ಬೆಳಗಾಯಿತು ವಾರ್ತೆ
ಬಳ್ಳಾರಿ: ಮಾದಕ ವಸ್ತು ಸೇವನೆ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಮದ್ಯಪಾನ ಮಾಡಿ ಸಾರ್ವಜನಿಕರಿಗೆ ತೊಂದರೆ ಉಂಟುಮಾಡುವವರ ವಿರುದ್ಧ ಬಳ್ಳಾರಿ ಜಿಲ್ಲಾ ಪೊಲೀಸ್ ಇಲಾಖೆ ವಿಶೇಷ ಕಾರ್ಯಾಚರಣೆ ನಡೆಸಿದ್ದು, 174 ಮಂದಿಯನ್ನು ವಶಕ್ಕೆ ಪಡೆದಿದೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸುಮನ್ ಡಿ. ಪೆನ್ನೇಕರ್ ಅವರ ನಿರ್ದೇಶನದಂತೆ ಜುಲೈ 10 ಮತ್ತು 11ರಂದು ಎರಡು ದಿನಗಳ ಕಾಲ ಬಳ್ಳಾರಿ ನಗರ ವ್ಯಾಪ್ತಿಯಲ್ಲಿ ವಿಶೇಷ ಕಾರ್ಯಾಚರಣೆ ಹಮ್ಮಿಕೊಳ್ಳಲಾಗಿತ್ತು. ರಸ್ತೆ ಬದಿಗಳು, ಉದ್ಯಾನವನಗಳು, ಶಾಲಾ ಮೈದಾನಗಳು, ನಗರದ ಹೊರವಲಯದ ಖಾಸಗಿ ಲೇಔಟ್‌ಗಳು ಸೇರಿದಂತೆ ವಿವಿಧ ಸಾರ್ವಜನಿಕ ಸ್ಥಳಗಳಲ್ಲಿ ದಾಳಿ ನಡೆಸಲಾಯಿತು.
ಕಾರ್ಯಾಚರಣೆ ವೇಳೆ 174 ಮಂದಿಯನ್ನು ವಶಕ್ಕೆ ಪಡೆದು, ಅವರಲ್ಲಿ 111 ಮಂದಿಯನ್ನು ಮಾದಕ ವಸ್ತು ಸೇವನೆ ಮಾಡಿರುವ ಶಂಕೆಯ ಮೇರೆಗೆ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಯಿತು. ಪರೀಕ್ಷೆಯ ಫಲಿತಾಂಶದಲ್ಲಿ ನಾಲ್ವರು ಮಾದಕ ವಸ್ತು ಸೇವಿಸಿರುವುದು ದೃಢಪಟ್ಟಿದ್ದು, ಅವರ ವಿರುದ್ಧ ಎನ್‌ಡಿಪಿಎಸ್ ಕಾಯ್ದೆಯ ಕಲಂ 27(ಬಿ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಉಳಿದ 170 ಮಂದಿಯ ವಿರುದ್ಧ ಕರ್ನಾಟಕ ರಾಜ್ಯ ಪೊಲೀಸ್ ಕಾಯ್ದೆಯಡಿ ಲಘು ಪ್ರಕರಣಗಳನ್ನು ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗಿದೆ.
ನಗರದ ವಿವಿಧ ಪ್ರದೇಶಗಳಲ್ಲಿ ಗುಂಪು ಸೇರಿ ಮದ್ಯಪಾನ ಹಾಗೂ ಮಾದಕ ವಸ್ತು ಸೇವನೆ ನಡೆಯುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಈ ಕಾರ್ಯಾಚರಣೆ ಕೈಗೊಳ್ಳಲಾಗಿದೆ. ಇಂತಹ ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗುವವರ ವಿರುದ್ಧ ಮುಂದೆಯೂ ನಿರಂತರ ಕಾರ್ಯಾಚರಣೆ ನಡೆಸಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಇಲಾಖೆ ಎಚ್ಚರಿಕೆ ನೀಡಿದೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸುಮನ್ ಡಿ. ಪೆನ್ನೇಕರ್ ಅವರು, ಸಾರ್ವಜನಿಕ ಸ್ಥಳಗಳಲ್ಲಿ ಮದ್ಯಪಾನ ಮತ್ತು ಮಾದಕ ವಸ್ತು ಸೇವನೆ ಮಾಡುವವರ ವಿರುದ್ಧ ಕಾರ್ಯಾಚರಣೆ ಮುಂದುವರಿಯಲಿದ್ದು, ಸಾರ್ವಜನಿಕರು ಇಂತಹ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡುವ ಮೂಲಕ ಪೊಲೀಸರಿಗೆ ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ.





