ಬೆಳಗಾಯಿತು ವಾರ್ತೆ
ಬಳ್ಳಾರಿ: ನಗರದ ಹೊರವಲಯದ ಬೈಪಾಸ್ ರಸ್ತೆಯಲ್ಲಿ ಗುರುವಾರ ಬೆಳಗಿನ ಜಾವ ಸಂಭವಿಸಿದ ಭೀಕರ ಹಿಟ್ ಆ್ಯಂಡ್ ರನ್ ಅಪಘಾತದಲ್ಲಿ ಕುರಿಗಾಹಿಯೊಬ್ಬರು ಸೇರಿದಂತೆ 18 ಕುರಿಗಳು ಮೃತಪಟ್ಟಿವೆ.
ಬೆಳಗಿನ ಜಾವ ಸುಮಾರು 4 ಗಂಟೆಯ ವೇಳೆಗೆ ಕುರಿಗಳನ್ನು ರಸ್ತೆಯಲ್ಲಿ ಕರೆದೊಯ್ಯುತ್ತಿದ್ದ ಸಂದರ್ಭದಲ್ಲಿ ವೇಗವಾಗಿ ಬಂದ ಅಪರಿಚಿತ ವಾಹನ ಕುರಿಗಳ ಹಿಂಡಿಗೆ ಡಿಕ್ಕಿ ಹೊಡೆದು ಪರಾರಿಯಾಗಿದೆ. ಡಿಕ್ಕಿಯ ರಭಸಕ್ಕೆ ಕುರಿಗಾಹಿ ಹಾಗೂ 18 ಕುರಿಗಳು ಸ್ಥಳದಲ್ಲೇ ಮೃತಪಟ್ಟಿವೆ ಎನ್ನಲಾಗಿದೆ.
ಅಪಘಾತದಲ್ಲಿ ಮೃತಪಟ್ಟ ಕುರಿಗಾಹಿಯನ್ನು ಬೆಳಗಾವಿ ಮೂಲದ ಮಾಯಪ್ಪ ಎಂದು ಗುರುತಿಸಲಾಗಿದೆ. ವಾಹನದ ಡಿಕ್ಕಿಯ ತೀವ್ರತೆಗೆ ಕುರಿಗಳು ರಸ್ತೆಯುದ್ದಕ್ಕೂ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದು, ಸ್ಥಳದಲ್ಲಿ ಹೃದಯವಿದ್ರಾವಕ ದೃಶ್ಯ ಕಂಡುಬಂದಿದೆ.
ಘಟನೆಯಿಂದ ಕುರಿಗಾಹಿ ಕುಟುಂಬಕ್ಕೆ ಆಘಾತ ಎದುರಾಗಿದ್ದು, ಕುರಿಗಳನ್ನು ಕಳೆದುಕೊಂಡು ಅಪಾರ ನಷ್ಟ ಸಂಭವಿಸಿದೆ. ಅಪಘಾತಕ್ಕೆ ಕಾರಣವಾದ ಅಪರಿಚಿತ ವಾಹನ ಪತ್ತೆಹಚ್ಚುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಈ ಕುರಿತು ಬಳ್ಳಾರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.





