ಲೈಂಗಿಕ ಕಿರುಕುಳ ಆರೋಪ: ದೆಹಲಿಯಲ್ಲಿ ಮುಂದುವರಿದ ಪ್ರತಿಭಟನೆ, ಹಲವರು ವಶಕ್ಕೆ

ಬೆಳಗಾಯಿತು ವಾರ್ತೆ
ನವದೆಹಲಿ: ಯುವ ಪತ್ರಕರ್ತೆಯರೊಂದಿಗೆ ದೆಹಲಿ ಪೊಲೀಸ್ ಸಿಬ್ಬಂದಿ ಅಸಭ್ಯವಾಗಿ ವರ್ತಿಸಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಪ್ರತಿಭಟನೆ ಮುಂದುವರಿದಿದ್ದು, ಪಾರ್ಲಿಮೆಂಟ್ ಸ್ಟ್ರೀಟ್ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸುತ್ತಿದ್ದ ಹಲವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಅಕ್ಟೋಬರ್ 3ರಂದು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆ ವೇಳೆ, ಎಸಿಪಿ ಸೇರಿದಂತೆ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮೊಂದಿಗೆ ಲೈಂಗಿಕವಾಗಿ ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ಮೂವರು ಯುವ ಪತ್ರಕರ್ತೆಯರು ಆರೋಪಿಸಿ ದೂರು ಸಲ್ಲಿಸಿದ್ದರು.
ಈ ದೂರುಗಳ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸುವ ಉದ್ದೇಶದಿಂದ ಪ್ರಕರಣವನ್ನು ದೆಹಲಿ ಪೊಲೀಸ್ ಕ್ರೈಂ ಬ್ರಾಂಚ್‌ಗೆ ವರ್ಗಾಯಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆದರೆ, ದೂರು ಸ್ವೀಕರಿಸಿ 48 ಗಂಟೆಗಳಾದರೂ ಎಫ್‌ಐಆರ್ ದಾಖಲಿಸದೆ ಕ್ರೈಂ ಬ್ರಾಂಚ್‌ಗೆ ವರ್ಗಾಯಿಸಿರುವ ಕ್ರಮಕ್ಕೆ ಪ್ರತಿಭಟನಾಕಾರರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
“ಪೊಲೀಸರು ನಮ್ಮೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದಾರೆ. ದೂರು ನೀಡಿ 48 ಗಂಟೆಗಳಾದರೂ ಅದರ ಸ್ಥಿತಿ ಏನೆಂಬುದು ತಿಳಿದಿಲ್ಲ. ಈ ಬಗ್ಗೆ ಮಾಹಿತಿ ಪಡೆಯಲು ನಾವು ಪೊಲೀಸ್ ಠಾಣೆಗೆ ಬಂದಿದ್ದೇವೆ” ಎಂದು ಪ್ರತಿಭಟನಾಕಾರರೊಬ್ಬರು ತಿಳಿಸಿದ್ದಾರೆ.
ಇದೇ ವೇಳೆ, ದೆಹಲಿ ಪೊಲೀಸ್ ಸಿಬ್ಬಂದಿ ವಿರುದ್ಧ ಆರೋಪ ಮಾಡಿರುವ ಮಹಿಳಾ ಪತ್ರಕರ್ತೆಯರಿಗೆ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಬೆಂಬಲ ವ್ಯಕ್ತಪಡಿಸಿದೆ. ಆರೋಪಿಗಳ ವಿರುದ್ಧ ತಕ್ಷಣ ಎಫ್‌ಐಆರ್ ದಾಖಲಿಸಿ, ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದು ಸಿಜೆಪಿ ವಕ್ತಾರ ಸೌರವ್ ದಾಸ್ ಆಗ್ರಹಿಸಿದ್ದಾರೆ.
“ಆರೋಪಿ ವಿವೇಕ್ ಭಗತ್ ಅವರನ್ನು ದೆಹಲಿ ಪೊಲೀಸರು ರಕ್ಷಿಸುತ್ತಿದ್ದಾರೆ. ಎಫ್‌ಐಆರ್ ದಾಖಲಿಸಲು ನಿರಾಕರಿಸುತ್ತಿದ್ದಾರೆ. ಲಿಖಿತ ದೂರು ಹಾಗೂ ವಿಡಿಯೊಗಳನ್ನು ಪರಿಶೀಲಿಸುವುದಾಗಿ ಅಧಿಕಾರಿಗಳು ಹೇಳುತ್ತಿದ್ದಾರೆ” ಎಂದು ಸೌರವ್ ದಾಸ್ ‘ಎಕ್ಸ್‌’ನಲ್ಲಿ ಆರೋಪಿಸಿದ್ದಾರೆ.
ಆರೋಪಗಳ ಕುರಿತು ಪೊಲೀಸರು ಕೈಗೊಳ್ಳುವ ಮುಂದಿನ ಕ್ರಮದತ್ತ ಇದೀಗ ಎಲ್ಲರ ಗಮನ ನೆಟ್ಟಿದೆ.


Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles