ಬೆಳಗಾಯಿತು ವಾರ್ತೆ
ಬಳ್ಳಾರಿ: ಯುವ ಜನತೆಯು ಮಾದಕ ವಸ್ತುಗಳಿಂದ ದೂರ ಉಳಿದು, ಸದೃಢ ದೇಹದೊಂದಿಗೆ ಉತ್ತಮ ಆರೋಗ್ಯ ಹೊಂದಬೇಕು ಎಂದು ಬಳ್ಳಾರಿ ವಲಯ ಪೊಲೀಸ್ ಮಹಾ ನಿರೀಕ್ಷಕ ಬಿ.ಎಸ್.ಲೋಕೇಶ ಕುಮಾರ್ ಅವರು ಕರೆ ನೀಡಿದರು.
ರಾಜ್ಯ ಪೊಲೀಸ್ ಸುವರ್ಣ ಮಹೋತ್ಸವ ಅಂಗವಾಗಿ ಸದೃಢತೆ ಹಾಗೂ ಡ್ರಗ್ಸ್ ಮುಕ್ತ ಕರ್ನಾಟಕ ಮಾಡುವ ನಿಟ್ಟಿನಲ್ಲಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ನಗರದ ಡಾ.ರಾಜ್‍ಕುಮಾರ್ ರಸ್ತೆಯ ಮುನಿಸಿಪಲ್ ಹೈಸ್ಕೂಲ್ ಮೈದಾನದ ಆವರಣದಿಂದ ಭಾನುವಾರ ಹಮ್ಮಿಕೊಂಡಿದ್ದ ಕರ್ನಾಟಕ ಪೊಲೀಸ್ 10ಕೆ ರನ್ ಓಟ ಸ್ಪರ್ಧೆಗೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.
ಯುವ ಜನತೆಯಲ್ಲಿ ಮತ್ತು ವಿದ್ಯಾರ್ಥಿಗಳಲ್ಲಿ ಮಾದಕ ವಸ್ತುಗಳ ಬಗ್ಗೆ ಪರಿಣಾಮ ಕುರಿತು ಪೊಲೀಸ್ ಇಲಾಖೆಯಿಂದ ಜಾಗೃತಿ ಮೂಡಿಸಲಾಗುತ್ತಿದೆ. ತಮ್ಮ ಸುತ್ತಮುತ್ತಲಿನಲ್ಲಿ ಯಾರಾದರೂ ಡ್ರಗ್ಸ್ ಗಳ ದುಶ್ಚಟಕ್ಕೆ ಒಳಗಾಗಿದ್ದಲ್ಲಿ ಅಥವಾ ವ್ಯಸನಿಗಳು ಕಂಡುಬಂದಲ್ಲಿ ಪೊಲೀಸ್ ಇಲಾಖೆಗೆ ಮಾಹಿತಿ ನೀಡಬೇಕೆಂದು ಹೇಳಿದರು.
ರಾಜ್ಯ ಮತ್ತು ರಾಷ್ಟ್ರವನ್ನು ಡ್ರಗ್ಸ್ ಮುಕ್ತ ಮಾಡುವ ನಿಟ್ಟಿನಲ್ಲಿ ರಾಜ್ಯ ಪೊಲೀಸ್ ಸುವರ್ಣ ಮಹೋತ್ಸವ ಅಂಗವಾಗಿ ರಾಜ್ಯವ್ಯಾಪಿ ಮ್ಯಾರಥಾನ್ ಹಮ್ಮಿಕೊಳ್ಳಲಾಗಿದ್ದು, ಯುವ ಜನತೆಯು ಮಾದಕ ವಸ್ತುಗಳ ವ್ಯಸನಕ್ಕೆ ಬಲಿಯಾಗದೇ ಆರೋಗ್ಯಕರ ಮತ್ತು ಉತ್ತಮ ಜೀವನ ರೂಪಿಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಮಾತನಾಡಿ, ಜಿಲ್ಲಾ ಪೊಲೀಸ್ ಇಲಾಖೆಯು ಡ್ರಗ್ಸ್ ಮುಕ್ತ ಜಿಲ್ಲೆ ಮಾಡುವ ಪಣತೊಟ್ಟಿದ್ದು, ಯುವ ಪೀಳಿಗೆಯು ಮಾದಕ ವಸ್ತುಗಳಿಗೆ ಬಲಿಯಾಗದೆ, ಅವರು ತಮ್ಮ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಭಂಡಾರು ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಯುವಜನತೆಯು ಗಾಂಜಾ, ಮದ್ಯ, ಇತರೆ ಮಾದಕ ವಸ್ತುಗಳ ವ್ಯಸನಕ್ಕೆ ಬಲಿಯಾಗದೆ ಪುಸ್ತಕ ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು. ಯುವ ಸಮೂಹ ಮಾದಕ ವ್ಯಸನಕ್ಕೆ ಒಳಗಾಗದೇ ಸದೃಢ ದೇಹ ಹೊಂದುವುದರ ಕಡೆ ಗಮನ ಹರಿಸಬೇಕು ಎಂದರು.
ಕರ್ನಾಟಕ ಪೊಲೀಸ್ 10ಕೆ ಮ್ಯಾರಥಾನ್ ನಲ್ಲಿ ಶಾಲಾ ಕಾಲೇಜು ವಿದ್ಯಾರ್ಥಿಗಳು, ಯುವಕರು, ಸಾರ್ವಜನಿಕರು ಸೇರಿದಂತೆ ಸುಮಾರು 1500 ಕ್ಕೂ ಹೆಚ್ಚು ಜನ ಮತ್ತು 300 ಜನ ಪೊಲೀಸ್ ಸಿಬ್ಬಂದಿಗಳು ಭಾಗವಹಿಸಿದ್ದರು.
ಮಾದಕ ವಸ್ತುಗಳಿಂದ ದೂರವಿರುತ್ತೇನೆ ಎಂಬ ಪ್ರತಿಜ್ಞಾ ವಿಧಿಯನ್ನು ಸ್ವೀಕಾರ ಮಾಡುವ ಸಹಿ ಸಂಗ್ರಹ ಅಭಿಯಾನ ವಿಶೇಷವಾಗಿತ್ತು. ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರದ ವತಿಯಿಂದ ರಸ್ತೆ ನಿಯಮ ಪಾಲನೆ ಕುರಿತು ಜಾಗೃತಿ ಮೂಡಿಸುವ ವಿಡಿಯೋಗಳನ್ನು ಎಲ್ಇಡಿ ಮೂಲಕ ಪ್ರದರ್ಶಿಸಲಾಯಿತು.
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಆಯುಕ್ತ ಜಿ.ಖಲೀಲ್ ಸಾಬ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನವೀನ್ ಕುಮಾರ್, ಬಳ್ಳಾರಿ ನಗರ ಡಿ.ಎಸ್.ಪಿ ಚಂದ್ರಕಾಂತ ನಂದಾರೆಡ್ಡಿ, ತೋರಣಗಲ್ಲು ವಿಭಾಗ ಡಿ.ಎಸ್.ಪಿ ಪ್ರಸಾದ್ ಗೋಖಲೆ, ಗಾಂಧಿನಗರದ ಪಿ.ಐ ಸಿದ್ದರಾಮೇಶ್ವರ್ ಸೇರಿದಂತೆ ಪೊಲೀಸ್ ಇಲಾಖೆಯ ಅಧಿಕಾರಿಗಳು, ಸಿಬ್ಬಂಧಿ ವರ್ಗದವರು, ವಿದ್ಯಾರ್ಥಿಗಳು, ಯುವಕರು, ಸಾರ್ವಜನಿಕರು ಮತ್ತಿತರರು ಉಪಸ್ಥಿತರಿದ್ದರು.