ಬೆಳಗಾಯಿತು ವಾರ್ತೆ
ಕಂಪ್ಲಿ: “ಬಿಜೆಪಿ ಪಾದಯಾತ್ರೆ– ಇದು ಜನಮನ ಪಾದಯಾತ್ರೆ” ಎಂಬ ಘೋಷಣೆ ಹಾಗೂ ವಿವಿಧ ಹಾಡುಗಳೊಂದಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದ ಪಾದಯಾತ್ರೆ ಸೋಮವಾರ ಕಂಪ್ಲಿಯಿಂದ ಬಳ್ಳಾರಿ ಕಡೆಗೆ ಮುಂದುವರಿಯಿತು.
ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕಾನೂನು–ಸುವ್ಯವಸ್ಥೆ ಹದಗೆಟ್ಟಿದೆ ಎಂದು ಆರೋಪಿಸಿ, ಸರ್ಕಾರದ ವೈಫಲ್ಯವನ್ನು ಖಂಡಿಸುವ ಉದ್ದೇಶದಿಂದ ಈ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ. ಪಾದಯಾತ್ರೆಯಲ್ಲಿ ಬಿಜೆಪಿ ಕಾರ್ಯಕರ್ತರು, ರೈತರು, ಮಹಿಳೆಯರು ಸೇರಿದಂತೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾಲ್ನಡಿಗೆಯಲ್ಲಿ ಸಾಗಿದರು.
ಪಾದಯಾತ್ರೆಯ ಸಂದರ್ಭದಲ್ಲಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸುವಂತೆ ಸರ್ಕಾರವನ್ನು ಒತ್ತಾಯಿಸಿದರು.
ಹಲವು ಪ್ರಮುಖ ನಾಯಕರು ಭಾಗಿ
ವಿಧಾನಸಭೆಯ ಮುಖ್ಯ ಸಚೇತಕ ದೊಡ್ಡನಗೌಡ ಹೆಚ್. ಪಾಟೀಲ್, ವಿಧಾನಪರಿಷತ್ ವಿಪಕ್ಷ ಮುಖ್ಯ ಸಚೇತಕ ಎನ್. ರವಿಕುಮಾರ್, ಮಾಜಿ ಸಚಿವರಾದ ಬಿ. ಶ್ರೀರಾಮುಲು, ಗಾಲಿ ಜನಾರ್ಧನ ರೆಡ್ಡಿ, ಶಾಸಕರಾದ ಬಾಲಚಂದ್ರ ಜಾರಕಿಹೊಳಿ, ಸಿದ್ದು ಪಾಟೀಲ್, ವಿಧಾನಪರಿಷತ್ ಸದಸ್ಯರಾದ ಹೇಮಲತಾ ನಾಯ್ಕ್, ವೈ.ಎಂ. ಸತೀಶ್, ರಘು ಕೌಟಿಲ್ಯ, ಬಿಜೆಪಿ ರಾಜ್ಯ ಉಪಾಧ್ಯಕ್ಷ ರಾಜುಗೌಡ ನಾಯಕ, ರಾಜ್ಯ ಕಾರ್ಯದರ್ಶಿ ಶರಣು ತಳ್ಳಿಕೇರಿ, ಯುವ ಮೋರ್ಚಾ ರಾಜ್ಯ ಅಧ್ಯಕ್ಷ ಹಾಗೂ ಶಾಸಕ ಧೀರಜ್ ಮುನಿರಾಜು, ಎಸ್ಟಿ ಮೋರ್ಚಾ ರಾಜ್ಯ ಅಧ್ಯಕ್ಷ ಬಂಗಾರು ಹನುಮಂತು ಸೇರಿದಂತೆ ಹಲವು ಮುಖಂಡರು ಭಾಗವಹಿಸಿದ್ದರು.
ಬಿಜೆಪಿ ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ಮೋಕಾ, ಮಾಜಿ ಸಚಿವ ಶಿವನಗೌಡ ನಾಯಕ, ಮಾಜಿ ಶಾಸಕರಾದ ಸೋಮಶೇಖರ್ ರೆಡ್ಡಿ, ಬಸವರಾಜ ದಡೆಸೂಗೂರು, ಹಾಲಪ್ಪ ಆಚಾರ್, ಮುಖಂಡರಾದ ಕಂಪ್ಲಿ ಸುರೇಶ ಬಾಬು, ಅರುಣಾ ಜನಾರ್ಧನ ರೆಡ್ಡಿ, ಡಾ. ಬಸವರಾಜ್ ಕ್ಯಾವಟರ್ ಸೇರಿದಂತೆ ಸಂಸದರು, ಶಾಸಕರು, ವಿಧಾನಪರಿಷತ್ ಸದಸ್ಯರು, ರಾಜ್ಯ ಪದಾಧಿಕಾರಿಗಳು, ಜಿಲ್ಲಾ ಅಧ್ಯಕ್ಷರು, ಮಾಜಿ ಶಾಸಕರು ಹಾಗೂ ವಿಧಾನಪರಿಷತ್ ಮಾಜಿ ಸದಸ್ಯರು ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದರು.





