ಬೆಳಗಾಯಿತು ವಾರ್ತೆ
ಬಳ್ಳಾರಿ: ಕಾಂಗ್ರೆಸ್ ಸರ್ಕಾರವು ಎಸ್‌ಐಆರ್ (ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ) ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಿಸುವ ಮೂಲಕ ಅಧಿಕಾರ ದುರುಪಯೋಗ ಮಾಡುತ್ತಿದೆ ಎಂದು ಮಾಜಿ ಸಚಿವ ಶ್ರೀರಾಮುಲು ಅವರು ಆರೋಪಿಸಿದರು.
ಬಳ್ಳಾರಿಯಲ್ಲಿ ಬುಧವಾರ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರು ಈ ಹಿಂದೆ ಇವಿಎಂ, ಎಸ್‌ಐಆರ್ ಸೇರಿದಂತೆ ಹಲವು ವಿಚಾರಗಳಲ್ಲಿ ಆರೋಪಗಳನ್ನು ಮಾಡಿದ್ದು, ಇದೀಗ ಎಸ್‌ಐಆರ್ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಟೀಕಿಸಿದರು.
ರಾಹುಲ್ ಗಾಂಧಿ ಅವರು ವಿದೇಶಗಳಿಗೆ ತೆರಳಿ ಭಾರತದ ಕುರಿತು ವಿವಿಧ ಆರೋಪಗಳನ್ನು ಮಾಡುತ್ತಿದ್ದಾರೆ. ಅಲ್ಲಿನ ವಿಚಾರಗಳನ್ನು ಭಾರತಕ್ಕೆ ತಂದು ರಾಜಕೀಯವಾಗಿ ಬಳಸಿಕೊಳ್ಳುವ ಕೆಲಸ ಮಾಡುತ್ತಿದ್ದಾರೆ ರಾಮುಲು ಅವರು ಆರೋಪಿಸಿದರು.
ಎಸ್‌ಐಆರ್ ಪ್ರಕ್ರಿಯೆಯಲ್ಲಿ ಫಾರಂ–7 ಮೂಲಕ ಆಕ್ಷೇಪಣೆ ಸಲ್ಲಿಸಲು ಪ್ರತಿಯೊಬ್ಬರಿಗೂ ಕಾನೂನುಬದ್ಧ ಅವಕಾಶವಿದೆ. ಮೃತಪಟ್ಟವರು, ಸ್ಥಳಾಂತರಗೊಂಡವರು ಅಥವಾ ಒಂದಕ್ಕಿಂತ ಹೆಚ್ಚು ಕಡೆ ಮತದಾರರ ಪಟ್ಟಿಯಲ್ಲಿ ಹೆಸರು ಇರುವವರ ಕುರಿತು ಆಕ್ಷೇಪಣೆ ಸಲ್ಲಿಸುವುದು ತಪ್ಪಲ್ಲ. ಅಂತಹ ಆಕ್ಷೇಪಣೆಗಳನ್ನು ಸಂಬಂಧಿಸಿದ ಅಧಿಕಾರಿಗಳು ಪರಿಶೀಲಿಸಬೇಕು ಎಂದು ಅವರು ಹೇಳಿದರು.
ಬಿಜಾಪುರ, ಬಾಗಲಕೋಟೆ, ಬೆಳಗಾವಿ ಹಾಗೂ ಬಳ್ಳಾರಿ ಜಿಲ್ಲೆಗಳಲ್ಲಿ ಬಿಜೆಪಿ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಿಸಲಾಗುತ್ತಿದೆ ಎಂದು ಆರೋಪಿಸಿದ ಅವರು, ಫಾರಂ–7ಕ್ಕೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸಿದ ಕಾರಣಕ್ಕೆ ಕಾರ್ಯಕರ್ತರ ಮೇಲೆ ಕ್ರಮ ಕೈಗೊಳ್ಳುವುದು ಸರಿಯಲ್ಲ ಎಂದರು.
ಸಂವಿಧಾನ ಮತ್ತು ಕಾನೂನಿಗೆ ಎಲ್ಲರೂ ಗೌರವ ನೀಡಬೇಕು. ಡಾ. ಬಿ.ಆರ್. ಅಂಬೇಡ್ಕರ್ ಅವರು ನೀಡಿದ ಸಂವಿಧಾನದ ಆಶಯದಂತೆ ಕಾನೂನು ಜಾರಿಯಾಗಬೇಕು ಎಂದು ಅವರು ಹೇಳಿದರು.
ಬಿಜೆಪಿ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಿಸುವ ಅಧಿಕಾರ ಪೊಲೀಸರಿಗೆ ಇಲ್ಲ ಎಂದು ಆರೋಪಿಸಿದ ಅವರು, ಚುನಾವಣಾ ಪ್ರಕ್ರಿಯೆಗೆ ಸಂಬಂಧಿಸಿದ ಕ್ರಮಗಳನ್ನು ಚುನಾವಣಾ ಆಯೋಗದ ನಿಯಮಾನುಸಾರ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಕಾರ್ಯಕರ್ತರ ಮೇಲೆ ಇದೇ ರೀತಿಯ ಕ್ರಮಗಳು ಮುಂದುವರಿದರೆ ಬಿಜೆಪಿ ಬೀದಿಗಿಳಿದು ಹೋರಾಟ ನಡೆಸಬೇಕಾಗುತ್ತದೆ. ಅಂತಹ ಸಂದರ್ಭದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸಮಸ್ಯೆ ಉಂಟಾದರೆ ಅದಕ್ಕೆ ಸರ್ಕಾರವೇ ಹೊಣೆ ಎಂದು ಪೊಲೀಸರಿಗೆ ಎಚ್ಚರಿಕೆ ನೀಡಿದರು.
“ಅಧಿಕಾರ ಶಾಶ್ವತವಲ್ಲ. ಕಾಲಚಕ್ರದಲ್ಲಿ ಬದಲಾವಣೆ ಆಗುತ್ತದೆ. ಅಧಿಕಾರಿಗಳು ಕಾನೂನು ವ್ಯಾಪ್ತಿಯಲ್ಲಿ ಕೆಲಸ ಮಾಡಬೇಕು. ಬಿಜೆಪಿ ಕಾರ್ಯಕರ್ತರ ಮೇಲೆ ಅನ್ಯಾಯವಾದ ಕ್ರಮ ಕೈಗೊಂಡರೆ ಅದನ್ನು ಸಹಿಸುವುದಿಲ್ಲ” ಎಂದು ಶ್ರೀರಾಮುಲು ಹೇಳಿದರು.




