ಎಫ್‌ಐಆರ್ ಖಂಡಿಸಿ ಬಿಜೆಪಿಯಿಂದ ಬೃಹತ್ ಪ್ರತಿಭಟನೆ


ಬ್ರೂಸ್‌ಪೇಟೆ ಪೊಲೀಸ್ ಠಾಣೆಗೆ ಮುತ್ತಿಗೆ ಯತ್ನ; ನೂರಾರು ಕಾರ್ಯಕರ್ತರು ಪೊಲೀಸ್ ವಶಕ್ಕೆ
ಬೆಳಗಾಯಿತು ವಾರ್ತೆ
ಬಳ್ಳಾರಿ: ಎಸ್‌ಐಆರ್‌ ಪ್ರಕ್ರಿಯೆಗೆ ಸಂಬಂಧಿಸಿದಂತೆ 7,561 ಮತಗಳ ಅಕ್ರಮದ ಆರೋಪದ ಹಿನ್ನೆಲೆಯಲ್ಲಿ ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕ ಶ್ರೀನಿವಾಸ್ ಮೋದ್ಕರ್ ವಿರುದ್ಧ ದಾಖಲಿಸಿರುವ ಎಫ್‌ಐಆರ್‌ ಖಂಡಿಸಿ ಬಿಜೆಪಿ ಬಳ್ಳಾರಿ ಜಿಲ್ಲಾ ಘಟಕದ ವತಿಯಿಂದ ಸೋಮವಾರ ನಗರದ ರಾಯಲ್ ಸರ್ಕಲ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆಯಲ್ಲಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ರಾಜ್ಯ ಸರ್ಕಾರ ಮತ್ತು ಪೊಲೀಸ್ ಇಲಾಖೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಶ್ರೀನಿವಾಸ್ ಮೋದ್ಕರ್ ವಿರುದ್ಧ ದಾಖಲಿಸಿರುವ ಪ್ರಕರಣವನ್ನು ತಕ್ಷಣ ಹಿಂಪಡೆಯಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆ ಬಳಿಕ ಬಿಜೆಪಿ ಮುಖಂಡರು ಹಾಗೂ ನೂರಾರು ಕಾರ್ಯಕರ್ತರು ಬ್ರೂಸ್‌ಪೇಟೆ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಲು ಮುಂದಾದರು. ಈ ಹಿನ್ನೆಲೆಯಲ್ಲಿ ಪೊಲೀಸರು ಠಾಣೆಯ ಸುತ್ತಮುತ್ತ ಬಿಗಿ ಬಂದೋಬಸ್ತ್ ಕೈಗೊಂಡು, ಮುತ್ತಿಗೆ ಯತ್ನವನ್ನು ತಡೆದರು. ಈ ವೇಳೆ ನೂರಾರು ಬಿಜೆಪಿ ಕಾರ್ಯಕರ್ತರನ್ನು ವಶಕ್ಕೆ ಪಡೆಯಲಾಯಿತು.
ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಅಲ್ಪಸಂಖ್ಯಾತರ ಮತಗಳಿಗೆ ಸಂಬಂಧಿಸಿದಂತೆ ಬಿಜೆಪಿ ಎತ್ತಿರುವ ಪ್ರಶ್ನೆಗಳನ್ನು ಹತ್ತಿಕ್ಕುವ ಉದ್ದೇಶದಿಂದ ಎಫ್‌ಐಆರ್‌ ದಾಖಲಿಸಲಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಮತದಾರರ ಪಟ್ಟಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಕುರಿತು ಸಮಗ್ರ ತನಿಖೆ ನಡೆಸಬೇಕು ಹಾಗೂ ಈ ವಿಚಾರವನ್ನು ಪ್ರಶ್ನಿಸಿದ ಬಿಜೆಪಿ ಮುಖಂಡರ ವಿರುದ್ಧ ದಾಖಲಿಸಿರುವ ಪ್ರಕರಣವನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದರು.
ಪೊಲೀಸ್ ಪ್ರಕರಣಗಳ ಮೂಲಕ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರನ್ನು ಬೆದರಿಸುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿದ ಪ್ರತಿಭಟನಾಕಾರರು, ಮತದಾರರ ಪಟ್ಟಿಯಲ್ಲಿನ ಲೋಪದೋಷ ಹಾಗೂ ಅಕ್ರಮಗಳ ಕುರಿತು ಪ್ರಶ್ನಿಸುವುದು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಬ್ಬರ ಹಕ್ಕಾಗಿದೆ ಎಂದು ಹೇಳಿದರು.
ಠಾಣೆ ಮುತ್ತಿಗೆ ಯತ್ನದ ವೇಳೆ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಯಿತು. ಮುಂಜಾಗ್ರತಾ ಕ್ರಮವಾಗಿ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಿ ಪರಿಸ್ಥಿತಿಯನ್ನು ನಿಯಂತ್ರಿಸಲಾಯಿತು.
ಪ್ರತಿಭಟನೆಯಲ್ಲಿ ಬಿಜೆಪಿ ಮುಖಂಡರು, ಮಹಾನಗರ ಪಾಲಿಕೆ ಸದಸ್ಯರು ಹಾಗೂ ಪಕ್ಷದ ನೂರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು.


Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles