ಎಸ್‌ಐಆರ್‌ ಪ್ರಕ್ರಿಯೆ ರದ್ದುಪಡಿಸಿಅರ್ಹ ಮತದಾರರ ಹಕ್ಕು ರಕ್ಷಣೆಗೆ ಒತ್ತಾಯ

ಬೆಳಗಾಯಿತು ವಾರ್ತೆ
ಬಳ್ಳಾರಿ
: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ರದ್ದುಪಡಿಸಬೇಕು. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್ ಅವರನ್ನು ಹುದ್ದೆಯಿಂದ ವಜಾಗೊಳಿಸಿ, ಅವರ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಡಿ.ಜಿ. ಸಾಗರ್ ಬಣ) ಬಳ್ಳಾರಿ ಜಿಲ್ಲಾ ಸಮಿತಿ ವತಿಯಿಂದ ಶುಕ್ರವಾರ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನಾ ಧರಣಿ ನಡೆಸಲಾಯಿತು.

ಸಮಿತಿಯ ರಾಜ್ಯ ಸಂಘಟನಾ ಸಂಚಾಲಕ ಎ. ಮಾನಯ್ಯ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ, ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಹಲವು ಲೋಪದೋಷಗಳಿದ್ದು, ಇದರಿಂದ ಅರ್ಹ ಮತದಾರರು ತಮ್ಮ ಮತದಾನದ ಹಕ್ಕು ಕಳೆದುಕೊಳ್ಳುವ ಆತಂಕ ಎದುರಿಸುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನದ ಹಕ್ಕು ಅತ್ಯಂತ ಮಹತ್ವದ್ದಾಗಿದ್ದು, ಅರ್ಹ ಮತದಾರರನ್ನು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಕೈಬಿಡಬಾರದು ಎಂದು ಒತ್ತಾಯಿಸಿದರು.

ಚುನಾವಣಾ ಆಯೋಗದ ಕಾರ್ಯವೈಖರಿ ಕುರಿತು ಆಕ್ಷೇಪ

ಎಸ್‌ಐಆರ್‌ ಪ್ರಕ್ರಿಯೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ ನಿರ್ಧಾರಗಳು ಮತ್ತು ಕಾರ್ಯವೈಖರಿಯ ಬಗ್ಗೆ ಹಲವು ಅನುಮಾನಗಳಿವೆ. ಮುಖ್ಯ ಚುನಾವಣಾ ಆಯುಕ್ತರು ಇತರ ಇಬ್ಬರು ಚುನಾವಣಾ ಆಯುಕ್ತರೊಂದಿಗೆ ಸಮಾಲೋಚನೆ ನಡೆಸದೆ ಏಕಪಕ್ಷೀಯವಾಗಿ ನಿರ್ಧಾರ ಕೈಗೊಂಡಿದ್ದಾರೆ ಎಂಬ ವರದಿಗಳು ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಕಾರಣವಾಗಿವೆ ಎಂದು ಮುಖಂಡರು ತಿಳಿಸಿದರು. ಈ ಹಿನ್ನೆಲೆಯಲ್ಲಿ ಎಸ್‌ಐಆರ್‌ ಪ್ರಕ್ರಿಯೆಯ ಪಾರದರ್ಶಕತೆ ಮತ್ತು ಕಾನೂನುಬದ್ಧತೆಯ ಬಗ್ಗೆ ಸಮಗ್ರ ಪರಿಶೀಲನೆ ನಡೆಸಬೇಕು ಎಂದು ಆಗ್ರಹಿಸಿದರು.

ಹೊಸ ಮತದಾರರ ನೋಂದಣಿಗೆ ಸಂಬಂಧಿಸಿದ ಫಾರಂ-6ಕ್ಕೆ ತಿದ್ದುಪಡಿ ತಂದು, ಎಸ್‌ಐಆರ್‌ ಅವಧಿಯಲ್ಲಿ ಹೆಚ್ಚುವರಿ ಘೋಷಣಾ ಪತ್ರಕ್ಕೆ ಸಹಿ ಪಡೆಯುವ ಕ್ರಮವು ಮತದಾರರಿಗೆ ಅನಗತ್ಯ ತೊಂದರೆ ಉಂಟುಮಾಡುತ್ತಿದೆ ಎಂದು ಸಮಿತಿ ಮುಖಂಡರು ಆಕ್ಷೇಪ ವ್ಯಕ್ತಪಡಿಸಿದರು. ಇಂತಹ ಕ್ರಮಗಳಿಂದ ಅರ್ಹ ಮತದಾರರ ಹಕ್ಕುಗಳಿಗೆ ಧಕ್ಕೆಯಾಗುವ ಸಾಧ್ಯತೆಯಿದ್ದು, ಮತದಾರರ ಹಿತಾಸಕ್ತಿಯನ್ನು ಕಾಪಾಡುವ ನಿಟ್ಟಿನಲ್ಲಿ ಚುನಾವಣಾ ಆಯೋಗ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಎಸ್‌ಐಆರ್‌ ಪ್ರಕ್ರಿಯೆಯಿಂದ ದೇಶದಾದ್ಯಂತ ಕೋಟ್ಯಂತರ ಮತದಾರರ ಹಕ್ಕುಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ಆರೋಪಿಸಿದ ಪ್ರತಿಭಟನಾಕಾರರು, ಪ್ರಕ್ರಿಯೆಯನ್ನು ತಕ್ಷಣ ರದ್ದುಪಡಿಸಬೇಕು. ಚುನಾವಣಾ ಆಯೋಗದ ನಿರ್ಧಾರಗಳ ಕುರಿತು ನ್ಯಾಯಸಮ್ಮತ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್ ಅವರನ್ನು ಹುದ್ದೆಯಿಂದ ವಜಾಗೊಳಿಸಿ, ಅವರ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ರಾಜ್ಯ ಚಲುವಾದಿ ಮಹಾಸಭಾದ ಉಪಾಧ್ಯಕ್ಷ ಸಿ. ನರಸಪ್ಪ, ಜಿಲ್ಲಾ ಸಂಘಟನಾ ಸಂಚಾಲಕರಾದ ದೇವದಾಸ, ಕೆ.ಎಚ್. ಆಂಜನೇಯ, ಮುಖಂಡರಾದ ಬಿ. ರಮೇಶ್, ಟಿ.ಎಂ. ಎರಿಸ್ವಾಮಿ, ತಾಲೂಕು ಸಂಚಾಲಕರಾದ ಎಚ್. ಮಲ್ಲಪ್ಪ, ದೊಡ್ಡಬಸಪ್ಪ, ಭೀಮೇಶಿ, ಎಸ್. ವೀರೇಶ, ಎಚ್. ವೀರೇಶ್, ಜಗದೀಶ್, ರಾಮಯ್ಯ, ಕುಮಾರ್, ಬಸವರಾಜ ಸೇರಿದಂತೆ ವಿವಿಧ ತಾಲೂಕುಗಳ ಸಂಘಟನಾ ಸಂಚಾಲಕರು ಹಾಗೂ ಸಮಿತಿಯ ಮುಖಂಡರು ಭಾಗವಹಿಸಿದ್ದರು.


Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles