ಬೆಳಗಾಯಿತು ವಾರ್ತೆ
ಬಳ್ಳಾರಿ: ಎಸ್‌ಐಆರ್ (ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ) ವಿಚಾರದಲ್ಲಿ ಪ್ರತಿಭಟನೆ ನಡೆಸಿದ ಸಂದರ್ಭದಲ್ಲಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರ ಮೇಲೆ ಪೊಲೀಸರು ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಿರುವ ವಿಧಾನ ಪರಿಷತ್ ಸದಸ್ಯ ವೈ.ಎಂ. ಸತೀಶ್, ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳನ್ನು ಕೂಡಲೇ ಅಮಾನತು ಮಾಡಿ ವಿಚಾರಣೆ ನಡೆಸಬೇಕು ಎಂದು ಆಗ್ರಹಿಸಿದರು.
ನಗರದ ವಾಜಪೇಯಿ ಬಡಾವಣೆಯಲ್ಲಿರುವ ಬಿಜೆಪಿ ಕಚೇರಿಯಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಎಲ್‌ಎ-1 ಮೇಲೆ ಎಫ್‌ಐಆರ್ ದಾಖಲಿಸಿರುವ ಕ್ರಮವನ್ನು ಪ್ರಶ್ನಿಸಿದರು. ಎಸ್‌ಐಆರ್‌ಗೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಿಸಲು ಪೊಲೀಸರಿಗೆ ಯಾವ ಅಧಿಕಾರವಿದೆ ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಒತ್ತಾಯಿಸಿದರು.
ನಿನ್ನೆ ನಡೆದ ಪ್ರತಿಭಟನೆ ವೇಳೆ ಪೊಲೀಸರು ಬಿಜೆಪಿ ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ಮೋಕ ಅವರ ಮೇಲೆ ಹಲ್ಲೆ ನಡೆಸಿ ಗಾಯಗೊಳಿಸಿದ್ದಾರೆ ಎಂದು ಆರೋಪಿಸಿದ ಸತೀಶ್, ಪ್ರತಿಭಟನೆ ನಡೆಸುವುದು ಪ್ರತಿಯೊಬ್ಬರ ಹಕ್ಕು. ಆದರೆ ಪ್ರತಿಭಟನಾಕಾರರನ್ನು ಗುರಿಯಾಗಿಸಿಕೊಂಡು ಪ್ರಕರಣ ದಾಖಲಿಸುವುದು ಸರಿಯಲ್ಲ ಎಂದರು.
“ಬಿಎಲ್‌ಎ-1 ವಿರುದ್ಧ ದಾಖಲಿಸಿರುವ ಎಫ್‌ಐಆರ್‌ನ್ನು ಕೂಡಲೇ ಹಿಂಪಡೆಯಬೇಕು. ಘಟನೆಗೆ ಸಂಬಂಧಿಸಿದಂತೆ ಬ್ರೂಸ್‌ಪೇಟೆ ಪೊಲೀಸ್ ಠಾಣೆಯ ಸಿಪಿಐ ಹಾಗೂ ಎಪಿಎಂಸಿ ಪೊಲೀಸ್ ಠಾಣೆಯ ಸಿಪಿಐ ಅವರನ್ನು ಅಮಾನತು ಮಾಡಿ ವಿಚಾರಣೆ ನಡೆಸಬೇಕು” ಎಂದು ಆಗ್ರಹಿಸಿದರು.
ಬಳ್ಳಾರಿಯಲ್ಲಿ ಕೆಲ ಪೊಲೀಸ್ ಅಧಿಕಾರಿಗಳು ಕರ್ತವ್ಯ ನಿರ್ವಹಿಸುವ ಬದಲು ಹೆಲ್ಮೆಟ್ ತಪಾಸಣೆಗೆ ನಿಲ್ಲುವಂತಹ ಪರಿಸ್ಥಿತಿ ಇದೆ ಎಂದು ಟೀಕಿಸಿದ ಅವರು, ಪೊಲೀಸರು ಕಾನೂನು ಮತ್ತು ನಿಯಮಗಳಂತೆ ಕರ್ತವ್ಯ ನಿರ್ವಹಿಸಬೇಕು ಎಂದು ಹೇಳಿದರು.
ಮಾಜಿ ಶಾಸಕ ಸೋಮಶೇಖರ್ ರೆಡ್ಡಿ ಮಾತನಾಡಿ, ನಿನ್ನೆ ಪ್ರತಿಭಟನೆ ವೇಳೆ ಪೊಲೀಸರು ನಡೆಸಿದ್ದಾರೆ ಎನ್ನಲಾದ ದೌರ್ಜನ್ಯ ಸರಿಯಲ್ಲ. ಬಿಜೆಪಿ ಜಿಲ್ಲಾಧ್ಯಕ್ಷರನ್ನು ಗುರಿಯಾಗಿಸಿಕೊಂಡು ಕ್ರಮ ಕೈಗೊಳ್ಳಲಾಗಿದೆ ಎಂದು ಆರೋಪಿಸಿದರು.
ಪೊಲೀಸರು ಯಾವುದೇ ಪ್ರಕರಣ ದಾಖಲಿಸುವ ಮುನ್ನ ಅದರ ಬಗ್ಗೆ ಎಚ್ಚರಿಕೆಯಿಂದ ಪರಿಶೀಲಿಸಬೇಕು. ರಾಜಕೀಯ ಒತ್ತಡಕ್ಕೆ ಮಣಿದು ಪ್ರಕರಣ ದಾಖಲಿಸಿದರೆ, ಪೊಲೀಸರು ಒಂದು ಪಕ್ಷದ ಪರವಾಗಿ ಕೆಲಸ ಮಾಡುತ್ತಿದ್ದಾರೆ ಎಂಬ ಆರೋಪಕ್ಕೆ ಕಾರಣವಾಗುತ್ತದೆ ಎಂದು ಅವರು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ಮೋಕ, ಮಾಜಿ ಸಂಸದ ಪಕ್ಕಿರಪ್ಪ, ರಾಮಲಿಂಗಪ್ಪ, ರವಿಕುಮಾರ್ ಸೇರಿದಂತೆ ಪಕ್ಷದ ಮುಖಂಡರು ಉಪಸ್ಥಿತರಿದ್ದರು.





