ಮನೆ ಬಾಗಿಲಲ್ಲೇ ಜನರ ಸಮಸ್ಯೆ ಆಲಿಕೆಗೆ ‘ಪ್ರಜಾಸೇವೆ’

ಬೆಳಗಾಯಿತು ವಾರ್ತೆ
ಬಳ್ಳಾರಿ:ಚುನಾವಣೆ ಸಂದರ್ಭದಲ್ಲಿ ನೀಡಿದ ಭರವಸೆಯಂತೆ ಬಡ ಜನರ ಮನೆ ಬಾಗಿಲಿಗೆ ತೆರಳಿ ಅವರ ಸಮಸ್ಯೆಗಳನ್ನು ಆಲಿಸಿ ಬಗೆಹರಿಸಲು ‘ಪ್ರಜಾಸೇವೆ’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಹೇಳಿದರು.
‘ಬಾಗಿಲಿಗೆ ಬಂತು ಸರ್ಕಾರ- ಸೇವೆಗೆ ಇರಲಿ ಸಹಕಾರ’ ಎಂಬ ಆಶಯದೊಂದಿಗೆ ಬಳ್ಳಾರಿ ತಾಲ್ಲೂಕು ಆಡಳಿತದ ವತಿಯಿಂದ ನಗರದ ಮಿಲ್ಲರಪೇಟೆ ಪ್ರದೇಶದ 13 ನೇ ವಾರ್ಡ್ ನ ಗಣೇಶ ದೇವಸ್ಥಾನ ಆವರಣದಲ್ಲಿ ಶನಿವಾರ ಆಯೋಜಿಸಿದ್ದ ಪ್ರಜಾಸೇವೆ ಆಂದೋಲನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಬಡ ಜನರು ತಮ್ಮ ಕೆಲಸ ಕಾರ್ಯಗಳಿಗಾಗಿ ಕಚೇರಿಗಳಿಗೆ ಅಲೆದಾಡುವುದನ್ನು ಮತ್ತು ಆಟೋ ಮೊದಲಾದ ಖರ್ಚುಗಳನ್ನು ತಪ್ಪಿಸಲು ಸ್ಲಂ ಪ್ರದೇಶಗಳಿಗೆ ನಾವೇ ನೇರವಾಗಿ ಭೇಟಿ ನೀಡುತ್ತಿದ್ದೇವೆ. ಜನರ ನ್ಯಾಯಯುತ ಸಮಸ್ಯೆಗಳನ್ನು ಅಧಿಕಾರಿಗಳು ಸ್ಥಳದಲ್ಲೇ ಪರಿಹರಿಸಬೇಕು ಅಥವಾ 15 ದಿನಗಳ ಒಳಗಾಗಿ ಸೂಕ್ತ ಉತ್ತರ ನೀಡಬೇಕು. ಜನರ ಸಮಸ್ಯೆಗಳ ನಿವಾರಣೆಯಲ್ಲಿ ಯಾವುದೇ ನಿರ್ಲಕ್ಷ್ಯ ತೋರುವ ಅಥವಾ ಕರ್ತವ್ಯ ಲೋಪವೆಸಗುವ ಅಧಿಕಾರಿಗಳ ವಿರುದ್ಧ ಮುಖ್ಯಮಂತ್ರಿಗಳಿಗೆ ದೂರು ನೀಡಿ ಅಮಾನತು ಮಾಡಿಸಲಾಗುವುದು ಎಂದು ಎಚ್ಚರಿಸಿದರು.

ತುಂಗಭದ್ರಾ ಜಲಾಶಯದಿಂದ ಬಳ್ಳಾರಿ ಜನರಿಗೆ 24 ಗಂಟೆ ಶುದ್ಧ ಕುಡಿಯುವ ನೀರು ಪೂರೈಸುವ ಒಟ್ಟು 1200 ಕೋಟಿ ರೂ. ಯೋಜನೆಯಲ್ಲಿ ಮೊದಲ ಹಂತದ 260 ಕೋಟಿ ರೂ. ಅನುದಾನದ ಕಾಮಗಾರಿಗೆ ಟೆಂಡರ್ ಪ್ರಕ್ರಿಯೆ ನಡೆದು ಕೆಲಸ ಆರಂಭವಾಗಿದೆ. ಅದೇರೀತಿಯಾಗಿ ವಸತಿ ರಹಿತರಿಗೆ ನಿವೇಶನ ನೀಡುವ ಯೋಜನೆಯಡಿ ಬಳ್ಳಾರಿ ನಗರದಲ್ಲಿ ಅರ್ಹ ಬಡ ಜನರಿಗೆ ಜನವರಿ ಒಳಗಾಗಿ 10,000 ನಿವೇಶನಗಳನ್ನು ವಿತರಿಸುವ ಗುರಿ ಹೊಂದಲಾಗಿದೆ. ಸರ್ಕಾರದ ಯೋಜನೆಗಳು ಹಾಗೂ ಸೌಲಭ್ಯಗಳು ನೇರವಾಗಿ ಕಟ್ಟಕಡೆಯ ವ್ಯಕ್ತಿಗೆ ತಲುಪಬೇಕು ಎಂಬುದು ಸರ್ಕಾರದ ಮುಖ್ಯ ಉದ್ದೇಶವಾಗಿದೆ ಎಂದು ಅವರು ಹೇಳಿದರು.

ಮುಂದಿನ 10 ‘ಪ್ರಜಾಸೇವೆ’ ಕಾರ್ಯಕ್ರಮಗಳ ದಿನಾಂಕ, ಸಮಯ ಮತ್ತು ಸ್ಥಳವನ್ನು ಮುಂಚಿತವಾಗಿ ನಿಗದಿಪಡಿಸಿ, ಆಯಾ ಪ್ರದೇಶಗಳಲ್ಲಿ ಒಂದು ವಾರ ಮುಂಚಿತವಾಗಿಯೇ ತ್ಯಾಜ್ಯ ಸಂಗ್ರಹಣೆ ವಾಹನಗಳ ಮೂಲಕ ಮತ್ತು ಆಟೋಗಳ ಮೂಲಕ ವ್ಯಾಪಕ ಪ್ರಚಾರ ನಡೆಸಬೇಕು ಎಂದು ಸೂಚಿಸಿದರು.

ಡಾ.ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ ಅವರು ಮಾತನಾಡಿ, ಸರ್ಕಾರವು ಜನಸಾಮಾನ್ಯರ ಮನೆಬಾಗಿಲಿಗೆ ತಲುಪಿ ಜನರ ಸಮಸ್ಯೆಗಳನ್ನು ಸ್ಥಳದಲ್ಲೇ ಇತ್ಯರ್ಥಪಡಿಸುವ ನಿಟ್ಟಿನಲ್ಲಿ ‘ಪ್ರಜಾಸೇವೆ’ ಇಲಾಖೆ ಮೂಲಕ ಮಹತ್ವಾಕಾಂಕ್ಷೆಯ ಹೆಜ್ಜೆ ಇಟ್ಟಿದೆ ಎಂದು ತಿಳಿಸಿದರು.

ಮಹಾನಗರ ಪಾಲಿಕೆ ಸಂಬಂಧಿತ ಸಮಸ್ಯೆಗಳು, ಪೋಡಿ ಪ್ರಕರಣಗಳು, ಜಮೀನಿನ ನಕ್ಷೆ, ತೆರಿಗೆ ಹಾಗೂ ಇತರೆ ಸಂಬಂಧಿತ ಸಾರ್ವಜನಿಕರ ಅಹವಾಲುಗಳನ್ನು ಸ್ಥಳದಲ್ಲೇ ಪರಿಹರಿಸಲು ಸರ್ಕಾರ ‘ಪ್ರಜಾಸೇವೆ’ ಕಲ್ಪನೆಯಡಿ ಕಾರ್ಯನಿರ್ವಹಿಸುತ್ತಿದೆ. ಕಾರ್ಯಕ್ರಮಗಳಲ್ಲಿ ಸಲ್ಲಿಕೆಯಾಗುವ ಅರ್ಜಿಗಳಿಗೆ ಅಧಿಕಾರಿಗಳ ಸಮ್ಮುಖದಲ್ಲೇ ಪರಿಹಾರ ಕಂಡುಕೊಳ್ಳಲಾಗುತ್ತಿದೆ ಎಂದು ಹೇಳಿದರು.

ರಾಜ್ಯದಲ್ಲಿ 5 ಗ್ಯಾರಂಟಿ ಯೋಜನೆಗಳಿಗೆ ವಾರ್ಷಿಕ 56,000 ಕೋಟಿ ರೂ. ವೆಚ್ಚವಾಗುತ್ತಿದ್ದರೂ ಅಭಿವೃದ್ಧಿ ಕಾರ್ಯಗಳು ಕುಂಠಿತಗೊಂಡಿಲ್ಲ. ಬಳ್ಳಾರಿ ನಗರದಲ್ಲಿ ಶಾಸಕರು ಸುಮಾರು 350 ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಂಡಿದ್ದು, ಈಗಾಗಲೇ ಹಲವು ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದು ತಿಳಿಸಿದರು.

ರಾಜಕಾರಣದಲ್ಲಿ ಟೀಕೆಗಳು ಕ್ಷಣಿಕ, ಆದರೆ ಜನರಿಗಾಗಿ ಮಾಡಿದ ಅಭಿವೃದ್ಧಿ ಕೆಲಸಗಳು ಶಾಶ್ವತವಾಗಿ ಉಳಿಯುತ್ತವೆ. ಹೀಗಾಗಿ ಟೀಕೆಗಳಿಗೆ ತಲೆಕೆಡಿಸಿಕೊಳ್ಳದೆ ನಗರದ ಅಭಿವೃದ್ಧಿಯೇ ನಮ್ಮ ಮೊದಲ ಆದ್ಯತೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮಹಾನಗರ ಪಾಲಿಕೆಯ ಮೇಯರ್ ಪಿ.ಗಾದೆಪ್ಪ ಅವರು ಮಾತನಾಡಿ, ಸಾರ್ವಜನಿಕರು ತಮ್ಮ ಕೆಲಸ-ಕಾರ್ಯಗಳಿಗಾಗಿ ಸರ್ಕಾರಿ ಕಚೇರಿಗಳು ಹಾಗೂ ಅಧಿಕಾರಿಗಳ ಬಳಿ ಅಲೆದಾಡುವುದನ್ನು ತಪ್ಪಿಸುವ ನಿಟ್ಟಿನಲ್ಲಿ ನೂತನ ‘ಪ್ರಜಾಸೇವೆ’ ಇಲಾಖೆ ಜಾರಿಗೆ ತರಲಾಗಿದೆ. ಇಡೀ ದೇಶದಲ್ಲೇ ಮೊಟ್ಟಮೊದಲ ಬಾರಿಗೆ ಇಂತಹ ನೂತನ ಇಲಾಖೆಯನ್ನು ನಮ್ಮ ಸರ್ಕಾರ ರೂಪಿಸಿ, ಜನಸಾಮಾನ್ಯರಿಗೆ ಅನುಕೂಲ ಕಲ್ಪಿಸುವ ಕನಸನ್ನು ನನಸು ಮಾಡಲಾಗಿದೆ ಎಂದರು.

ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಆಯಾ ಸಂಬಂಧಿತ ಇಲಾಖೆಗಳ ಕೌಂಟರ್‌ಗಳಲ್ಲಿ ದಾಖಲಿಸಿ, ಪರಿಶೀಲನೆಗೆ ಒಳಪಡಿಸುವ ಮೂಲಕ ಮುಂದಿನ ದಿನಗಳಲ್ಲಿ ತಮ್ಮ ಮನೆಬಾಗಿಲಿಗೇ ಸರ್ಕಾರಿ ಸೇವೆಗಳನ್ನು ಪಡೆದುಕೊಳ್ಳುವ ಈ ಸದಾವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಪ್ರಜಾಸೇವಾ ಇಲಾಖೆಯ ವತಿಯಿಂದ ಸಾರ್ವಜನಿಕರ ಕುಂದುಕೊರತೆ ಹಾಗೂ ಅಹವಾಲುಗಳನ್ನು ನೇರವಾಗಿ ಸ್ವೀಕರಿಸುವ ಉದ್ದೇಶದಿಂದ ಕೌಂಟರ್ ಮಳಿಗೆಗಳನ್ನು ತೆರೆಯಲಾಗಿತ್ತು. ನಾಗರಿಕರು ಭಾಗವಹಿಸಿ, ತಮ್ಮ ಪ್ರದೇಶದ ಮೂಲಸೌಕರ್ಯ, ಕುಡಿಯುವ ನೀರು, ರಸ್ತೆ ದುರಸ್ತಿ ಹಾಗೂ ವಿವಿಧ ಸರ್ಕಾರಿ ಯೋಜನೆಗಳ ಸೌಲಭ್ಯಗಳಿಗೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಮನವಿ ಸಲ್ಲಿಸಿದರು.

ಸಾರ್ವಜನಿಕರಿಂದ ಸ್ವೀಕರಿಸಲಾದ ಪ್ರತಿಯೊಂದು ಅರ್ಜಿಯನ್ನು ಪರಿಶೀಲಿಸಿದ ಅಧಿಕಾರಿಗಳು, ಅವುಗಳನ್ನು ಐಪಿಜಿಆರ್ಎಸ್ ನಲ್ಲಿ ದಾಖಲಿಸಿ ಸಂಬಂಧಪಟ್ಟ ಇಲಾಖೆಗಳಿಗೆ ರವಾನಿಸಿ ಕಾಲಮಿತಿಯೊಳಗೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಜನರ ಸಮಸ್ಯೆಗಳನ್ನು ತ್ವರಿತವಾಗಿ ಬಗೆಹರಿಸಲು ಇಂತಹ ನೇರ ಸಂಪರ್ಕ ವೇದಿಕೆಗಳು ಸಹಕಾರಿಯಾಗಲಿವೆ ಎಂದು ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದರು.

ಈ ವೇಳೆ ಮಹಾನಗರ ಪಾಲಿಕೆಯ ಆಯುಕ್ತ ಪಿ.ಎಸ್. ಮಂಜುನಾಥ್ ಸೇರಿದಂತೆ ಮಹಾನಗರ ಪಾಲಿಕೆಯ ಸದಸ್ಯರು, ಬಳ್ಳಾರಿ ತಾಲ್ಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ಸಾರ್ವಜನಿಕರು ಹಾಗೂ ಇನ್ನಿತರರಿದ್ದರು.


Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles