ಗೃಹಜ್ಯೋತಿ ಯೋಜನೆ ಪುನರ್‌ಪರಿಶೀಲನೆ ಆರಂಭ: ಜೆಸ್ಕಾಂ ಸಿಬ್ಬಂದಿಯಿಂದ ಮನೆ-ಮನೆಗೆ ಭೇಟಿ

ಬೆಳಗಾಯಿತು ವಾರ್ತೆ
ಕುರುಗೋಡು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಐದು ಗ್ಯಾರಂಟಿ ಯೋಜನೆಗಳಲ್ಲಿ ಮೊದಲನೆಯದಾಗಿ ಜಾರಿಯಾದ ಗೃಹಜ್ಯೋತಿ ಯೋಜನೆಯ ಪುನರ್‌ಪರಿಶೀಲನೆಗೆ ಇಂಧನ ಇಲಾಖೆ ಚಾಲನೆ ನೀಡಿದೆ. ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ಮಾತ್ರ ಉಚಿತ ವಿದ್ಯುತ್ ಸೌಲಭ್ಯ ದೊರೆಯುವಂತೆ ಮಾಡುವ ಉದ್ದೇಶದಿಂದ ಜೆಸ್ಕಾಂ ವ್ಯಾಪ್ತಿಯಲ್ಲಿ ಮನೆ-ಮನೆಗೆ ತೆರಳಿ ಮಾಹಿತಿ ಸಂಗ್ರಹಿಸುವ ಕಾರ್ಯ ಆರಂಭಿಸಲಾಗಿದೆ.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಜಾರಿಯಾದ ಗೃಹಜ್ಯೋತಿ ಯೋಜನೆಯಡಿ ಪ್ರತಿ ಕುಟುಂಬಕ್ಕೆ ಸರಾಸರಿ 200 ಯೂನಿಟ್‌ವರೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದೆ. ಇದೀಗ ಅನರ್ಹ ಫಲಾನುಭವಿಗಳನ್ನು ಗುರುತಿಸಿ ಯೋಜನೆಯಿಂದ ಕೈಬಿಡುವ ಹಾಗೂ ನಿಜವಾದ ಅರ್ಹರಿಗೆ ಮಾತ್ರ ಸೌಲಭ್ಯ ಮುಂದುವರಿಯುವಂತೆ ಪುನರ್‌ಪರಿಶೀಲನೆ ಕೈಗೊಳ್ಳಲಾಗಿದೆ.
ಕುರುಗೋಡು ಜೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ (ಎಇಇ) ಮಹಮ್ಮದ್ ಜಾಫರ್ ಅವರು ಸ್ವತಃ ಕೆಲವು ಮನೆಗಳಿಗೆ ಭೇಟಿ ನೀಡಿ ಪರಿಶೀಲನಾ ಕಾರ್ಯಕ್ಕೆ ಚಾಲನೆ ನೀಡಿದರು.
ಈ ಕುರಿತು ಮಾತನಾಡಿದ ಅವರು, “ಸರ್ಕಾರದ ಆದೇಶ ಹಾಗೂ ಮೇಲಾಧಿಕಾರಿಗಳ ನಿರ್ದೇಶನದಂತೆ ಇಂದಿನಿಂದ ಗೃಹಜ್ಯೋತಿ ಯೋಜನೆಯ ಪುನರ್‌ಪರಿಶೀಲನೆ ಆರಂಭಿಸಲಾಗಿದೆ. ಇಲಾಖೆಯ ಸಿಬ್ಬಂದಿ, ಮೀಟರ್ ರೀಡರ್‌ಗಳು ಹಾಗೂ ಗ್ರಾಮ ವಿದ್ಯುತ್ ಪ್ರತಿನಿಧಿಗಳು ಮನೆ-ಮನೆಗೆ ತೆರಳಿ ಫಲಾನುಭವಿಗಳ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಸಾರ್ವಜನಿಕರು ಮನೆಗೆ ಬರುವ ಸಿಬ್ಬಂದಿಯ ಗುರುತನ್ನು ಖಚಿತಪಡಿಸಿಕೊಂಡು, ಆಧಾರ್ ಕಾರ್ಡ್, ಮತದಾರರ ಗುರುತಿನ ಚೀಟಿ, ಪಡಿತರ ಚೀಟಿ ಸೇರಿದಂತೆ ಅಗತ್ಯ ದಾಖಲೆಗಳನ್ನು ನೀಡಿ ಸಹಕರಿಸಬೇಕು” ಎಂದು ಮನವಿ ಮಾಡಿದರು.
ಪುನರ್‌ಪರಿಶೀಲನೆಯ ಮೂಲಕ ಯೋಜನೆಯ ಪಾರದರ್ಶಕತೆ ಹೆಚ್ಚಿಸಿ, ಅರ್ಹ ಫಲಾನುಭವಿಗಳಿಗೆ ಮಾತ್ರ ಸರ್ಕಾರದ ಸೌಲಭ್ಯ ತಲುಪಿಸುವುದು ಸರ್ಕಾರದ ಉದ್ದೇಶವಾಗಿದೆ.

Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles