ಬೆಳಗಾಯಿತು ವಾರ್ತೆ|www.belagayithu.in
ಧಾರವಾಡ: ‘ಕರ್ನಾಟಕ ಲೋಕಸೇವಾ ಆಯೋಗದಲ್ಲಿ (ಕೆಪಿಎಸ್‌ಸಿ) ನಡೆದಿರುವ ಅಕ್ರಮಗಳ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಆಗ್ರಹಿಸಿ ಏ.8ರಿಂದ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸಲಾಗುವುದು, ಇದಕ್ಕೆ ಪೊಲೀಸ್ ಇಲಾಖೆಯ ಅನುಮತಿ ಕೋರಲಾಗಿದೆ’ ಎಂದು ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿಗಳ ಸಂಘಟನೆ (ಅಕ್ಸಾ) ಅಧ್ಯಕ್ಷ ಕಾಂತಕುಮಾರ ತಿಳಿಸಿದರು.
‘ಕೆಪಿಎಸ್‌ಸಿಯಲ್ಲಿ ಭ್ರಷ್ಟಾಚಾರ ವ್ಯಾಪಕವಾಗಿದೆ. ಸಿಬಿಐನಿಂದ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಬೇಕು’ ಎಂದು ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು.
‘ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಹಲವು ಸುಧಾರಣೆ ಕ್ರಮಗಳನ್ನು ಅಳವಡಿಸಿಕೊಂಡಿದೆ. ಕೆಇಎ ಮೂಲಕವೇ ನೇಮಕಾತಿ ಪ್ರಕ್ರಿಯೆ ನಡೆಸಬೇಕು. ಕೆಪಿಎಸ್‌ಸಿಯಿಂದ ನಡೆಸಬಾರದು. ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಪ್ರಸನ್ನ ಅವರನ್ನು ವರ್ಗಾವಣೆ ಮಾಡಬಾರದು’ ಎಂದೂ ಒತ್ತಾಯಿಸಿದರು.
ಸರ್ಕಾರ ಈಗಾಗಲೇ ಹೇಳಿರುವಂತೆ 56 ಸಾವಿರ ಹುದ್ದೆಗಳ ನೇಮಕಾತಿಗೆ ಪ್ರಕ್ರಿಯೆಯನ್ನು ಶೀಘ್ರ ಆರಂಭಿಸಬೇಕು. ಒಳಮೀಸಲಾತಿ ವಿಷಯ ಮುಂದಿಟ್ಟು ವಿಳಂಬ ಮಾಡಬಾರದು. ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 2.84 ಲಕ್ಷ ಹುದ್ದೆಗಳ ಭರ್ತಿಗೆ ಹಂತಹಂತವಾಗಿ ನೇಮಕಾತಿ ಪ್ರಕ್ರಿಯೆ ನಡೆಸಬೇಕು’ ಎಂದು ಕೋರಿದರು.





