ಬೆಳಗಾಯಿತು ವಾರ್ತೆ | Www.belagayithu.in
ಬಳ್ಳಾರಿ: ಬೆಂಗಳೂರಿನಲ್ಲಿ ನಡೆದ ಆರ್‌ಸಿಬಿ ತಂಡದ ವಿಜಯೋತ್ಸವ ಕಾರ್ಯಕ್ರಮದ ವೇಳೆ ಕಾಲ್ತುಳಿತದಲ್ಲಿ 11 ಮಂದಿ ಮರಣಹೊಂದಿದ್ದು, ಇದಕ್ಕೆ ರಾಜ್ಯ ಸರ್ಕಾರ ನೇರ ಕಾರಣ ಎಂದು ಬಿಜೆಪಿಯ ಮಾಜಿ ಸಚಿವ ಬಿ. ಶ್ರೀರಾಮುಲು ಅವರು ಆರೋಪಿಸಿದರು.
ನಗರದ ಅಹಂಬಾವಿಯಲ್ಲಿರುವ ಮಾಜಿ ಸಚಿವರ ಗೃಹ ಕಚೇರಿಯಲ್ಲಿ ಶುಕ್ರವಾರ ಹಮ್ಮಿಕೊಂಡ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.
ಕಾಲ್ತುಳಿತದಲ್ಲಿ ಆದ ಅನಾಹುತಕ್ಕೆ ರಾಜ್ಯ ಸರ್ಕಾರ ನೇರ ಕಾರಣವಾಗಿದೆ. ಆದರೆ ತಮ್ಮ ತಪ್ಪನ್ನು ಅವರು ಒಪ್ಪಿಕೊಳ್ಳದೇ ಪೊಲೀಸ್ ಅಧಿಕಾರಿಗಳನ್ನು ಅಮಾನತ್ತು ಮಾಡಿರುವುದು ಎಷ್ಟು ಸರಿ ಎಂದು ಅವರು ಪ್ರಶ್ನಿಸಿದರು.
ವಿಧಾನಸೌಧದಲ್ಲಿ ಕಾರ್ಯಕ್ರಮ ಆಯೋಜಿಸಲು ಒತ್ತಡ ತಂದ ರಾಜಕೀಯ ಕಾರ್ಯದರ್ಶಿಯನ್ನು ಮೊದಲು ಆ ಹುದ್ದೆಯಿಂದ ಕಿತ್ತುಹಾಕಿ. ನೈತಿಕತೆ ಇದ್ದದ್ದೇ ಆದರೆ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಮತ್ತು ಗೃಹ ಸಚಿವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಮನೆಗೆ ಹೋಗಬೇಕು. ಇಲ್ಲವೇ ಕಾಂಗ್ರೆಸ್ ಹೈಕಮಾಂಡ್ ಈ ಮೂರನ್ನೂ ಕಿತ್ತೊಗೆಯಬೇಕು’ ಎಂದರು.
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಬಿಜೆಪಿ ಸದಸ್ಯರು, ಮುಖಂಡರು, ಕಾರ್ಯಕರ್ತರು ಹಾಜರಿದ್ದರು.




