ಬೆಳಗಾಯಿತು ವಾರ್ತೆ
ಬಳ್ಳಾರಿ: ತುಂಗಭದ್ರಾ ಜಲಾಶಯದಿಂದ ಆಗಸ್ಟ್ 10ರೊಳಗೆ ಎಲ್ಲಾ ನೀರಾವರಿ ಕಾಲುವೆಗಳಿಗೆ ನೀರು ಹರಿಸಿ ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆಗಳಿಗೆ ಅನುಕೂಲ ಕಲ್ಪಿಸಬೇಕು ಎಂದು ತುಂಗಭದ್ರಾ ರೈತ ಸಂಘದ ರಾಜ್ಯಾಧ್ಯಕ್ಷ ದರೂರ್ ಪುರುಷೋತಮ್ ಗೌಡ ಆಗ್ರಹಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ಪತ್ರಿಕಾ ಭವನದಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ತುರ್ತಾಗಿ ನೀರಾವರಿ ಸಲಹಾ ಸಮಿತಿ (ಐಸಿಸಿ) ಸಭೆ ಕರೆಯಬೇಕು. ಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಮತ್ತು ತುಂಗಭದ್ರಾ ಮಂಡಳಿ ಅಧಿಕಾರಿಗಳು ರೈತರ ಹಿತದೃಷ್ಟಿಯಿಂದ ತಕ್ಷಣ ನಿರ್ಧಾರ ಕೈಗೊಂಡು ನೀರಾವರಿ ಕಾಲುವೆಗಳಿಗೆ ನೀರು ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.
ರಾಜ್ಯದ ವಿವಿಧ ಭಾಗಗಳಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತರು ಭತ್ತ ಸೇರಿದಂತೆ ವಿವಿಧ ಬೆಳೆಗಳ ನಾಟಿ ಹಾಗೂ ಬಿತ್ತನೆ ಕಾರ್ಯ ಆರಂಭಿಸಿದ್ದಾರೆ. ಇಂತಹ ಸಂದರ್ಭದಲ್ಲಿ ಕಾಲುವೆಗಳಿಗೆ ನೀರು ಹರಿಸದಿದ್ದರೆ ಬೆಳೆಗಳ ಬೆಳವಣಿಗೆಗೆ ತೊಂದರೆಯಾಗುವ ಸಾಧ್ಯತೆ ಇದ್ದು, ರೈತರು ಸಂಕಷ್ಟಕ್ಕೆ ಸಿಲುಕಲಿದ್ದಾರೆ. ಹೀಗಾಗಿ ಯಾವುದೇ ವಿಳಂಬವಿಲ್ಲದೆ ನೀರಾವರಿ ನೀರು ಬಿಡುಗಡೆ ಮಾಡಬೇಕು ಎಂದು ಅವರು ಹೇಳಿದರು.
ತುಂಗಭದ್ರಾ ಜಲಾನಯನ ಪ್ರದೇಶದಲ್ಲಿ ಸುರಿಯುತ್ತಿರುವ ಮಳೆಯಿಂದ ಜಲಾಶಯಕ್ಕೆ ಒಳಹರಿವು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ ಎಂದು ಅವರು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮೋಕಾ ಸಣ್ಣ ಅಂಜಿನಪ್ಪ, ಶ್ರೀಧರ್, ವೀರಣಗೌಡ, ವೀರಭದ್ರ, ರಾಜಶೇಖರ್, ಬಸವರಾಜ್ ಸ್ವಾಮಿ, ಸಾಗರ್ ಗೌಡ, ಭೀಮಯ್ಯ ಸೇರಿದಂತೆ ರೈತ ಮುಖಂಡರು ಮತ್ತು ರೈತರು ಉಪಸ್ಥಿತರಿದ್ದರು.





