ಸಿಡಗಿನಮೊಳ, ಕಾರೆಕಲ್ಲು ಗ್ರಾಮಗಳಲ್ಲಿ ಬೆಳೆ ಪರಿಶೀಲನೆ; ಸರ್ಕಾರ ವಿರುದ್ಧ ಆರ್. ಅಶೋಕ್ ವಾಗ್ದಾಳಿ


ಬೆಳಗಾಯಿತು ವಾರ್ತೆ
ಬಳ್ಳಾರಿ: ಈ ವರ್ಷ ಮುಂಗಾರು ಮಳೆ ಕೈಕೊಟ್ಟ ಹಿನ್ನೆಲೆಯಲ್ಲಿ ಸಂಕಷ್ಟಕ್ಕೆ ಸಿಲುಕಿರುವ ರೈತರ ಪರಿಸ್ಥಿತಿಯನ್ನು ಅವಲೋಕಿಸಲು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರ ನೇತೃತ್ವದ ಬಿಜೆಪಿ ಬರ ಅಧ್ಯಯನ ತಂಡ ಗುರುವಾರ ಬಳ್ಳಾರಿ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ಪರಿಶೀಲನೆ ನಡೆಸಿತು.
ತಂಡವು ಮೊದಲು ಸಿದಗಿನಮೊಳ ಗ್ರಾಮದ ರೈತರ ಜಮೀನುಗಳಿಗೆ ಭೇಟಿ ನೀಡಿ ಬೆಳೆಗಳ ಸ್ಥಿತಿಗತಿಯನ್ನು ಪರಿಶೀಲಿಸಿತು. ಬಳಿಕ ಕಾರೆಕಲ್ಲು ಸೇರಿದಂತೆ ವಿವಿಧ ಗ್ರಾಮಗಳ ಕೃಷಿ ಪ್ರದೇಶಗಳಿಗೆ ತೆರಳಿ ಹತ್ತಿ, ತೊಗರಿ, ಜೋಳ ಸೇರಿದಂತೆ ವಿವಿಧ ಬೆಳೆಗಳ ಬೆಳವಣಿಗೆ ಹಾಗೂ ಮಳೆ ಕೊರತೆಯಿಂದ ಉಂಟಾಗಿರುವ ಹಾನಿಯನ್ನು ಪರಿಶೀಲಿಸಿತು.
ಈ ವೇಳೆ ಮಾತನಾಡಿದ ಆರ್. ಅಶೋಕ್, ಮುಂಗಾರು ವೈಫಲ್ಯದಿಂದ ದೇಶಕ್ಕೆ ಅನ್ನ ನೀಡುವ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಆದರೆ ರಾಜ್ಯ ಸರ್ಕಾರ ರೈತರ ಸಮಸ್ಯೆಗಳ ಬಗ್ಗೆ ಕಾಳಜಿ ವಹಿಸುತ್ತಿಲ್ಲ ಎಂದು ಆರೋಪಿಸಿದರು. ಸರ್ಕಾರದ ಗಮನ ರೈತರ ಸಮಸ್ಯೆಗಳಿಗಿಂತ ಬೇರೆ ವಿಚಾರಗಳತ್ತ ಹರಿದಿದೆ ಎಂದು ಟೀಕಿಸಿದರು.
ಜಿಲ್ಲೆ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಬರದ ಪರಿಸ್ಥಿತಿ ನಿರ್ಮಾಣವಾಗಿದ್ದು, ಜನರು ಉದ್ಯೋಗ ಅರಸಿ ಗುಳೆ ಹೋಗುವ ಪರಿಸ್ಥಿತಿ ಎದುರಾಗಿದೆ. ಮೂರುರಿಂದ ನಾಲ್ಕು ಅಡಿ ಎತ್ತರಕ್ಕೆ ಬೆಳೆಯಬೇಕಿದ್ದ ಜೋಳ ಹಾಗೂ ತೊಗರಿ ಬೆಳೆಗಳು 50 ದಿನಗಳು ಕಳೆದರೂ ಸಮರ್ಪಕವಾಗಿ ಬೆಳೆಯದೇ ಒಣಗುವ ಹಂತ ತಲುಪಿವೆ ಎಂದು ಹೇಳಿದರು.
ಸಂಕಷ್ಟದಲ್ಲಿರುವ ರೈತರಿಗೆ ಆತ್ಮಸ್ಥೈರ್ಯ ತುಂಬುವ ಕೆಲಸ ಸರ್ಕಾರದಿಂದ ಆಗಿಲ್ಲ. ಜಿಲ್ಲಾಧಿಕಾರಿಗಳು ರೈತರ ಜಮೀನುಗಳಿಗೆ ಭೇಟಿ ನೀಡಿ ವಾಸ್ತವ ಸ್ಥಿತಿಯನ್ನು ಪರಿಶೀಲಿಸಿಲ್ಲ ಎಂದು ಆರೋಪಿಸಿದ ಅವರು, ಕೂಡಲೇ ಬರವನ್ನು ಅಧಿಕೃತವಾಗಿ ಘೋಷಿಸಿ ರೈತರಿಗೆ ಸಮರ್ಪಕ ಪರಿಹಾರ ವಿತರಿಸಬೇಕು. ಜೊತೆಗೆ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು.

Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles