ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ಇಂತಹ ಕಾರ್ಯಕ್ರಮಗಳು ಮಕ್ಕಳಲ್ಲಿ ಆತ್ಮವಿಶ್ವಾಸ ಹೆಚ್ಚಿಸುತ್ತವೆ: ಗಣ್ಯರ ಅಭಿಪ್ರಾಯ
ಬೆಳಗಾಯಿತು ವಾರ್ತೆ
ಬಳ್ಳಾರಿ: ಮಕ್ಕಳ ದಿನಾಚರಣೆಯ ಅಂಗವಾಗಿ ನಗರದ ಸತ್ಯನಾರಾಯಣ ಪೇಟೆಯ ಎಂಎಂಟಿಸಿ ಕಾಲೋನಿ ಪಾರ್ಕ್‌ನಲ್ಲಿ ಪಾಲಿಕೆ ಸದಸ್ಯ ಕೆ.ಎಸ್. ಅಶೋಕ್ ಕುಮಾರ್ ಅವರ ನೇತೃತ್ವದಲ್ಲಿ ಶಾಲಾ ಮಕ್ಕಳಿಗೆ ಪುಸ್ತಕಗಳು ಹಾಗೂ ಶಾಲಾ ಬ್ಯಾಗ್‌ಗಳನ್ನು ವಿತರಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಗಣ್ಯರು ಮಕ್ಕಳೊಂದಿಗೆ ಸಂತಸದ ಕ್ಷಣಗಳನ್ನು ಹಂಚಿಕೊಂಡು, ಅವರಿಗೆ ಶೈಕ್ಷಣಿಕ ಸಾಮಗ್ರಿಗಳನ್ನು ವಿತರಿಸಿ ಮಕ್ಕಳ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಿದರು.
ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ಹಾಗೂ ಅವರ ಕಲಿಕೆಯ ಹಾದಿಗೆ ಅಗತ್ಯವಾದ ಶೈಕ್ಷಣಿಕ ಸಾಮಗ್ರಿಗಳನ್ನು ಒದಗಿಸುವ ಇಂತಹ ಕಾರ್ಯಕ್ರಮಗಳು ಮಕ್ಕಳಲ್ಲಿ ಹೊಸ ಉತ್ಸಾಹ ಮತ್ತು ಆತ್ಮವಿಶ್ವಾಸವನ್ನು ಮೂಡಿಸುತ್ತವೆ. ಪ್ರತಿಯೊಂದು ಮಗುವಿಗೂ ಗುಣಮಟ್ಟದ ಶಿಕ್ಷಣ ದೊರೆಯಬೇಕು. ಮಕ್ಕಳು ಉತ್ತಮ ಶಿಕ್ಷಣ ಪಡೆದು ಉಜ್ವಲ ಭವಿಷ್ಯ ರೂಪಿಸಿಕೊಳ್ಳಲು ಸಮಾಜದ ಪ್ರತಿಯೊಬ್ಬರೂ ಸಹಕಾರ ನೀಡಬೇಕು ಎಂಬ ಆಶಯವನ್ನು ಗಣ್ಯರು ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ವೈ.ಎಂ. ಸತೀಶ್, ಬಳ್ಳಾರಿ ನಗರದ ಮಾಜಿ ಶಾಸಕ ಗಾಲಿ ಸೋಮಶೇಖರ ರೆಡ್ಡಿ, ಪಾಲಿಕೆ ಸದಸ್ಯರು ಹಾಗೂ ಪಾಲಿಕೆಯ ವಿರೋಧ ಪಕ್ಷದ ನಾಯಕ ಶ್ರೀನಿವಾಸ್ ಮೊತ್ಕರ್, ಕಲ್ಲಿ ರಾವ್, ಗಿರಿ, ರಾಘವೇಂದ್ರ ಸೇರಿದಂತೆ ಶಾಲಾ ಮಕ್ಕಳು, ಶಿಕ್ಷಕರು ಹಾಗೂ ಇತರರು ಉಪಸ್ಥಿತರಿದ್ದರು.





