ಬರ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ವಿಫಲ: ಜೆಡಿಎಸ್ ಆರೋಪ


ರೈತರ ಸಾಲ ಮನ್ನಾ ಮಾಡಿ, ಎಕರೆಗೆ ₹30 ಸಾವಿರ ಪರಿಹಾರ ನೀಡಿ: ಮೀನಳ್ಳಿ ತಾಯಣ್ಣ ಒತ್ತಾಯ
ಬೆಳಗಾಯಿತು ವಾರ್ತೆ
ಬಳ್ಳಾರಿ: ರೈತರ ಸಾಲವನ್ನು ಸಂಪೂರ್ಣ ಮನ್ನಾ ಮಾಡಬೇಕು, ಪ್ರತಿ ಎಕರೆಗೆ ₹30 ಸಾವಿರ ಪರಿಹಾರ ನೀಡಬೇಕು, ಗ್ರಾಮೀಣ ಭಾಗದ ಕೂಲಿಕಾರರಿಗೆ ಉದ್ಯೋಗ ಕಲ್ಪಿಸಬೇಕು ಹಾಗೂ ಜನರು ಮತ್ತು ಜಾನುವಾರುಗಳಿಗೆ ಸಮರ್ಪಕ ನೀರು ಮತ್ತು ಮೇವು ಒದಗಿಸಬೇಕು ಎಂದು ಆಗ್ರಹಿಸಿ ಜೆಡಿಎಸ್ ಜಿಲ್ಲಾ ಸಮಿತಿ ವತಿಯಿಂದ ಶುಕ್ರವಾರ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಜೆಡಿಎಸ್ ಜಿಲ್ಲಾಧ್ಯಕ್ಷ ಮೀನಳ್ಳಿ ತಾಯಣ್ಣ ಅವರ ನೇತೃತ್ವದಲ್ಲಿ ನಗರದ ಜೆಡಿಎಸ್ ಜಿಲ್ಲಾ ಕಚೇರಿಯಿಂದ ರಾಯಲ್ ವೃತ್ತದವರೆಗೆ ಮೆರವಣಿಗೆ ನಡೆಸಿದ ಕಾರ್ಯಕರ್ತರು, ಬಳಿಕ ಮಾನವ ಸರಪಳಿ ನಿರ್ಮಿಸಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ನಂತರ ಜಿಲ್ಲಾಧಿಕಾರಿ ಕಚೇರಿಗೆ ತೆರಳಿದ ಪ್ರತಿಭಟನಾಕಾರರು ವಿವಿಧ ಬೇಡಿಕೆಗಳ ಫಲಕಗಳನ್ನು ಪ್ರದರ್ಶಿಸಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಬಳಿಕ ತಮ್ಮ ಬೇಡಿಕೆಗಳ ಮನವಿ ಪತ್ರವನ್ನು ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಮುಖ್ಯ ಕಾರ್ಯದರ್ಶಿಗಳಿಗೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಮೀನಳ್ಳಿ ತಾಯಣ್ಣ, ಪ್ರಸಕ್ತ ವರ್ಷ ಮಳೆ ಕೊರತೆಯಿಂದ ರಾಜ್ಯದಲ್ಲಿ ಬರ ಪರಿಸ್ಥಿತಿ ನಿರ್ಮಾಣವಾಗಿದ್ದು, ಜನರು ಹಾಗೂ ಜಾನುವಾರುಗಳು ನೀರಿನ ಸಮಸ್ಯೆ ಎದುರಿಸುತ್ತಿವೆ. ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಬಿತ್ತನೆ ಮಾಡಿರುವ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಹೇಳಿದರು.
ಕೇವಲ ಬರಪೀಡಿತ ತಾಲೂಕುಗಳನ್ನು ಘೋಷಣೆ ಮಾಡಿದರೆ ಸಾಲದು. ಕೂಡಲೇ ಬರ ಪರಿಹಾರ ಕಾಮಗಾರಿಗಳನ್ನು ಆರಂಭಿಸಿ, ರೈತರಿಗೆ ಪ್ರತಿ ಎಕರೆಗೆ ₹30 ಸಾವಿರ ಪರಿಹಾರ ನೀಡಬೇಕು. ರೈತರ ಸಾಲವನ್ನು ಸಂಪೂರ್ಣ ಮನ್ನಾ ಮಾಡಬೇಕು. ಸರ್ಕಾರದ ವಿರುದ್ಧ ವ್ಯಾಪಕ ವಿರೋಧ ವ್ಯಕ್ತವಾದ ಬಳಿಕ ಎಕರೆಗೆ ₹2,500 ಪರಿಹಾರ ಘೋಷಿಸಿರುವುದು ರೈತರ ಸಂಕಷ್ಟಕ್ಕೆ ಸಮರ್ಪಕ ಸ್ಪಂದನೆಯಲ್ಲ ಎಂದು ಆಕ್ಷೇಪಿಸಿದರು.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ರೈತರ ಸಮಸ್ಯೆಗಳ ಬಗ್ಗೆ ನಿರ್ಲಕ್ಷ್ಯ ವಹಿಸುತ್ತಿದೆ ಎಂದು ಆರೋಪಿಸಿದ ಅವರು, ಸರ್ಕಾರ ತನ್ನ ನಿಲುವು ಬದಲಿಸದಿದ್ದರೆ ರಾಜ್ಯಾದ್ಯಂತ ನಡೆಯುವ ಪ್ರತಿಭಟನೆಗಳ ಸ್ವರೂಪ ಬದಲಾಗಲಿದೆ ಎಂದು ಎಚ್ಚರಿಸಿದರು.
ಜೆಡಿಎಸ್ ರಾಜ್ಯ ಯುವ ಘಟಕದ ಕಾರ್ಯದರ್ಶಿ ರಾಜೂ ನಾಯಕ್ ಮಾತನಾಡಿ, ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಅವಧಿಯಲ್ಲಿ ರೈತರ ಪರ ಹಲವು ಕ್ರಮಗಳನ್ನು ಕೈಗೊಳ್ಳಲಾಗಿತ್ತು. ರೈತರ ₹26 ಸಾವಿರ ಕೋಟಿ ಸಾಲ ಮನ್ನಾ ಮಾಡಿರುವುದು ಐತಿಹಾಸಿಕ ಕ್ರಮವಾಗಿದೆ ಎಂದು ಹೇಳಿದರು.
ರೈತ ಮೋರ್ಚಾ ಜಿಲ್ಲಾಧ್ಯಕ್ಷ ಲಕ್ಷ್ಮೀಕಾಂತ್ ರೆಡ್ಡಿ ಮಾತನಾಡಿ, ರೈತ ದೇಶದ ಬೆನ್ನೆಲುಬು ಎಂದು ಹೇಳುವುದು ಕೇವಲ ವೇದಿಕೆಗಳಿಗೆ ಸೀಮಿತವಾಗಿದೆ. ರಾಜ್ಯ ಸರ್ಕಾರ ರೈತರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿದರು.
ಪ್ರತಿಭಟನೆಯಲ್ಲಿ ಜೆಡಿಎಸ್ ನಗರ ಘಟಕದ ಅಧ್ಯಕ್ಷ ಹೊನ್ನೂರು ಸ್ವಾಮಿ (ವಂಡ್ರಿ), ಎಸ್ಟಿ ಘಟಕದ ಜಿಲ್ಲಾಧ್ಯಕ್ಷ ಅದ್ದಿಗೇರಿ ರಾಮಣ್ಣ, ಎಸ್ಸಿ ಮೋರ್ಚಾ ಅಧ್ಯಕ್ಷ ವಸಂತಕುಮಾರ್, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಪುಷ್ಪಾ, ಮಾಧ್ಯಮ ಸಂಚಾಲಕ ರವಿಕುಮಾರ್ ಮೀನಳ್ಳಿ, ಜಮೀಲಾ, ಮೇಘರಾಜ್, ರಾಜೂ ಹೊನ್ನಳ್ಳಿ, ಬಸವ ಅಹಂಬಾವಿ, ರುದ್ರಪ್ಪ, ಚಾಗನೂರು ನಾಗರಾಜ್, ರಾಮಾಂಜಿನಿ ಸೇರಿದಂತೆ ನೂರಾರು ಕಾರ್ಯಕರ್ತರು ಹಾಗೂ ರೈತರು ಭಾಗವಹಿಸಿದ್ದರು.


Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles