ಬೆಳಗಾಯಿತು ವಾರ್ತೆ| Www.belagayithu.in
ಬಳ್ಳಾರಿ: ನಗರದ ಕಪ್ಪಗಲ್ ರಸ್ತೆಯ 9ನೇ ಕ್ರಾಸ್‌ನಲ್ಲಿ ಗೋವಿನ ತಲೆಗಳನ್ನು ಕತ್ತರಿಸಿ ರಸ್ತೆಗೆ ಎಸೆದಿರುವ ಘಟನೆ ಬೆಳಕಿಗೆ ಬಂದಿದ್ದು, ಸ್ಥಳೀಯರಲ್ಲಿ ಆತಂಕ ಮತ್ತು ಆಕ್ರೋಶಕ್ಕೆ ಕಾರಣವಾಗಿದೆ.
ಅಪರಿಚಿತ ದುಷ್ಕರ್ಮಿಗಳು ಚೀಲದಲ್ಲಿ ಎರಡು ಗೋವಿನ ತಲೆಗಳನ್ನು ತಂದು ಜನನಿಬಿಡ ಪ್ರದೇಶದಲ್ಲಿ ಬಿಸಾಡಿರುವ ಶಂಕೆ ವ್ಯಕ್ತವಾಗಿದೆ. ಘಟನೆ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಸ್ಥಳೀಯರು ಹಾಗೂ ಬಿಜೆಪಿ ಕಾರ್ಯಕರ್ತರು ಆಗಮಿಸಿ ಪ್ರತಿಭಟನೆ ನಡೆಸಿದರು.
ಸ್ಥಳಕ್ಕೆ ಬಿಜೆಪಿ ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ನಾಯ್ಡು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಕೃತ್ಯ ಎಸಗಿದವರನ್ನು ಕೂಡಲೇ ಪತ್ತೆಹಚ್ಚಿ ಕಠಿಣ ಕ್ರಮ ಕೈಗೊಳ್ಳುವಂತೆ ಅವರು ಪೊಲೀಸ್ ಇಲಾಖೆಯನ್ನು ಒತ್ತಾಯಿಸಿದರು.
ಪ್ರತಿಭಟನೆಯ ವೇಳೆ ಬಿಜೆಪಿ ಕಾರ್ಯಕರ್ತರು ಆರೋಪಿಗಳ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಸ್ಥಳೀಯ ನಿವಾಸಿ ಸುಮಾ ರೆಡ್ಡಿ ಕೂಡ ಘಟನೆ ಕುರಿತು ತೀವ್ರ ಖಂಡನೆ ವ್ಯಕ್ತಪಡಿಸಿದರು.
ಈ ಸಂಬಂಧ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದು, ಗೋವಿನ ತಲೆಗಳನ್ನು ರಸ್ತೆಗೆ ಎಸೆದಿರುವವರ ಪತ್ತೆಗೆ ತನಿಖೆ ಆರಂಭಿಸಿದ್ದಾರೆ. ಘಟನೆಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಇನ್ನೇನು ತಿಳಿಯಬೇಕಿದೆ.





