‘ಅಭಿನಯ ಶಾರದೆ’ ಜಯಂತಿ ಇನ್ನಿಲ್ಲ

    0
    264

    ಬೆಂಗಳೂರು: ಅಭಿನಯ ಶಾರದೆ ಎಂದೇ ಖ್ಯಾತನಾಮರಾಗಿದ್ದ ಹಿರಿಯ ನಟಿ ಜಯಂತಿ ನಿಧನರಾಗಿದ್ದಾರೆ. ಸೋಮವಾರ ನಸುಕಿನ ಜಾವ ಬೆಂಗಳೂರಿನ ತಮ್ಮ ನಿವಾಸದಲ್ಲಿ ಅವರು ಅನಾರೋಗ್ಯದಿಂದ ಕೊನೆಯುಸಿರೆಳೆದಿದ್ದಾರೆ.ಅವರಿಗೆ 76 ವರ್ಷ ವಯಸ್ಸಾಗಿತ್ತು.

    ದಕ್ಷಿಣ ಭಾರತದ ಎಲ್ಲಾ ಭಾμÉಗಳ ಚಿತ್ರಗಳಲ್ಲಿ ನಟಿಸಿದ ಖ್ಯಾತಿಗೆ ಪಾತ್ರರಾಗಿದ್ದ ಜಯಂತಿ, ಕನ್ನಡದಲ್ಲಿಯೇ 190 ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ತೆಲುಗು, ತಮಿಳು, ಮಲಯಾಳಂ, ಹಿಂದಿ ಮತ್ತು ಮರಾಠಿ ಸೇರಿದಂತೆ 500ಕ್ಕೂ ಹೆಚ್ಚು ಚಿತ್ರಗಳಲ್ಲಿ ಹಿರಿಯ ನಟಿ ಜಯಂತಿ ನಟಿಸಿದ್ದಾರೆ. ಕನ್ನಡದ ನಟ ಸಾರ್ವಭೌಮ ಡಾ.ರಾಜ್ ಕುಮಾರ್ ಅವರ ಜೊತೆ 45 ಚಿತ್ರಗಳಲ್ಲಿ ನಟಿಸಿದ ಹೆಗ್ಗಳಿಕೆ ಜಯಂತಿಯವರದ್ದು.

    ಬಳ್ಳಾರಿಯಲ್ಲಿ ಜನನ
    1945ರಲ್ಲಿ ಬಳ್ಳಾರಿಯಲ್ಲಿ ಜನಿಸಿದ್ದ ಜಯಂತಿಯವರ ಮೂಲ ಹೆಸರು ಕಮಲಾ ಕುಮಾರಿ. ಜಯಂತಿಯವರು ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದು ವೈ ಆರ್ ಪುಟ್ಟಸ್ವಾಮಿಯವರ ‘ಜೇನುಗೂಡು’ ಚಿತ್ರದ ಮೂಲಕ. ಅಲ್ಲಿಂದಲೇ ಕಮಲಾ ಕುಮಾರಿ ಜಯಂತಿಯಾಗಿದ್ದು.

    ನಟಿ ಜಯಂತಿಯವರು ತಾವು ನಿರ್ವಹಿಸುವ ಪಾತ್ರಕ್ಕೆ ನ್ಯಾಯ ಒದಗಿಸುತ್ತಿದ್ದರು, ಪಾತ್ರ ಬೇಡುವ ರೀತಿಯಲ್ಲಿ ಅಭಿನಯಿಸುತ್ತಿದ್ದರು.
    ಚಿತ್ರರಂಗದಲ್ಲಿ ಬಹುಬೇಡಿಕೆಯಲ್ಲಿದ್ದಾಗಲೇ ಪುಟ್ಟಣ್ಣ ಕಣಗಾಲ್ ಅವರ ನಾಗರಹಾವು ಚಿತ್ರದ ಒಂದೇ ಒಂದು ಹಾಡಿನಲ್ಲಿ ಕಾಣಿಸಿಕೊಂಡು ಕನ್ನಡ ಚಿತ್ರರಂಗದಲ್ಲಿ ಇತಿಹಾಸ ಸೃಷ್ಟಿಸಿದರು. ಒನಕೆ ಓಬವ್ವನ ಹಾಡಿನಲ್ಲಿ ಜಯಂತಿಯವರ ಅಭಿನಯ ಇಂದಿಗೂ ಜನಪ್ರಿಯ.

    ನಟಿ ಜಯಂತಿ, 6 ಬಾರಿ ಅತ್ಯುತ್ತಮ ನಟಿ ಪ್ರಶಸ್ತಿಗೆ ಭಾಜನರಾಗಿದ್ದರು. 1960 ರಿಂದ 1980ರ ದಶಕದವರೆಗೂ ಚಿತ್ರರಂಗದಲ್ಲಿ ಬೇಡಿಕೆ ಉಳಿಸಿಕೊಂಡಿದ್ದರು. ಎಡಕಲ್ಲು ಗುಡ್ಡದ ಮೇಲೆ, ಮನಸ್ಸಿನಂತೆ ಮಾಂಗಲ್ಯ, ಧರ್ಮ ದಾರಿ ತಪ್ಪಿತ್ತು, ಮಸಣದ ಹೂವು, ಆನಂದ್, ಟುವಿ ಟುವಿ ಟುವಿ ಚಿತ್ರಗಳಿಗೆ ಜಯಂತಿ ರಾಜ್ಯ ಪ್ರಶಸ್ತಿ ಪಡೆದಿದ್ದ ನಟಿ ಜಯಂತಿ, ‘ಮಿಸ್ ಲೀಲಾವತಿ’ ಚಿತ್ರದ ಅಭಿನಯಕ್ಕಾಗಿ ರಾಷ್ಟ್ರ ಪ್ರಶಸ್ತಿಯನ್ನೂ ಮುಡಿಗೇರಿಸಿಕೊಂಡಿದ್ದರು. ಕನ್ನಡದಲ್ಲಿ ಡಾ ರಾಜ್ ಕುಮಾರ್, ವಿಷ್ಣುವರ್ಧನ್, ಉದಯ್ ಕುಮಾರ್, ಕಲ್ಯಾಣ್ ಕುಮಾರ್, ಶ್ರೀನಾಥ್, ಅನಂತ್ ನಾಗ್ ಮೊದಲಾದ ಚಿತ್ರಗಳಲ್ಲಿ ನಟಿಸಿದ್ದರು.

    ಸಿಎಂ ಸೇರಿ ಹಲವು ಗಣ್ಯರ ಸಂತಾಪ
    ಹಿರಿಯ ಕಲಾವಿದೆ, ಅಭಿನಯ ಶಾರದೆ ಜಯಂತಿ ಅವರ ನಿಧನದ ಸುದ್ದಿ ಅತೀವ ದುಃಖ ತಂದಿದೆ. ಚಿತ್ರರಂಗಕ್ಕೆ ಅವರ ಕೊಡುಗೆ ಅಪಾರವಾಗಿದ್ದು, ಕನ್ನಡ ಕಲಾಲೋಕಕ್ಕೆ ತುಂಬಲಾರದ ನಷ್ಟವುಂಟಾಗಿದೆ. ದೇವರು ಅವರ ಆತ್ಮಕ್ಕೆ ಸದ್ಗತಿ ಕರುಣಿಸಲಿ ಎಂದು ಸಿಎಂ ಬಿ ಎಸ್ ಯಡಿಯೂರಪ್ಪ ಸಂತಾಪ ಸೂಚಿಸಿದ್ದಾರೆ.

    ಅದೇ ರೀತಿ ನನ್ನ ಇಷ್ಟದ ನಟಿ ಜಯಂತಿಯವರ ನಿಧನದಿಂದ ತೀವ್ರ ದುಃಖವಾಗುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. ಅದೇ ರೀತಿ ಸರ್ಕಾರದ ಸಚಿವರುಗಳು, ಚಿತ್ರರಂಗದ ಗಣ್ಯರು, ಕಲಾವಿದರು ಹಿರಿಯ ನಟಿಯನ್ನು ಸ್ಮರಿಸಿಕೊಂಡು ಸಂತಾಪ ಸೂಚಿಸಿದ್ದಾರೆ.

    Previous articleಕೊನೆಯುಸಿರೆಳೆದ ಚಂದನವನದ ‘ಅಭಿನಯ ಶಾರದೆ’ – ಜಯಂತಿ
    Next articleಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಬಿ.ಎಸ್. ಯಡಿಯೂರಪ್ಪ

    LEAVE A REPLY

    Please enter your comment!
    Please enter your name here