ಬೆಳಗಾಯಿತು ವಾರ್ತೆ| www.belagayithu.in
ಬಳ್ಳಾರಿ: ನಗರದಲ್ಲಿ ಆತಂಕ ಮೂಡಿಸಿರುವ ಘಟನೆ ಶುಕ್ರವಾರ ನಡೆದಿದೆ. ಬಳ್ಳಾರಿ ಮಹಾನಗರ ಪಾಲಿಕೆಯ ಇಂಜಿನೀಯರ್ ವೀರೇಶ್ ಅವರ ಮೇಲೆ ಕಾರ್ಪೊರೇಟರ್ ವಿ.ಕುಬೇರ ಅವರು ಹಲ್ಲೆ ನಡೆಸಿದ್ದಾರೆ.
ಕೆಲಸದ ವಿಚಾರವಾಗಿ ಉಂಟಾದ ವಾಗ್ವಾದದ ಹಿನ್ನೆಲೆಯಲ್ಲಿ ಈ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ. ವಾಗ್ವಾದ ತೀವ್ರಗೊಂಡಾಗ ಕಾರ್ಪೊರೇಟರ್ ಹಾಗೂ ಅವರ ಬೆಂಬಲಿಗರು ಇಂಜಿನೀಯರ್ ವೀರೇಶ್ ಅವರ ಮೇಲೆ ದೈಹಿಕ ಹಲ್ಲೆ ನಡೆಸಿದ್ದಾರೆ.
ಘಟನೆಯ ಬಳಿಕ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಸಹೋದ್ಯೋಗಿ ಗಳು ಮತ್ತು ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದಾರೆ. ಗಾಯಗೊಂಡಿರುವ ಇಂಜಿನೀಯರ್ ವೀರೇಶ್ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಘಟನೆಗೆ ಸಂಬಂಧಿಸಿ ಪಾಲಿಕೆ ಅಧಿಕಾರಿಗಳು ತೀವ್ರ ಖಂಡನೆ ವ್ಯಕ್ತಪಡಿಸಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. ಘಟನೆ ಕುರಿತು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗುವ ಸಾಧ್ಯತೆ ಇದ್ದು, ತನಿಖೆ ಮುಂದುವರಿದಿದೆ.
ಸಾರ್ವಜನಿಕ ಸೇವೆಯಲ್ಲಿ ತೊಡಗಿರುವ ಅಧಿಕಾರಿಗಳ ಮೇಲೆ ಇಂತಹ ದಾಳಿಗಳು ನಡೆಯುತ್ತಿರುವುದು ಖಂಡನೀಯ ಎಂದು ನಾಗರಿಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.





