ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಧ್ವನಿಯಾಗಲು ಅವಕಾಶ ನೀಡಿ:


ನಾಲ್ಕು ದಶಕಗಳ ಶಿಕ್ಷಣ ಕ್ಷೇತ್ರದ ಅನುಭವದೊಂದಿಗೆ ಈಶಾನ್ಯ ಕರ್ನಾಟಕ ಶಿಕ್ಷಕರ ಕ್ಷೇತ್ರದಿಂದ ಸ್ಪರ್ಧೆ
ಬೆಳಗಾಯಿತು ವಾರ್ತೆ
ಬಳ್ಳಾರಿ
: ಕಲ್ಯಾಣ ಕರ್ನಾಟಕ ಭಾಗದ ಶಿಕ್ಷಕರ ಸಮಸ್ಯೆಗಳ ಪರಿಹಾರ, ಶಿಕ್ಷಣ ಕ್ಷೇತ್ರದ ಅಭಿವೃದ್ಧಿ ಹಾಗೂ ಶಿಕ್ಷಕರ ಹಕ್ಕುಗಳ ರಕ್ಷಣೆಗಾಗಿ ವಿಧಾನ ಪರಿಷತ್ತಿನಲ್ಲಿ ಧ್ವನಿ ಎತ್ತುವ ಉದ್ದೇಶದಿಂದ ಮುಂಬರುವ ಈಶಾನ್ಯ ಕರ್ನಾಟಕ (ಕಲ್ಯಾಣ ಕರ್ನಾಟಕ) ಶಿಕ್ಷಕರ ಮತಕ್ಷೇತ್ರದ ಚುನಾವಣೆಯಲ್ಲಿ ಅಖಿಲ ಕರ್ನಾಟಕ ಶಿಕ್ಷಕರ ಸಂಘದ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವುದಾಗಿ ಶಿವಶಂಕರ ಅಣ್ಣಪ್ಪ ತರನಹಳ್ಳಿ ತಿಳಿಸಿದರು.

ನಗರದ ಪತ್ರಿಕಾ ಭವನದಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಲ್ಕು ದಶಕಗಳಿಗೂ ಹೆಚ್ಚು ಕಾಲ ಶಿಕ್ಷಣ ಕ್ಷೇತ್ರದಲ್ಲಿ ಶಿಕ್ಷಕರಾಗಿ ಹಾಗೂ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕರಾಗಿ ಸೇವೆ ಸಲ್ಲಿಸಿದ್ದೇನೆ. ಶಿಕ್ಷಕರ ಸಮಸ್ಯೆಗಳಿಗೆ ಪರಿಣಾಮಕಾರಿ ಪರಿಹಾರ ಕಲ್ಪಿಸಲು ಮತ್ತು ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಲು ಅವಕಾಶ ನೀಡಬೇಕು. ಈ ಹಿನ್ನೆಲೆಯಲ್ಲಿ ಶಿಕ್ಷಕ ಮತದಾರರು ತಮ್ಮ ಪ್ರಥಮ ಆದ್ಯತೆಯ ಮತವನ್ನು ನೀಡಿ ಬೆಂಬಲಿಸಬೇಕು ಎಂದು ಮನವಿ ಮಾಡಿದರು.

ಶಾಲೆಗಳು ಕೇವಲ ಪಾಠ ಬೋಧಿಸುವ ಕೇಂದ್ರಗಳಾಗಿರದೆ, ಸಾಮಾಜಿಕ ಪರಿವರ್ತನೆಗೆ ನಾಂದಿ ಹಾಡುವ ತಾಣಗಳಾಗಬೇಕು ಎಂಬ ಆಶಯದೊಂದಿಗೆ ಕಾರ್ಯನಿರ್ವಹಿಸುತ್ತಿದ್ದೇನೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಿಕ್ಷಣದ ಗುಣಮಟ್ಟ ಹೆಚ್ಚಿಸುವ ಉದ್ದೇಶದಿಂದ ಸರ್ಕಾರಿ ಹಾಗೂ ಖಾಸಗಿ ಶಾಲೆಗಳ ಶಿಕ್ಷಕರಿಗಾಗಿ ತರಬೇತಿ ಶಿಬಿರಗಳು, ಕಾರ್ಯಾಗಾರಗಳು, ವಿಚಾರ ಸಂಕಿರಣಗಳು ಮತ್ತು ಉಪನ್ಯಾಸ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಈ ಕಾರ್ಯಕ್ರಮಗಳಲ್ಲಿ ಹೈಕೋರ್ಟ್‌ನ ಮಾಜಿ ನ್ಯಾಯಮೂರ್ತಿ ಹಾಗೂ ರಾಜ್ಯಪಾಲರಾಗಿದ್ದ ರಾಮ ಜೋಯಿಸ್, ಶಿಕ್ಷಣ ತಜ್ಞ ಗುರುರಾಜ ಕರ್ಜಗಿ, ಡಾ. ವೇಣುಗೋಪಾಲ್, ಅರವಿಂದ್ ಜತ್ತಿ ಸೇರಿದಂತೆ ಹಲವು ಗಣ್ಯರು ಮಾರ್ಗದರ್ಶನ ನೀಡಿದ್ದಾರೆ ಎಂದು ವಿವರಿಸಿದರು.

ಬೀದರ್ ಮತ್ತು ಕಲಬುರಗಿ ಜಿಲ್ಲೆಗಳ ವಿವಿಧ ಶಾಲಾ-ಕಾಲೇಜುಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನ ಹಾಗೂ ಪರೀಕ್ಷಾ ಸಿದ್ಧತೆ ಸೇರಿದಂತೆ ಹಲವು ಶೈಕ್ಷಣಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಕರ್ನಾಟಕ ರಾಜ್ಯ ಪಠ್ಯಪುಸ್ತಕ ಪರಿಶೀಲನಾ ಸಮಿತಿಯ ಸದಸ್ಯನಾಗಿಯೂ ಸೇವೆ ಸಲ್ಲಿಸಿದ್ದು, ಶಾಲಾ ಶಿಕ್ಷಕರಿಗೆ ವೇತನಾನುದಾನ ದೊರಕಿಸಿಕೊಡುವ ನಿಟ್ಟಿನಲ್ಲಿ ಮೂರು ದಶಕಗಳಿಗೂ ಹೆಚ್ಚು ಕಾಲ ನಿರಂತರ ಹೋರಾಟ ನಡೆಸಿದ್ದೇನೆ ಎಂದರು.

ಇನ್ಫೋಸಿಸ್ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಸಹಕಾರದೊಂದಿಗೆ ಬೀದರ್ ಜಿಲ್ಲೆಯ ಶಾಲೆಗಳಿಗೆ ಉಚಿತ ಕಂಪ್ಯೂಟರ್‌ಗಳು, ಪುಸ್ತಕಗಳು, ಸ್ಮಾರ್ಟ್ ಬೋರ್ಡ್‌ಗಳು ಹಾಗೂ ಇತರ ಶೈಕ್ಷಣಿಕ ಸೌಲಭ್ಯಗಳನ್ನು ಒದಗಿಸುವ ಕಾರ್ಯದಲ್ಲಿಯೂ ತೊಡಗಿಸಿಕೊಂಡಿದ್ದೇನೆ. ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷನಾಗಿ, ಕನ್ನಡ ಪ್ರಾಧಿಕಾರದ ಸದಸ್ಯನಾಗಿ ಹಾಗೂ ಪ್ರಜಾವಾಣಿ, ಡೆಕ್ಕನ್ ಹೆರಾಲ್ಡ್ ಸೇರಿದಂತೆ ವಿವಿಧ ಪತ್ರಿಕೆಗಳಲ್ಲಿ ವರದಿಗಾರನಾಗಿ ಕಾರ್ಯನಿರ್ವಹಿಸಿದ ಅನುಭವವಿದೆ. ಶಿಕ್ಷಣ, ಸಾಹಿತ್ಯ, ಮಾಧ್ಯಮ ಮತ್ತು ಸಾಮಾಜಿಕ ಸೇವಾ ಕ್ಷೇತ್ರಗಳಲ್ಲಿ ಪಡೆದ ಅನುಭವವನ್ನು ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಬಳಸಿಕೊಳ್ಳುವ ಉದ್ದೇಶ ಹೊಂದಿದ್ದೇನೆ ಎಂದು ತಿಳಿಸಿದರು.

ಕಲ್ಯಾಣ ಕರ್ನಾಟಕದ ಶಿಕ್ಷಕರು ಎದುರಿಸುತ್ತಿರುವ ಸಮಸ್ಯೆಗಳಿಗೆ ಸೂಕ್ತ ಪರಿಹಾರ ದೊರಕಿಸಲು ಹಾಗೂ ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ವೇಗ ನೀಡಲು ತಮ್ಮ ಅಭ್ಯರ್ಥಿತನಕ್ಕೆ ಶಿಕ್ಷಕ ಬಂಧುಗಳು ಬೆಂಬಲ ನೀಡಬೇಕು. ತಮ್ಮ ಪ್ರಥಮ ಆದ್ಯತೆಯ ಮತವನ್ನು ನೀಡಿ ವಿಧಾನ ಪರಿಷತ್ತಿನಲ್ಲಿ ಶಿಕ್ಷಕರ ಪರವಾಗಿ ಧ್ವನಿ ಎತ್ತಲು ಅವಕಾಶ ಕಲ್ಪಿಸಬೇಕು ಎಂದು ಶಿವಶಂಕರ ತರನಹಳ್ಳಿ ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಅಶ್ವಥ್ ಸೂಗೂರ್, ಹುಂದಾಯ ಹಾಗೂ ಸಂಗಮೇಶ ಜವಾದಿ ಉಪಸ್ಥಿತರಿದ್ದರು.


Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles