ಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಕಲ್ಪಿಸುವುದು ಸರ್ಕಾರದ ಗುರಿ


ಬೆಳಗಾಯಿತು ವಾರ್ತೆ
ಬಳ್ಳಾರಿ: ಸರ್ಕಾರದ ಸೇವೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ಉದ್ದೇಶದಿಂದ ಮುಖ್ಯಮಂತ್ರಿ ನೇತೃತ್ವದಲ್ಲಿ ವಿನೂತನ ಕಾರ್ಯಕ್ರಮಗಳನ್ನು ಜಾರಿಗೊಳಿಸಲಾಗುತ್ತಿದೆ. ಪ್ರಜಾಸೇವೆ ಇಲಾಖೆಯ ಮೂಲಕ ಸಾರ್ವಜನಿಕರ ಅರ್ಜಿಗಳನ್ನು 21 ದಿನಗಳೊಳಗೆ ವಿಲೇವಾರಿ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಮಾಜಿ ಸಚಿವ ಹಾಗೂ ಹಾಲಿ ಶಾಸಕ ಬಿ. ನಾಗೇಂದ್ರ ಅವರು ಹೇಳಿದರು.
ಪ್ರತಿ ತಿಂಗಳ 2ನೇ ಮತ್ತು 4ನೇ ಶನಿವಾರ ಆಂದೋಲನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಸಾರ್ವಜನಿಕರ ವಿವಿಧ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ಕಲ್ಪಿಸುವ ಪ್ರಯತ್ನ ಮಾಡಲಾಗುತ್ತಿದೆ. ಈ ಇಲಾಖೆಯು ಇಡೀ ದೇಶಕ್ಕೆ ಮಾದರಿಯಾಗುವ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿದೆ ಎಂದು ಅವರು ತಿಳಿಸಿದರು.
ರಾಜಕೀಯ ದಾಳಿಗಳಿಗೆ ತಿರುಗೇಟು
ಬಿಜೆಪಿಯವರು ನಿಖರ ವಿಷಯಗಳಿಲ್ಲದೆ ಪಾದಯಾತ್ರೆ ನಡೆಸಿದ್ದಾರೆ. ತಮ್ಮನ್ನು ಗುರಿಯಾಗಿಸಿಕೊಂಡು ರಾಜಕೀಯ ಆರೋಪಗಳನ್ನು ಮಾಡಲಾಗುತ್ತಿತ್ತು. ಸರ್ಕಾರಕ್ಕೆ ಮುಜುಗರವಾಗಬಾರದು ಎಂಬ ಕಾರಣಕ್ಕೆ ತಾವು ರಾಜೀನಾಮೆ ನೀಡಿದ್ದಾಗಿ ಅವರು ಹೇಳಿದರು.
ಮುಂಬರುವ ದಿನಗಳಲ್ಲಿ ಬಳ್ಳಾರಿ ಜಿಲ್ಲೆಯ 10ಕ್ಕೆ 10 ಕ್ಷೇತ್ರಗಳಲ್ಲೂ ಕಾಂಗ್ರೆಸ್ ಗೆಲುವು ಸಾಧಿಸಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಇಡಿ, ಸಿಬಿಐ ದಾಳಿಗಳು ರಾಜಕೀಯ ಪ್ರೇರಿತ: ಆರೋಪ
ರಾಜ್ಯದಲ್ಲಿ ನಡೆಯುತ್ತಿರುವ ಜಾರಿ ನಿರ್ದೇಶನಾಲಯ (ಇಡಿ) ಹಾಗೂ ಸಿಬಿಐ ದಾಳಿಗಳು ರಾಜಕೀಯ ಪ್ರೇರಿತವಾಗಿವೆ ಎಂದು ಆರೋಪಿಸಿದ ಅವರು, ಕೇಂದ್ರ ತನಿಖಾ ಸಂಸ್ಥೆಗಳನ್ನು ಬಿಜೆಪಿ ರಾಜಕೀಯ ಉದ್ದೇಶಕ್ಕೆ ಬಳಸಿಕೊಳ್ಳುತ್ತಿದೆ ಎಂದು ದೂರಿದರು. ಆಯ್ದ ವ್ಯಕ್ತಿಗಳನ್ನು ಗುರಿಯಾಗಿಸಿಕೊಂಡು ದಾಳಿಗಳನ್ನು ನಡೆಸಲಾಗುತ್ತಿದೆ. ಈ ವಿಚಾರವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದರು.
ಕಾಂಗ್ರೆಸ್ ಪಕ್ಷದ ಸಚಿವರು ಹಾಗೂ ಶಾಸಕರ ರಕ್ಷಣೆಗೆ ಮುಖ್ಯಮಂತ್ರಿ ಮತ್ತು ಕೆಪಿಸಿಸಿ ಅಧ್ಯಕ್ಷರು ನಿಂತಿದ್ದಾರೆ ಎಂದು ಹೇಳಿದರು.
ಬಳ್ಳಾರಿ ಅಭಿವೃದ್ಧಿಗೆ ರಾಜ್ಯಮಟ್ಟದ ಸಮಾವೇಶ
ಬಳ್ಳಾರಿ ಜಿಲ್ಲೆಯ ಅಭಿವೃದ್ಧಿಯ ಹಿತದೃಷ್ಟಿಯಿಂದ ರಾಜ್ಯಮಟ್ಟದ ಸಮಾವೇಶ ಆಯೋಜಿಸಲು ಚಿಂತನೆ ನಡೆಸಲಾಗಿದೆ. ಪಕ್ಷದ ಹಿರಿಯರ ಅನುಮತಿ ಪಡೆದು ಸಮಾವೇಶ ನಡೆಸಲಾಗುವುದು. ಇದು ಯಾವುದೇ ರಾಜಕೀಯ ಲಾಭಕ್ಕಾಗಿ ನಡೆಸುವ ಕಾರ್ಯಕ್ರಮವಲ್ಲ; ಜಿಲ್ಲೆಯ ಜನರ ಅಭಿವೃದ್ಧಿಯೇ ಕಾಂಗ್ರೆಸ್ ಸರ್ಕಾರದ ಪ್ರಮುಖ ಗುರಿಯಾಗಿದೆ ಎಂದು ಹೇಳಿದರು.
ಬಿಜೆಪಿ ನಡೆಸಿದ ಪಾದಯಾತ್ರೆಗೆ ಸರ್ಕಾರ ಸಂಪೂರ್ಣ ಸಹಕಾರ ನೀಡಿತ್ತು. ಸಮಾವೇಶಕ್ಕೆ ಮುನ್ಸಿಪಲ್ ಮೈದಾನ ನೀಡುವ ವಿಚಾರದಲ್ಲೂ ಜಿಲ್ಲಾಡಳಿತ ಯಾವುದೇ ಅಡ್ಡಿಪಡಿಸಿಲ್ಲ. ಎರಡು ದಿನಗಳಲ್ಲೇ ಅವರ ಬೇಡಿಕೆಗೆ ಜಿಲ್ಲಾಡಳಿತ ಸ್ಪಂದಿಸಿದೆ. ಸಣ್ಣಪುಟ್ಟ ವಿಚಾರಗಳಲ್ಲೂ ಕಾಂಗ್ರೆಸ್ ಸರ್ಕಾರ ನೀಚ ರಾಜಕಾರಣ ಮಾಡಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.


Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles