ಬೆಳಗಾಯಿತು ವಾರ್ತೆ| www.belagayithu.in
ಬೆಂಗಳೂರು: ಬೇಸಿಗೆ ತಾಪಮಾನ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಕೆಲವು ಜಿಲ್ಲೆಗಳ ಸರ್ಕಾರಿ ಕಚೇರಿಗಳ ವೇಳೆಯಲ್ಲಿ ತಾತ್ಕಾಲಿಕ ಬದಲಾವಣೆ ಮಾಡುವಂತೆ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ.
ಬೆಳಗಾವಿ ವಿಭಾಗದ ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳು ಹಾಗೂ ಕಲಬುರ್ಗಿ ವಿಭಾಗದ ಎಲ್ಲಾ ಜಿಲ್ಲೆಗಳಲ್ಲಿ 2026ರ ಏಪ್ರಿಲ್ ಮತ್ತು ಮೇ ತಿಂಗಳುಗಳಲ್ಲಿ ಕಚೇರಿ ಕಾರ್ಯಾವಧಿಯನ್ನು ಬೆಳಿಗ್ಗೆ 8.00 ಗಂಟೆಯಿಂದ ಮಧ್ಯಾಹ್ನ 1.30 ಗಂಟೆಯವರೆಗೆ ನಿಗದಿಪಡಿಸಲಾಗಿದೆ.
ಉನ್ನತ ತಾಪಮಾನದಿಂದ ಸರ್ಕಾರಿ ನೌಕರರು ಕರ್ತವ್ಯ ನಿರ್ವಹಿಸುವಲ್ಲಿ ಎದುರಿಸುತ್ತಿರುವ ತೊಂದರೆಗಳನ್ನು ಮನಗಂಡು ಈ ನಿರ್ಧಾರ ಕೈಗೊಳ್ಳಲಾಗಿದೆ. ಈ ಬಗ್ಗೆ ವಿವಿಧ ನೌಕರರ ಸಂಘಗಳಿಂದ ಮನವಿಗಳು ಸಲ್ಲಿಕೆಯಾಗಿದ್ದವು.
ಸರ್ಕಾರ ಸ್ಪಷ್ಟಪಡಿಸಿರುವಂತೆ, ಬದಲಾದ ವೇಳೆಯಲ್ಲಿಯೂ ನೌಕರರು ಯಾವುದೇ ವ್ಯತ್ಯಯವಿಲ್ಲದೆ ತಮ್ಮ ಕರ್ತವ್ಯಗಳನ್ನು ನಿರ್ವಹಿಸಬೇಕು. ಸಾರ್ವಜನಿಕರಿಗೆ ಸೇವೆ ನೀಡುವಲ್ಲಿ ಯಾವುದೇ ಅನಾನುಕೂಲವಾಗದಂತೆ ನೋಡಿಕೊಳ್ಳುವ ಜವಾಬ್ದಾರಿ ಅಧಿಕಾರಿಗಳದ್ದಾಗಿದೆ.
ಇದಲ್ಲದೆ, ತುರ್ತು ಪರಿಸ್ಥಿತಿಗಳಲ್ಲಿ ಜಿಲ್ಲಾಧಿಕಾರಿಗಳು ಅಥವಾ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ನೀಡುವ ನಿರ್ದೇಶನಗಳ ಪ್ರಕಾರ, ಸಮಯದ ಮಿತಿಯಿಲ್ಲದೆ ಕರ್ತವ್ಯ ನಿರ್ವಹಿಸಲು ನೌಕರರು ಸಿದ್ಧರಾಗಿರಬೇಕು ಎಂದು ಸೂಚಿಸಲಾಗಿದೆ





