ದುಶ್ಚಟಗಳಿಂದ ದೂರವಿದ್ದು ಸ್ವಾಸ್ಥ್ಯ ಸಮಾಜ ನಿರ್ಮಿಸೋಣ

ಬೆಳಗಾಯಿತು ವಾರ್ತೆ
ಬಳ್ಳಾರಿ: ದುಶ್ಚಟಗಳು ವ್ಯಕ್ತಿಯ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವುದರ ಜೊತೆಗೆ ಕುಟುಂಬದ ನೆಮ್ಮದಿ ಹಾಗೂ ಸಮಾಜದ ಸ್ವಾಸ್ಥ್ಯವನ್ನೂ ಹಾಳು ಮಾಡುತ್ತವೆ. ಯುವಜನತೆ ಸೇರಿದಂತೆ ಪ್ರತಿಯೊಬ್ಬರೂ ದುಶ್ಚಟಗಳಿಂದ ದೂರವಿದ್ದು, ಆರೋಗ್ಯವಂತ ಹಾಗೂ ಶಿಸ್ತುಬದ್ಧ ಜೀವನ ನಡೆಸುವ ಮೂಲಕ ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ಕಮ್ಮರಬೇಡ ಬಳ್ಳಾರಿಯ ಕಲ್ಯಾಣಸ್ವಾಮಿ ಸಂಸ್ಥಾನ ಮಠದ ಪರಮಪೂಜ್ಯ ಶ್ರೀ ಮ.ನಿ.ಪ್ರ. ಕಲ್ಯಾಣ ಮಹಾಸ್ವಾಮಿಗಳು ಕರೆ ನೀಡಿದರು.
ನಗರದ ರಾಘವ ಕಲಾ ಮಂದಿರದಲ್ಲಿ ಗುರುವಾರ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಹಾಗೂ ಬಳ್ಳಾರಿ ಜಿಲ್ಲಾ ಜನಜಾಗೃತಿ ವೇದಿಕೆ ಸಹಯೋಗದಲ್ಲಿ ಆಯೋಜಿಸಿದ್ದ ಗಾಂಧಿ ಸ್ಮೃತಿ, ಬೃಹತ್ ಜನಜಾಗೃತಿ ಸಮಾವೇಶ ಹಾಗೂ ವ್ಯಸನಮುಕ್ತರಿಗೆ ಅಭಿನಂದನಾ ಸಮಾರಂಭದಲ್ಲಿ ದಿವ್ಯ ಸಾನಿಧ್ಯ ವಹಿಸಿ ಅವರು ಮಾತನಾಡಿದರು.
ಮಹಾತ್ಮ ಗಾಂಧೀಜಿಯವರು ದುಶ್ಚಟಮುಕ್ತ ಹಾಗೂ ಸ್ವಾಸ್ಥ್ಯ ಸಮಾಜದ ಕನಸು ಕಂಡಿದ್ದರು. ಅವರ ಆದರ್ಶಗಳನ್ನು ಕೇವಲ ಜಯಂತಿ ಆಚರಣೆಗೆ ಸೀಮಿತಗೊಳಿಸದೆ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಮದ್ಯ, ತಂಬಾಕು ಹಾಗೂ ಮಾದಕ ವಸ್ತುಗಳಂತಹ ದುಶ್ಚಟಗಳು ವ್ಯಕ್ತಿಯ ಬದುಕನ್ನು ನಾಶ ಮಾಡುವುದರ ಜತೆಗೆ ಇಡೀ ಕುಟುಂಬವನ್ನು ಸಂಕಷ್ಟಕ್ಕೆ ದೂಡುತ್ತವೆ ಎಂದು ಹೇಳಿದರು.
ವ್ಯಸನಕ್ಕೆ ಒಳಗಾದವರನ್ನು ಕೀಳಾಗಿ ಕಾಣದೆ, ಅವರನ್ನು ವ್ಯಸನಮುಕ್ತರನ್ನಾಗಿಸಲು ಕುಟುಂಬಸ್ಥರು ಹಾಗೂ ಸಮಾಜ ಸಹಾನುಭೂತಿಯಿಂದ ನೆರವಾಗಬೇಕು. ಚಿಕಿತ್ಸೆ ಮತ್ತು ಮಾರ್ಗದರ್ಶನ ಪಡೆಯುತ್ತಿರುವವರಿಗೆ ಆತ್ಮಸ್ಥೈರ್ಯ ತುಂಬಿ, ಮತ್ತೆ ದುಶ್ಚಟಗಳತ್ತ ಮರಳದಂತೆ ನಿರಂತರ ಪ್ರೋತ್ಸಾಹ ನೀಡಬೇಕು ಎಂದರು.
ವಿದ್ಯಾರ್ಥಿಗಳು ಹಾಗೂ ಯುವಜನರು ದೇಶದ ಭವಿಷ್ಯವಾಗಿದ್ದು, ಬಾಲ್ಯ ಹಾಗೂ ಯೌವನದಲ್ಲಿಯೇ ದುಶ್ಚಟಗಳ ಅಪಾಯದ ಕುರಿತು ಅರಿವು ಮೂಡಿಸುವುದು ಅಗತ್ಯ. ಶಾಲಾ-ಕಾಲೇಜುಗಳಲ್ಲಿ ನಡೆಯುತ್ತಿರುವ ‘ಸ್ವಾಸ್ಥ್ಯ ಸಂಕಲ್ಪ’ ಸೇರಿದಂತೆ ಜನಜಾಗೃತಿ ಕಾರ್ಯಕ್ರಮಗಳು ಯುವಜನರನ್ನು ದುಶ್ಚಟಗಳಿಂದ ದೂರವಿಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿವೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ದುಶ್ಚಟಮುಕ್ತ ಸಮಾಜ ನಿರ್ಮಾಣ ಸರ್ಕಾರ ಅಥವಾ ಒಂದು ಸಂಘಟನೆಯ ಜವಾಬ್ದಾರಿ ಮಾತ್ರವಲ್ಲ. ಕುಟುಂಬ, ಶಿಕ್ಷಣ ಸಂಸ್ಥೆಗಳು, ಧಾರ್ಮಿಕ ಸಂಸ್ಥೆಗಳು, ಸಂಘ-ಸಂಸ್ಥೆಗಳು ಹಾಗೂ ಪ್ರತಿಯೊಬ್ಬ ನಾಗರಿಕರು ಒಗ್ಗೂಡಿ ಕಾರ್ಯನಿರ್ವಹಿಸಿದಾಗ ಮಾತ್ರ ಶಾಶ್ವತ ಬದಲಾವಣೆ ಸಾಧ್ಯ. ಇಂತಹ ಜನಜಾಗೃತಿ ಕಾರ್ಯಕ್ರಮಗಳು ನಿರಂತರವಾಗಿ ನಡೆಯಬೇಕು ಎಂದು ಅವರು ಹೇಳಿದರು.
ಕಾರ್ಯಕ್ರಮವನ್ನು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀ ಸಿದ್ದಲಿಂಗ ಪ್ರಭು ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ ವ್ಯಸನಮುಕ್ತರಾದವರನ್ನು ಅಭಿನಂದಿಸಲಾಯಿತು.
ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷ ಎಂ. ಭಾಸ್ಕರ್ ಅಧ್ಯಕ್ಷತೆ ವಹಿಸಿದ್ದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಲ್ಯಾಣ ಕರ್ನಾಟಕ ಪ್ರಾದೇಶಿಕ ಕಚೇರಿ, ಕೊಪ್ಪಳದ ಪ್ರಾದೇಶಿಕ ನಿರ್ದೇಶಕ ಜೆ. ಚಂದ್ರಶೇಖರ ಆಶಯ ಭಾಷಣ ಮಾಡಿದರು.
ಬಳ್ಳಾರಿ ಧರ್ಮಾಧ್ಯಕ್ಷರಾದ ಪರಮಪೂಜ್ಯ ಶ್ರೀ ಡಾ. ಹೆನ್ರಿ ಡಿ’ಸೋಜ, ಧರ್ಮಗುರುಗಳಾದ ಪರಮಪೂಜ್ಯ ಶ್ರೀ ಹಜರತ್ ಖಾಜಿ ಮಹ್ಮದ್ ಸಿದ್ದಿಬಿ, ವೀರಶೈವ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಕೆ. ಮಾಹಾಂತೇಶ್, ರಾಘವ ಕಲಾ ಮಂದಿರದ ಅಧ್ಯಕ್ಷ ಕೋಟೇಶ್ವರ್ ರಾವ್, ರೋಟರಿ ಕ್ಲಬ್ ಬಳ್ಳಾರಿ ಅಧ್ಯಕ್ಷ ಜಿ. ರಾಘವೇಂದ್ರ ರೆಡ್ಡಿ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.


Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles