ಬೆಳಗಾಯಿತು ವಾರ್ತೆ | www.belagayithu.in
ಬಳ್ಳಾರಿ: ಜಿಲ್ಲೆಯಲ್ಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನರ ಕಲ್ಯಾಣಕ್ಕೆ ಅಧಿಕಾರಿಗಳು ಆದ್ಯತೆ ನೀಡಬೇಕು ಎಂದು ಕರ್ನಾಟಕ ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗದ ಸನ್ಮಾನ್ಯ ಅಧ್ಯಕ್ಷರಾದ ಡಾ. ಮೂರ್ತಿ ಎಲ್. ಅವರು ಹೇಳಿದರು.
ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗಾಗಿ ಕೈಗೊಂಡಿರುವ ಕಾರ್ಯಕ್ರಮಗಳ ಕುರಿತು ನಗರದ ಜಿಲ್ಲಾ ಪಂಚಾಯತ್‌ನ ನಜೀರ್ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಎಸ್‌ಸಿಪಿ/ಟಿಎಸ್‌ಪಿ ಯೋಜನೆಗಳಿಗೆ, ವಿಶೇಷವಾಗಿ ಟಿಎಸ್‌ಪಿ ಅಡಿಯಲ್ಲಿ ಹೆಚ್ಚಿನ ಅನುದಾನ, ಸೌಲಭ್ಯಗಳು ಮತ್ತು ಕಾರ್ಯಕ್ರಮಗಳ ಅವಶ್ಯಕತೆಯಿದೆ. ಯೋಜನೆಗಳ ಅನುಷ್ಠಾನಕ್ಕೆ ಸರಿಯಾದ ಕ್ರಿಯಾ ಯೋಜನೆ ಹಾಗೂ ಹೆಚ್ಚುವರಿ ಅನುದಾನಕ್ಕಾಗಿ ಪ್ರಸ್ತಾವನೆ ಸಲ್ಲಿಸಬೇಕು. ಸರ್ಕಾರ ಹಣ ಕೊಟ್ಟಿಲ್ಲ ಎಂದು ಸುಮ್ಮನೆ ಕೂರಬಾರದು, ಜನಸಂಖ್ಯೆಗೆ ಅನುಗುಣವಾಗಿ ಬೇಡಿಕೆ ಪಟ್ಟಿ ಸಲ್ಲಿಸುವುದು ನಿಮ್ಮ ಕರ್ತವ್ಯ ಎಂದು ತಿಳಿಸಿದರು.
ಯೋಜನೆಗಳ ಪ್ರಗತಿ ವರದಿಯನ್ನು ಕೇವಲ ಕಾಗದದ ಮೇಲೆ ಸೀಮಿತಗೊಳಿಸದೆ, ಕ್ಷೇತ್ರ ಮಟ್ಟದಲ್ಲಿ ಪರಿಶೀಲನೆ ನಡೆಸಬೇಕು. ಎಸ್‌ಸಿ/ಎಸ್ಟಿ ಸಮುದಾಯದ ಕಲ್ಯಾಣಕ್ಕಾಗಿ ಎಷ್ಟು ಸಭೆಗಳನ್ನು ನಡೆಸಲಾಗಿದೆ ಮತ್ತು ಕೈಗೊಂಡಿರುವ ಯೋಜನೆಗಳ ಫಲಿತಾಂಶವೇನು ಎಂಬುದರ ಬಗ್ಗೆ ಆಯೋಗದ ಕಚೇರಿಗೆ ನಿಯಮಿತವಾಗಿ ವರದಿ ಸಲ್ಲಿಸಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಆಯೋಗದ ಸದಸ್ಯರುಗಳಾದ ದಿವಾಕರ.ಎನ್., ಗೀತಾ ಥಾವಂಶಿ, ಕಾರ್ಯದರ್ಶಿ ಡಾ.ಶಿವರಾಮು ಹೆಚ್.ಎಸ್. ಸಂಶೋಧನಾ ಅಧಿಕಾರಿ ಸಿಂಘು ರಘು ಹೆಚ್.ಎಸ್., ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಡಿ.ಪೆನ್ನೇಕರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್, ಬಳ್ಳಾರಿ ವಲಯ ಉಪಅರಣ್ಯ ಸಂರಕ್ಷಣಾಧಿಕಾರಿ ಡಾ.ಕೆ.ಎನ್ ಬಸವರಾಜ, ಮಹಾನಗರ ಪಾಲಿಕೆಯ ಆಯುಕ್ತ ಪಿ.ಎಸ್.ಮಂಜುನಾಥ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು





