ಬೆಳಗಾಯಿತು ವಾರ್ತೆ
ಬಳ್ಳಾರಿ: ಪದಗ್ರಹಣದ ಬಳಿಕ ಮೊದಲ ಬಾರಿಗೆ ಬಳ್ಳಾರಿ ನಗರಕ್ಕೆ ಆಗಮಿಸಿದ ಸಚಿವ ಬಿ. ನಾಗೇಂದ್ರ ಅವರಿಗೆ ನಗರದ ಸಂಗಮ್ ವೃತ್ತದಲ್ಲಿ ಅಭಿಮಾನಿಗಳು, ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರು ಅದ್ದೂರಿ ಸ್ವಾಗತ ಕೋರಿದರು.
ಹೂಮಾಲೆ ಹಾಕಿ, ಪಟಾಕಿ ಸಿಡಿಸಿ, ಜಯಘೋಷಗಳ ನಡುವೆ ಸಚಿವರನ್ನು ಬರಮಾಡಿಕೊಂಡ ಕಾರ್ಯಕರ್ತರು, “ಬಿ. ನಾಗೇಂದ್ರ ಜಿಂದಾಬಾದ್”, “ನಮ್ಮ ನಾಯಕ ಬಿ. ನಾಗೇಂದ್ರ” ಸೇರಿದಂತೆ ವಿವಿಧ ಘೋಷಣೆಗಳನ್ನು ಕೂಗಿ ಸಂಭ್ರಮ ವ್ಯಕ್ತಪಡಿಸಿದರು. ಸಂಗಮ್ ವೃತ್ತದಲ್ಲಿ ಕೆಲಕಾಲ ಹಬ್ಬದ ವಾತಾವರಣ ನಿರ್ಮಾಣವಾಗಿದ್ದು, ನೂರಾರು ಬೆಂಬಲಿಗರು ಸಚಿವರಿಗೆ ಶುಭಾಶಯಗಳನ್ನು ತಿಳಿಸಿದರು.
ಈ ಸಂದರ್ಭದಲ್ಲಿ ಸಚಿವ ಬಿ. ನಾಗೇಂದ್ರ ಅವರಿಗೆ ವಿವಿಧ ಸಂಘಟನೆಗಳ ಪ್ರತಿನಿಧಿಗಳು ಹಾಗೂ ಮುಖಂಡರು ಪುಷ್ಪಗುಚ್ಛ ನೀಡಿ ಅಭಿನಂದಿಸಿದರು. ನಗರದ ಪ್ರಮುಖ ರಸ್ತೆಯಲ್ಲಿ ಸಚಿವರ ಆಗಮನದಿಂದ ಜನಸಂದಣಿ ಉಂಟಾಗಿದ್ದು, ಪೊಲೀಸ್ ಇಲಾಖೆ ಸೂಕ್ತ ಬಂದೋಬಸ್ತ್ ವ್ಯವಸ್ಥೆ ಮಾಡಿತ್ತು.





