ಬೆಳಗಾಯಿತು ವಾರ್ತೆ| www.belagayithu.in
ಬೆಂಗಳೂರು: SSLC ಹಿಂದಿ ಪರೀಕ್ಷೆಗೆ ಅಂಕಗಳ ಬದಲು ಗ್ರೇಡ್ ನೀಡುವ ರಾಜ್ಯ ಸರ್ಕಾರದ ನಿರ್ಧಾರ ಮರುಪರಿಶೀಲಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿಗೆ ರಾಜ್ಯಪಾಲರು ಪತ್ರ ಬರೆದಿರುವ ವಿಚಾರವೀಗ ಕರ್ನಾಟಕ ರಕ್ಷಣಾ ವೇದಿಕೆಯ ಆಕ್ರೋಶಕ್ಕೆ ಕಾರಣವಾಗಿದೆ. ಈ ಸಂಬಂಧ ಸೋಮವಾರ ಬೆಳಗ್ಗೆ 11 ಗಂಟೆಗೆ ಲೋಕಭವನ ಮುತ್ತಿಗೆಗೆ ಕರವೇ ಮುಂದಾಗಿದ್ದು, ರಾಜ್ಯದ ಮೂಲೆ ಮೂಲೆಗಳಿಂದ ಕಾರ್ಯಕರ್ತರು ಆಗಮಿಸಲಿದ್ದಾರೆ ಎಂದು ಸಂಘಟನೆಯ ರಾಜ್ಯಾಧ್ಯಕ್ಷ ನಾರಾಯಣಗೌಡ ತಿಳಿಸಿದ್ದಾರೆ.
ರಾಜ್ಯಪಾಲರ ಪತ್ರದ ಬಗ್ಗೆ ಕಿಡಿ ಕಾರಿರುವ ನಾರಾಯಣಗೌಡ, ಈ ಹಸ್ತಕ್ಷೇಪ ಒಕ್ಕೂಟ ವ್ಯವಸ್ಥೆಯನ್ನು ಅಣಕಿಸುವಂತಿದೆ. ನಿಮ್ಮ ಅಧಿಕಪ್ರಸಂಗವನ್ನು ಕರ್ನಾಟಕದ ಜನತೆ ಒಪ್ಪಿಕೊಳ್ಳುವುದಿಲ್ಲ. ರಾಜ್ಯಪಾಲರು ಸರ್ಕಾರದ ಪದನಿಮಿತ್ತ ಮುಖ್ಯಸ್ಥರು ಎಂಬುದನ್ನು ನೀವು ಮರೆತಿದ್ದೀರಿ. ನೀವು ನಮ್ಮಿಂದ ನೇರವಾಗಿ ಆಯ್ಕೆಯಾದ ಜನಪ್ರತಿನಿಧಿಯಲ್ಲ. ಒಂದು ಸರ್ಕಾರ ಬಹುಮತದೊಂದಿಗೆ ಸದೃಢವಾಗಿ ಕಾರ್ಯ ನಿರ್ವಹಿಸುತ್ತಿರುವಾಗ ಈ ರೀತಿ ಮಾಡೋದು ತಪ್ಪು. ದೈನಂದಿನ ಆಡಳಿತದಲ್ಲಿ ಮೂಗು ತೂರಿಸಲು ನಿಮಗೆ ಯಾವುದೇ ನೈತಿಕ ಅಧಿಕಾರವಿಲ್ಲ, ಸಾಂವಿಧಾನಿಕ ಹೊಣೆಗಾರಿಕೆಯಿಲ್ಲ. ಅದು ನಿಮ್ಮ ವ್ಯಾಪ್ತಿಯ ಕೆಲಸವೂ ಅಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.





