಸಿದ್ದರು.





