ಬೆಳಗಾಯಿತು ವಾರ್ತೆ
ಬಳ್ಳಾರಿ: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ರದ್ದುಪಡಿಸುವಂತೆ ಆಗ್ರಹಿಸಿ ಕಾಂಗ್ರೆಸ್ ಪಕ್ಷದ ವತಿಯಿಂದ ಮಂಗಳವಾರ ನಗರದ ರಾಯಲ್ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನಾಕಾರರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಪ್ರತಿಕೃತಿಯನ್ನು ದಹಿಸಿ, ಎಸ್‌ಐಆರ್ ಪ್ರಕ್ರಿಯೆ ಕುರಿತು ತಮ್ಮ ವಿರೋಧ ವ್ಯಕ್ತಪಡಿಸಿದರು.
ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ಮುಖಂಡರು, ಎಸ್‌ಐಆರ್‌ನಿಂದ ಅರ್ಹ ಮತದಾರರಿಗೆ ತೊಂದರೆಯಾಗುವ ಸಾಧ್ಯತೆ ಇದೆ ಎಂದು ಆರೋಪಿಸಿದರು. ಮತದಾರರ ಹಕ್ಕುಗಳನ್ನು ರಕ್ಷಿಸುವ ನಿಟ್ಟಿನಲ್ಲಿ ಎಸ್‌ಐಆರ್ ಪ್ರಕ್ರಿಯೆಯನ್ನು ಕೂಡಲೇ ರದ್ದುಪಡಿಸಬೇಕು ಎಂದು ಒತ್ತಾಯಿಸಿದರು.
ಮತದಾರರ ಪಟ್ಟಿಯ ಪರಿಷ್ಕರಣೆ ಹೆಸರಿನಲ್ಲಿ ಯಾವುದೇ ಅರ್ಹ ಮತದಾರರ ಹೆಸರು ಕೈಬಿಡದಂತೆ ಕ್ರಮ ಕೈಗೊಳ್ಳಬೇಕು. ಈ ಕುರಿತು ಕೇಂದ್ರ ಚುನಾವಣಾ ಆಯೋಗ ಹಾಗೂ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಎಸ್‌ಐಆರ್ ರದ್ದುಪಡಿಸುವವರೆಗೆ ಕಾಂಗ್ರೆಸ್ ಪಕ್ಷದ ಹೋರಾಟ ಮುಂದುವರಿಯಲಿದೆ. ಈ ವಿಚಾರದಲ್ಲಿ ಯಾವುದೇ ಕಾರಣಕ್ಕೂ ಹಿಂದೆ ಸರಿಯುವುದಿಲ್ಲ ಎಂದು ಮುಖಂಡರು ಎಚ್ಚರಿಕೆ ನೀಡಿದರು.
ಪ್ರತಿಭಟನೆಯಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಲ್ಲಂ ಪ್ರಶಾಂತ, ಸಂಡೂರು ಶಾಸಕಿ ಅನ್ನಪೂರ್ಣ, ಮುಂಡ್ರಗಿ ನಾಗರಾಜ್, ಹುಮಾಯೂನ್ ಖಾನ್, ವಿಷ್ಣು ಬೋಯಾಪಾಟಿ, ವಿವೇಕ್ ಸೇರಿದಂತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.





