ಬಳ್ಳಾರಿ: ರಾಜ್ಯದ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ್ ಅರಸು ಅವರ ಜಯಂತ್ಯೋತ್ಸವ ಕಾರ್ಯಕ್ರಮ ವನ್ನು ಸೆ. 23ರಂದು ರಾಯಚೂರಿನ ವೀರಶೈವ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಸಾಮಾಜಿಕ ಧಾರ್ಮಿಕ ಸಾಂಸ್ಕೃತಿಕ ಸಂಘದ ರಾಜ್ಯಾಧ್ಯಕ್ಷ ಸೈಯದ್ ಕೆ. ಗುತ್ತೇದಾರ್ ಅವರು ತಿಳಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಇರುವ ಪತ್ರಿಕಾ ಭವನದಲ್ಲಿ ಶನಿವಾರ ಆಯೋಜನೆ ಮಾಡಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.
ಈ ಕಾರ್ಯಕ್ರಮದಲ್ಲಿ ರಾಜ್ಯದ ಐದು ವಿಭಾಗದಲ್ಲಿ 224 ವಿಧಾನಸಭಾ ಕ್ಷೇತ್ರದ ವಿವಿಧ ರಂಗದಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನ ಹಾಗೂ ಕಲ್ಯಾಣ ಕರ್ನಾಟಕ ವಿಭಾಗ ಮಟ್ಟದ ನೂತನ ಶಾಸಕ ಮತ್ತು ಸಚಿವರಿಗೆ ಅಭಿನಂದನೆ ಸಲ್ಲಿಸುವುದರ ಜೊತೆಗೆ ಡಿ. ದೇವರಾಜ ಅರಸು ರಾಜ್ಯ ಪ್ರಶಸ್ತಿ ನೀಡಿ ಸನ್ಮಾನಿಸಲಾಗುವುದು ಎಂದು ಅವರು ಹೇಳಿದರು.
ಇದೇ ಸಂದರ್ಭದಲ್ಲಿ ಹಿಂದುಳಿದ ವರ್ಗಗಳ ಸಂಘದ ಐದು ಬೇಡಿಕೆಗಳನ್ನು ಈಡೇರಿಸಲು ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಲಾಗುವುದು ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಸಿದ್ದೇಶ್ ವಾಳೂರು, ಸಾಗರ ಗೌಡ,ಪರಶುರಾಮ, ಮಲ್ಲಿಕಾರ್ಜುನ, ವೆಂಕಟರಾಮಣ ಸೇರಿದಂತೆ ಇತರರು ಹಾಜರಿದ್ದರು.
ಬೇಡಿಕೆಗಳು
- ಕಾಂತರಾಜ್ ಆಯೋಗದ ವರದಿ ತಕ್ಷಣ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ವರದಿ ಜಾರಿಗೆ ತರಬೇಕು.
- ಹಿಂದುಳಿದ ವರ್ಗಗಳ 197 ಜಾತಿಗಳಿಗೂ ಅಭಿವೃದ್ಧಿ ನಿಗಮ ಸ್ಥಾಪಿಸಬೇಕು.
- ಲೋಕಸಭೆ ಮತ್ತು ವಿಧಾನ ಸಭೆ ಚುನಾವಣೆಗಳಲ್ಲಿ ಸ್ಥಳೀಯ ಚುನಾವಣೆ ಮಾದರಿಯಲ್ಲಿ ಅತಿ ಹಿಂದುಳಿದ ವರ್ಗದವರಿಗೆ ಮೀಸಲಾತಿ ನೀಡಬೇಕು.
- ರಾಜ್ಯದ 224 ವಿಧಾನ ಸಭಾ ಕ್ಷೇತ್ರಗಳಲ್ಲಿ ಡಿ. ದೇವರಾಜ ಅರಸಃ ಸಮುದಾಯ ಭವನ ಸ್ಥಾಪಿಸಬೇಕು.
- ಹಿಂದುಳಿದ ವರ್ಗಗಳ ಅಭಿವೃದ್ಧಿಗಾಗಿ 10 ಸಾವಿರ ಕೋಟಿ ಸರ್ಕಾರದ ಬಜೆಟ್ ನಲ್ಲಿ ಮೀಸಲಿಡಬೇಕು.