ಬೆಳಗಾಯಿತು ವಾರ್ತೆ
ಬಳ್ಳಾರಿ: 14 ವರ್ಷದೊಳಗಿನ ಯಾವುದೇ ಮಗುವನ್ನು ವಾಣಿಜ್ಯ ಹಿನ್ನಲೆಯ ದುಡಿಮೆ ಆಧಾರಿತ ಚಟುವಟಿಕೆಗಳಿಗೆ ಹಾಗೂ ಹೋಟೆಲ್, ಅಂಗಡಿ, ಗ್ಯಾರೇಜ್ ಮುಂತಾದ ಸ್ಥಳಗಳಲ್ಲಿ ಮಕ್ಕಳನ್ನು ಕೆಲಸಕ್ಕೆ ಸೇರಿಸಿಕೊಳ್ಳುವುದು ಬಾಲಕಾರ್ಮಿಕರ ಪಧ್ದತಿ ವಿರೋಧ ಕಾಯ್ದೆ ಅಡಿಯಲ್ಲಿ ಅಪರಾಧವೆಂದು ಪರಿಗಣಿಸಲಾಗಿದ್ದು ಈ ಹಿನ್ನಲೆಯಲ್ಲಿ ಸಾರ್ವಜನಿಕರು ಜಾಗೃತವಹಿಸಬೇಕಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಹೆಚ್ ಎಲ್ ಜನಾರ್ಧನ್ ತಿಳಿಸಿದರು.
ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧೀನದಲ್ಲಿ ಹಮ್ಮಿಕೊಂಡ ಬಾಲಕಾರ್ಮಿಕರ ವಿರೋಧಿ ದಿನಾಚರಣೆಯ ಅಂಗವಾಗಿ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಸಮಾಜದ ಸ್ವಾಸ್ಥö್ಯವನ್ನು ಕಾಪಾಡಬೇಕಾದರೆ ಪ್ರತಿಯೊಬ್ಬ ಪೋಷಕರು ತಮ್ಮ ಮಕ್ಕಳಿಗೆ ಸೂಕ್ತ ಶಿಕ್ಷಣವನ್ನು ನೀಡುವುದು ಹಾಗೂ ಅವರ ಬಾಲ್ಯದ ಹಕ್ಕುಗಳನ್ನು ಕಸಿದುಕೊಳ್ಳದಂತೆ ಕ್ರೀಡೆ, ಶಿಕ್ಷಣ, ದೈಹಿಕ, ಮಾನಸಿಕ ಸದೃಡತೆಯೊಂದಿಗೆ ಸಾಮಾಜಿಕ ಭದ್ರತೆಯನ್ನು ನೀಡುವದರಿಂದ ಮಗುವಿನ ಸರ್ವತೋಮುಖ ಅಭಿವೃದ್ದಿ ಜೊತೆಗೆ ದೇಶದ ಅಭಿವೃದ್ದಿಯು ಸಹಿತ ಸಾಧ್ಯವಾಗುತ್ತದೆ. ಈ ದಿಶೆಯಲ್ಲಿ ಎಲ್ಲರೂ ಕೈಜೋಡಿಸಿ ಬಾಲಕಾರ್ಮಿಕ ಪದ್ಧತಿ ಮುಕ್ತ ರಾಷ್ಟçವನ್ನಾಗಿ ಮಾಡಲು ಶ್ರಮಿಸೋಣ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕುಟುಂಬ ಕಲ್ಯಾಣ ಕಾರ್ಯಕ್ರಮ ಅನುಷ್ಟಾನ ಅಧಿಕಾರಿ ಡಾ. ಪೂರ್ಣಿಮ ಕಟ್ಟಿಮನಿ, ಜಿಲ್ಲಾ ಕುಷ್ಟರೋಗ ನಿರ್ಮೂಲನಾ ಅಧಿಕಾರಿ ಡಾ. ವೀರೇಂದ್ರಕುಮಾರ್, ಮಾನಸಿಕ ತಜ್ಞರಾದ ಡಾ.ಭುವನೇಶ್ವರಿ ದೇವಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ಹೆಚ್ ದಾಸಪ್ಪನವರ ಸೇರಿದಂತೆ ವಿವಿಧ ಆರೋಗ್ಯ ಕೇಂದ್ರಗಳ ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಹಾಜರಿದ್ದರು.