ಬೆಳಗಾಯಿತು ವಾರ್ತೆ| Www.belagayithu.in
ಬಳ್ಳಾರಿ: ಸಾರ್ವಜನಿಕರಿಗೆ ಹೆಚ್ಚಿನ ಲಾಭದ ಆಮಿಷವೊಡ್ಡಿ ಹಣ ಸಂಗ್ರಹಿಸುತ್ತಿರುವ “ಶಿವಂ ಅಸೋಷಿಯೇಟ್ಸ್” ಆನ್‌ಲೈನ್ ಕಂಪನಿಯ ಕುರಿತು ಎಚ್ಚರಿಕೆಯಿಂದಿರಬೇಕು ಎಂದು ಬಳ್ಳಾರಿ ಜಿಲ್ಲಾ ಪೊಲೀಸ್ ಇಲಾಖೆ ಸಾರ್ವಜನಿಕರಿಗೆ ಸೂಚನೆ ನೀಡಿದೆ.
ಈ ಕುರಿತು ಪ್ರಕಟಣೆ ನೀಡುರುವ ಬಳ್ಳಾರಿ ಜಿಲ್ಲಾ ಪೊಲೀಸ್ ಇಲಾಖೆ, ಬೆಳಗಾವಿಯ ಶಿವಬಸವನಗರದಲ್ಲಿರುವ ಶಿವಂ ಅಸೋಷಿಯೇಟ್ಸ್ (ಆನ್‌ಲೈನ್ ಕಂಪನಿ) ವಿವಿಧ ಜಿಲ್ಲೆಗಳ ಸಾರ್ವಜನಿಕರಿಂದ ಹೂಡಿಕೆ ರೂಪದಲ್ಲಿ ಹಣ ಸಂಗ್ರಹಿಸುತ್ತಿದೆ. ಕಂಪನಿಯು ಪ್ರತಿ ತಿಂಗಳು ಹೂಡಿಕೆ ಮಾಡಿದ ಹಣಕ್ಕೆ ಶೇಕಡಾ 3ರಷ್ಟು ಲಾಭ ನೀಡುವುದಾಗಿ ಭರವಸೆ ನೀಡಿದ್ದು, ಕಲಬುರಗಿ ಜಿಲ್ಲೆ ಸೇರಿದಂತೆ ಬೀದರ್, ಯಾದಗಿರಿ, ರಾಯಚೂರು, ಬಳ್ಳಾರಿ ಹಾಗೂ ಕೊಪ್ಪಳ ಜಿಲ್ಲೆಗಳ ಸುಮಾರು 10 ಸಾವಿರ ಜನರಿಂದ ತಲಾ ಸುಮಾರು 3 ಲಕ್ಷದವರೆಗೆ ಹಣ ಪಡೆದುಕೊಂಡಿರುವುದು ತಿಳಿದು ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಾರಂಭದಲ್ಲಿ ಹೂಡಿಕೆದಾರರಿಗೆ ಮಾಸಿಕ ಲಾಭದ ಹಣ ಪಾವತಿಸಲಾಗುತ್ತಿದ್ದು, ಸಾರ್ವಜನಿಕರಿಗೆ ಮೋಸ ಮಾಡುವ ಉದ್ದೇಶದಿಂದ ಹಣ ಸಂಗ್ರಹಿಸಲಾಗುತ್ತಿದೆ ಎಂಬ ಅನುಮಾನ ವ್ಯಕ್ತವಾಗಿದೆ. ಈಗಾಗಲೇ ಶಿವಂ ಅಸೋಷಿಯೇಟ್ಸ್ ವಿರುದ್ಧ ಬೆಳಗಾವಿ ಜಿಲ್ಲೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಂಪನಿಯ ಹಣಕಾಸು ವಹಿವಾಟನ್ನು ತಡೆಹಿಡಿಯಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಯಾವುದೇ ಆಮಿಷಕ್ಕೆ ಒಳಗಾಗಿ ಕಂಪನಿಯಲ್ಲಿ ಹಣ ಹೂಡಿಕೆ ಮಾಡಬಾರದು. ಈಗಾಗಲೇ ಹೂಡಿಕೆ ಮಾಡಿ ಮೋಸ ಹೋಗಿರುವವರು ಬಳ್ಳಾರಿ ಜಿಲ್ಲಾ ಸೈಬರ್ ಕ್ರೈಂ ಪೊಲೀಸ್ ಠಾಣೆಯನ್ನು ಸಂಪರ್ಕಿಸಿ ದೂರು ನೀಡುವಂತೆ ಮನವಿ ಮಾಡಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಬಳ್ಳಾರಿ ಸೈಬರ್ ಕ್ರೈಂ ಪೊಲೀಸ್ ಠಾಣೆ ದೂರವಾಣಿ ಸಂಖ್ಯೆ 08392-255034 ಹಾಗೂ ಮೊಬೈಲ್ ಸಂಖ್ಯೆ 9480803014 ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.





