ಜೂ. 1ರಿಂದ ಹೆಲ್ಮೆಟ್ ಕಡ್ಡಾಯ: ನಿಯಮ ಉಲ್ಲಂಘಿಸಿದರೆ ಕ್ರಮ


ಬೆಳಗಾಯಿತು ವಾರ್ತೆ| www.belagayithu.in
ಬಳ್ಳಾರಿ: ದ್ವಿಚಕ್ರ ವಾಹನ ಸವಾರರ ಸುರಕ್ಷತೆಗಾಗಿ ಬಳ್ಳಾರಿ ನಗರದಲ್ಲಿ ಜೂನ್ 1ರಿಂದ ಹೆಲ್ಮೆಟ್ ಧರಿಸುವುದನ್ನು ಕಡ್ಡಾಯಗೊಳಿಸಲಾಗಿದ್ದು, ನಿಯಮ ಉಲ್ಲಂಘಿಸಿದವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಡಿ. ಪೆನ್ನೇಕರ್ ತಿಳಿಸಿದ್ದಾರೆ.
ಭಾರತೀಯ ಮೋಟಾರು ವಾಹನ ಕಾಯ್ದೆ 1989 ಹಾಗೂ ಕರ್ನಾಟಕ ಮೋಟಾರ್ ವಾಹನ ನಿಯಮಗಳ ಪ್ರಕಾರ ವಾಹನ ಚಾಲಕ ಮತ್ತು ಹಿಂಬದಿ ಸವಾರ ಇಬ್ಬರೂ ಹೆಲ್ಮೆಟ್ ಧರಿಸುವುದು ಕಡ್ಡಾಯವಾಗಿದೆ. ಈ ನಿಯಮವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಜಿಲ್ಲಾಡಳಿತ ಮುಂದಾಗಿದೆ.
ತ್ರಿಬಲ್ ರೈಡಿಂಗ್, ಮದ್ಯಪಾನ ಮಾಡಿ ವಾಹನ ಚಲಾಯಿಸುವುದು, ಚಾಲನೆ ವೇಳೆ ಮೊಬೈಲ್ ಬಳಕೆ ಸೇರಿದಂತೆ ಸಂಚಾರ ನಿಯಮ ಉಲ್ಲಂಘನೆ ಮಾಡುವವರ ಮೇಲೂ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಲಾಗಿದೆ.
ನಗರಾದ್ಯಂತ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಧ್ವನಿವರ್ಧಕಗಳ ಮೂಲಕ ಮಾಹಿತಿ ನೀಡುವುದು, ಕರಪತ್ರ ಹಂಚಿಕೆ, ಬೀದಿ ನಾಟಕ, ಬೈಕ್ ರ್ಯಾಲಿ ಹಾಗೂ ಜಾಗೃತಿ ವಾಹನಗಳ ಮೂಲಕ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಗುತ್ತಿದೆ. ಕೆಲವು ದ್ವಿಚಕ್ರ ವಾಹನ ಸವಾರರಿಗೆ ಸಾಂಕೇತಿಕವಾಗಿ ಹೆಲ್ಮೆಟ್‌ಗಳನ್ನೂ ವಿತರಿಸಲಾಗುತ್ತಿದೆ.
ಶಾಲಾ-ಕಾಲೇಜುಗಳು ಹಾಗೂ ವಿವಿಧ ಸರ್ಕಾರಿ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿಗೂ ಹೆಲ್ಮೆಟ್ ಕಡ್ಡಾಯವಾಗಿ ಧರಿಸುವಂತೆ ಸೂಚನೆ ನೀಡಲಾಗಿದೆ.
ಕಳೆದ ಮೂರು ವರ್ಷಗಳಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ಹೆಲ್ಮೆಟ್ ಧರಿಸದೆ ವಾಹನ ಚಲಾಯಿಸಿದ ಪ್ರಕರಣಗಳಿಗೆ ಸಂಬಂಧಿಸಿದಂತೆ 1009 ಅಪಘಾತ ಪ್ರಕರಣಗಳು ದಾಖಲಾಗಿದ್ದು, 462 ಮಂದಿ ಮೃತಪಟ್ಟಿದ್ದಾರೆ. ಹಾಗೂ 1072 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸ್ ಇಲಾಖೆ ಮಾಹಿತಿ ನೀಡಿದೆ.
“ಜೀವ ಅಮೂಲ್ಯ. ದ್ವಿಚಕ್ರ ವಾಹನ ಸವಾರರು ತಮ್ಮ ಹಾಗೂ ಕುಟುಂಬದ ಸುರಕ್ಷತೆಗಾಗಿ ಹೆಲ್ಮೆಟ್ ಧರಿಸಿ ವಾಹನ ಚಲಾಯಿಸಬೇಕು” ಎಂದು ಎಸ್‌ಪಿ ಡಾ. ಸುಮನ್ ಡಿ. ಪೆನ್ನೇಕರ್ ಮನವಿ ಮಾಡಿದ್ದಾರೆ.

Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles