ಬೆಳಗಾಯಿತು ವಾರ್ತೆ
ಬಳ್ಳಾರಿ: ಪಡಿತರ ಫಲಾನುಭವಿಗಳಿಗೆ ಅಕ್ಕಿ ಸೇರಿದಂತೆ ಇತರೆ ಆಹಾರ ಧಾನ್ಯಗಳನ್ನು ವಿತರಿಸುವ ಬದಲು ಟಿಬಿಟಿ (ನೇರ ನಗದು ವರ್ಗಾವಣೆ) ಮೂಲಕ ಹಣ ನೀಡುವ ಕೇಂದ್ರ ಸರ್ಕಾರದ ಪ್ರಸ್ತಾಪ ಹಾಗೂ ರಾಜ್ಯ ಸರ್ಕಾರದ ಕಿಟ್ ವಿತರಣೆ ಕ್ರಮವನ್ನು ವಿರೋಧಿಸಿ ಡಿಸೆಂಬರ್ 3ರಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಪಡಿತರ ವಿತರಕರ ಸಂಘದ ರಾಜ್ಯಾಧ್ಯಕ್ಷ ಕೃಷ್ಣಪ್ಪ ತಿಳಿಸಿದರು.
ನಗರದ ಪ್ರವಾಸಿ ಮಂದಿರದಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಪಡಿತರ ವಿತರಕರು ಹಲವು ಸಮಸ್ಯೆ ಹಾಗೂ ಸಂಕಷ್ಟಗಳನ್ನು ಎದುರಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೈಗೊಳ್ಳುತ್ತಿರುವ ನಿರ್ಧಾರಗಳು ವಿತರಕರ ಬದುಕಿಗೆ ಮತ್ತಷ್ಟು ಹೊಡೆತ ನೀಡಲಿವೆ. ಆದ್ದರಿಂದ ಮೊದಲಿನಂತೆಯೇ ಫಲಾನುಭವಿಗಳಿಗೆ ಆಹಾರ ಧಾನ್ಯಗಳನ್ನು ವಿತರಿಸುವ ವ್ಯವಸ್ಥೆ ಮುಂದುವರಿಸಬೇಕು ಎಂದು ಒತ್ತಾಯಿಸಿದರು.
ಸರ್ಕಾರಗಳು ತಮ್ಮ ನಿರ್ಧಾರವನ್ನು ಮರುಪರಿಶೀಲಿಸದಿದ್ದರೆ ದೇಶಾದ್ಯಂತ ಹೋರಾಟದ ಸ್ವರೂಪ ಬದಲಾಗಲಿದೆ ಎಂದು ಎಚ್ಚರಿಸಿದ ಅವರು, ರಾಜ್ಯದ ಎಲ್ಲ ನ್ಯಾಯಬೆಲೆ ಅಂಗಡಿ ಮಾಲೀಕರು ದೆಹಲಿಯ ಪ್ರತಿಭಟನೆಯಲ್ಲಿ ಭಾಗವಹಿಸಿ ಹೋರಾಟವನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.





