ನೇಮಕಾತಿ ಪ್ರಕ್ರಿಯೆಯಲ್ಲಿ ತೊಂದರೆಗೊಳಗಾದ ಅಭ್ಯರ್ಥಿಗಳಿಗೆ ನ್ಯಾಯ ಒದಗಿಸಲಿ
ಬೆಳಗಾಯಿತು ವಾರ್ತೆ
ಬಳ್ಳಾರಿ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಳಕ್ಕೆ ಸಂಬಂಧಿಸಿದ ಕಾನೂನು ತೊಡಕುಗಳನ್ನು ನಿವಾರಿಸಲು ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಿ, ಅರ್ಹ ಅಭ್ಯರ್ಥಿಗಳಿಗೆ ನ್ಯಾಯ ಒದಗಿಸಬೇಕು ಎಂದು ಬಳ್ಳಾರಿ ವಕೀಲರ ಸಂಘದ ಮಾಜಿ ಅಧ್ಯಕ್ಷರು ಹಾಗೂ ಹಿರಿಯ ವಕೀಲ ಜೈರಾಮ್ ಒತ್ತಾಯಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ಪತ್ರಿಕಾ ಭವನದಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಎಸ್ಸಿ–ಎಸ್ಟಿ ಮೀಸಲಾತಿ ಹೆಚ್ಚಳಕ್ಕೆ ಕೈಗೊಂಡ ಕ್ರಮಗಳು ಈ ಸಮುದಾಯಗಳ ದೀರ್ಘಕಾಲದ ಹೋರಾಟದ ಫಲವಾಗಿವೆ. ಆದರೆ, ಮೀಸಲಾತಿ ಹೆಚ್ಚಳದ ಕಾನೂನುಬದ್ಧತೆ ಕುರಿತು ಉಂಟಾಗಿರುವ ತೊಡಕುಗಳಿಂದ ಅಭ್ಯರ್ಥಿಗಳ ಭವಿಷ್ಯದ ಮೇಲೆ ಪರಿಣಾಮ ಬೀರುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ ಎಂದರು.
ಮೀಸಲಾತಿ ಹೆಚ್ಚಳದ ಆಧಾರದ ಮೇಲೆ ವಿವಿಧ ಸರ್ಕಾರಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಭಾಗವಹಿಸಿದ್ದ ಅಭ್ಯರ್ಥಿಗಳು, ವಿಶೇಷವಾಗಿ ಶಿಕ್ಷಕ ಹುದ್ದೆಗಳ ಆಕಾಂಕ್ಷಿಗಳು, ಪ್ರಸ್ತುತ ಅನಿಶ್ಚಿತತೆಯನ್ನು ಎದುರಿಸುವಂತಾಗಿದೆ. ಹಲವು ವರ್ಷಗಳ ಕಾಲ ವಿದ್ಯಾಭ್ಯಾಸ ಮಾಡಿ, ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಿ ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ನೇಮಕಾತಿ ರದ್ದತಿ ಅಥವಾ ಬದಲಾವಣೆಯಿಂದ ಅನ್ಯಾಯವಾಗಬಾರದು. ಅವರ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ಸೂಕ್ತ ಕಾನೂನು ಪರಿಹಾರ ಕಂಡುಕೊಳ್ಳಬೇಕು ಎಂದು ಆಗ್ರಹಿಸಿದರು.
ಮೀಸಲಾತಿ ಹೆಚ್ಚಳದ ವಿಚಾರದಲ್ಲಿ ಸಂಬಂಧಿತ ಆಯೋಗಗಳ ಶಿಫಾರಸುಗಳು, ಕಾನೂನು ಅಂಶಗಳು ಹಾಗೂ ನ್ಯಾಯಾಲಯದ ನಿರ್ದೇಶನಗಳನ್ನು ಸಮಗ್ರವಾಗಿ ಪರಿಶೀಲಿಸಿ ಸರ್ಕಾರ ಮುಂದಿನ ಕ್ರಮ ಕೈಗೊಳ್ಳಬೇಕು. ನ್ಯಾಯಾಲಯದ ಆದೇಶಗಳನ್ನು ಗೌರವಿಸುತ್ತಲೇ, ಸಂವಿಧಾನದ ಚೌಕಟ್ಟಿನಲ್ಲಿ ಮೀಸಲಾತಿಯ ಪ್ರಯೋಜನ ಅರ್ಹ ಸಮುದಾಯಗಳಿಗೆ ತಲುಪುವಂತೆ ನೋಡಿಕೊಳ್ಳುವುದು ಸರ್ಕಾರದ ಜವಾಬ್ದಾರಿಯಾಗಿದೆ ಎಂದು ತಿಳಿಸಿದರು.
ಎಸ್ಸಿ–ಎಸ್ಟಿ ಮೀಸಲಾತಿ ಹೆಚ್ಚಳಕ್ಕಾಗಿ ವಿವಿಧ ಸಂಘಟನೆಗಳು, ಸಾಮಾಜಿಕ ಮುಖಂಡರು ಹಾಗೂ ಸಮುದಾಯದ ಪ್ರತಿನಿಧಿಗಳು ರಾಜ್ಯದಾದ್ಯಂತ ಹೋರಾಟ ನಡೆಸಿದ್ದಾರೆ. ಬೆಂಗಳೂರಿನ ಫ್ರೀಡಂ ಪಾರ್ಕ್ ಸೇರಿದಂತೆ ವಿವಿಧೆಡೆ ನಡೆದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ ಮೀಸಲಾತಿ ಹೆಚ್ಚಳದ ನಿರ್ಧಾರ ಕೈಗೊಳ್ಳಲಾಗಿತ್ತು. ಈ ಹೋರಾಟದ ಆಶಯವನ್ನು ಸರ್ಕಾರ ಮರೆಯಬಾರದು. ಮೀಸಲಾತಿ ಹೆಚ್ಚಳದ ಅನುಷ್ಠಾನಕ್ಕೆ ಎದುರಾಗಿರುವ ಕಾನೂನು ತೊಡಕುಗಳನ್ನು ನಿವಾರಿಸಲು ಸುಪ್ರೀಂ ಕೋರ್ಟ್ನಲ್ಲಿ ಸಮರ್ಥವಾಗಿ ವಾದ ಮಂಡಿಸಬೇಕು ಎಂದು ಹೇಳಿದರು.
ಮೀಸಲಾತಿ ವಿಚಾರವನ್ನು ರಾಜಕೀಯ ದೃಷ್ಟಿಯಿಂದ ನೋಡದೆ, ಸಾಮಾಜಿಕ ನ್ಯಾಯ ಮತ್ತು ಸಮಾನ ಅವಕಾಶಗಳ ನೆಲೆಯಲ್ಲಿ ಪರಿಗಣಿಸಬೇಕು. ಕಾನೂನು ತಜ್ಞರ ಸಲಹೆ ಪಡೆದು, ಅಗತ್ಯವಿದ್ದಲ್ಲಿ ಮೇಲ್ಮನವಿ ಸಲ್ಲಿಸುವ ಮೂಲಕ ಅರ್ಹ ಅಭ್ಯರ್ಥಿಗಳಿಗೆ ನ್ಯಾಯ ದೊರಕಿಸಿಕೊಡಲು ಸರ್ಕಾರ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಜೈರಾಮ್ ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಡಿಎಸ್ಎಸ್ ರಾಜ್ಯ ಸಂಚಾಲಕ ಎ. ಮಾನಯ್ಯ, ಎಲ್. ಮಾರೆಣ್ಣ, ಮುದಿಮಲಯ್ಯ, ಪೃಥ್ವಿರಾಜ್, ಜಗನ್ನಾಥ್, ತಳವಾರ್ ದುರುಗಪ್ಪ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.





