ಬೆಳಗಾಯಿತು ವಾರ್ತೆ | www.belagayithu.in
ಬಳ್ಳಾರಿ: ಬಳ್ಳಾರಿ ನಗರ ಕ್ಷೇತ್ರದ ಶಾಸಕ ನಾರಾ ಭರತ್ ರೆಡ್ಡಿ ಅವರು ಗುರುವಾರ ಅಖಿಲ ಭಾರತೀಯ ಕಾಂಗ್ರೆಸ್ ಸಮಿತಿ (ಎಐಸಿಸಿ) ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ದೆಹಲಿಯ ನಿವಾಸದಲ್ಲಿ ಭೇಟಿ ಮಾಡಿದರು.
ಈ ವೇಳೆ ನಡೆದ ಔಪಚಾರಿಕ ಸಭೆಯಲ್ಲಿ ಬಳ್ಳಾರಿ ನಗರದ ಅಭಿವೃದ್ಧಿಗೆ ಸಂಬಂಧಿಸಿದಂತೆ ಶಾಸಕ ನಾರಾ ಭರತ್ ರೆಡ್ಡಿ ಅವರು ವಿವರವಾದ ವರದಿಯನ್ನು ಸಲ್ಲಿಸಿದರು. ನಗರದಲ್ಲಿ ನಡೆಯುತ್ತಿರುವ ಕಾಮಗಾರಿಗಳು, ಮೂಲಸೌಕರ್ಯಗಳ ಅಭಿವೃದ್ಧಿ ಹಾಗೂ ಮುಂದಿನ ಯೋಜನೆಗಳ ಬಗ್ಗೆ ಚರ್ಚೆ ನಡೆಯಿತು.
ಇದಲ್ಲದೆ, ಪ್ರಸ್ತುತ ರಾಜಕೀಯ ಬೆಳವಣಿಗೆಗಳ ಕುರಿತಾಗಿಯೂ ಇಬ್ಬರು ನಾಯಕರು ಪರಸ್ಪರ ವಿಚಾರ ವಿನಿಮಯ ಮಾಡಿಕೊಂಡರು. ರಾಜ್ಯ ಹಾಗೂ ರಾಷ್ಟ್ರೀಯ ರಾಜಕೀಯ ಪರಿಸ್ಥಿತಿಗಳ ಕುರಿತು ಸಮಗ್ರ ಚರ್ಚೆ ನಡೆದಿರುವುದಾಗಿ ತಿಳಿದುಬಂದಿದೆ.
ಸಭೆಯ ಸಂದರ್ಭದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಶಾಸಕ ನಾರಾ ಭರತ್ ರೆಡ್ಡಿಗೆ ಹಲವು ಮಹತ್ವದ ಸಲಹೆಗಳನ್ನು ನೀಡಿ ಮಾರ್ಗದರ್ಶನ ಮಾಡಿದರು ಎಂದು ತಿಳಿದುಬಂದಿದೆ.





